ಉದ್ದೇಶಿತ ಕರ್ನಾಟಕ ವೀರಶೈವ – ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಗಳ ಅನುದಾನ ಒದಗಿಸಲು ಮತ್ತು ವೀರಶೈವ – ಲಿಂಗಾಯತ ಸಮಾಜವನ್ನು 2ಎ ವರ್ಗಕ್ಕೆ ಸೇರ್ಪಡೆ ಮಾಡುವ ಬೇಡಿಕೆಗೆ ಮುಖ್ಯಮಂತ್ರಿಗಳ ಸಕಾರಾತ್ಮಕ ಸ್ಪಂದನೆ.
– ಡಾ. ಶಾಮನೂರು ಶಿವಶಂಕರಪ್ಪ, ಅಧ್ಯಕ್ಷರು, ಅಖಿಲ ಭಾರತ ವೀರಶೈವ ಮಹಾಸಭಾ
ಬೆಂಗಳೂರು,ನ.20- ಕರ್ನಾಟಕ ವೀರಶೈವ – ಲಿಂಗಾಯತ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲು ನಿರ್ಧಾರ ಕೈಗೊಂಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಅಖಿಲ ಭಾರತ ವೀರಶೈವ ಮಹಾಸಭಾ ಸನ್ಮಾನಿಸಿ, ಗೌರವಿಸುವುದರ ಮೂಲಕ ಕೃತಜ್ಞತೆ ಸಲ್ಲಿಸಿದೆ.
ಇಂದಿಲ್ಲಿ ಮುಖ್ಯಮಂತ್ರಿಗಳ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಹಿರಿಯ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರ ನೇತೃತ್ವದ ಮಹಾಸಭಾದ ಪದಾಧಿಕಾರಿಗಳ ಹಾಗೂ ಸಮಾಜದ ಮುಖಂಡರುಗಳು ಮುಖ್ಯಮಂತ್ರಿಗಳನ್ನು ಗೌರವಿಸಿದರು.
ಯಡಿಯೂರಪ್ಪ ಅವರನ್ನು ಶಾಲು ಹೊದಿಸಿ, ಪೇಟ ತೊಡಿಸಿ ಸನ್ಮಾನಿಸಿದ ಎಸ್ಸೆಸ್, ಉದ್ದೇಶಿತ ಕರ್ನಾಟಕ ವೀರಶೈವ – ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂ. ಗಳ ಅನುದಾನ ಒದಗಿಸುವಂತೆ ಮತ್ತು ವೀರಶೈವ ಲಿಂಗಾಯತ ಸಮಾಜವನ್ನು 2ಎ ವರ್ಗಕ್ಕೆ ಸೇರ್ಪಡೆ ಮಾಡಬೇಕೆಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿಕೊಂಡರು.
ಕರ್ನಾಟಕದಲ್ಲಿ ವೀರಶೈವ ಲಿಂಗಾಯತ ಸಮಾಜದವರು ಅತೀ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದರಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಸಮಾಜವನ್ನು 2ಎ ವರ್ಗಕ್ಕೆ ಸೇರ್ಪಡೆ ಮಾಡಿ ಆದೇಶ ಹೊರಡಿಸುವಂತೆ ಎಸ್ಸೆಸ್ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ವಿನಂತಿಸಿಕೊಂಡರು.
ಸನ್ಮಾನಕ್ಕೆ ಕೃತಜ್ಞತೆ ಸಲ್ಲಿಸಿ, ಸಮಾಜದವರಿಂದ ಮನವಿ ಸ್ವೀಕರಿಸಿ ಮಾತನಾಡಿದ ಯಡಿಯೂರಪ್ಪ, ಉದ್ದೇಶಿತ ನಿಗಮಕ್ಕೆ 500 ಕೋಟಿ ರೂ. ಅನುದಾನ ಒದಗಿಸುವ ಭರವಸೆ ನೀಡಿದರು. ಅಲ್ಲದೇ, ಸಮಾಜವನ್ನು 2ಎ ವರ್ಗಕ್ಕೆ ಸೇರಿಸುವ ಕುರಿತಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿಯೂ ಆಶ್ವಾಸನೆ ನೀಡಿದರು.
ವೀರಶೈವ ಮಹಾಸಭಾದ ರಾಷ್ಟ್ರೀಯ ಮಹಾಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ, ಉಪಾಧ್ಯಕ್ಷರುಗಳೂ ಆಗಿರುವ ದಾವಣಗೆರೆಯ ಕೈಗಾರಿಕೋದ್ಯಮಿಗಳಾದ ಅಥಣಿ ಎಸ್. ವೀರಣ್ಣ, ಎಸ್.ಎಸ್. ಗಣೇಶ್, ಪದಾಧಿಕಾರಿ ಸಚ್ಚಿದಾನಂದ, ಮಹಾಸಭಾದ ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷರಾದ ಮಧುರಾ ಅಶೋಕ, ಕಾರ್ಯದರ್ಶಿ ರೇಣುಕಾ ಪ್ರಸಾದ್ ಮತ್ತಿತರರು ಈ ಸರಳ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.