ಕೊರೊನಾ ಎರಡನೇ ಅಲೆಯ ಬಗೆಗೆ ಮಾತುಗಳು ಕೇಳಿ ಬರುತ್ತಿದ್ದು, ಮತ್ತಷ್ಟು ಎಚ್ಚರ ವಹಿಸಿ
– ಎಸ್.ಆರ್. ಉಮಾಶಂಕರ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ
ದಾವಣಗೆರೆ, ನ.30- ಹೆಚ್ಚು ಕೊರೊನಾ ಪಾಸಿಟಿವ್ ಪ್ರಕರಣಗಳು ಇರುವ ಜಿಲ್ಲೆ ಗಳಲ್ಲಿ ದಾವಣಗೆರೆಯೂ ಒಂದಾಗಿತ್ತು. ಜಿಲ್ಲಾಧಿ ಕಾರಿಗಳ ನೇತೃತ್ವದ ತಂಡ, ಎಲ್ಲಾ ಇಲಾಖಾಧಿಕಾರಿಗಳು, ಸಿಬ್ಬಂದಿ ಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯ ನಿರ್ವಹಿಸಿದ್ದುದರ ಪರಿಣಾಮವಾಗಿ ಇಂದು ಜಿಲ್ಲೆಯಲ್ಲಿ ಕೇವಲ 241 ಕೊರೊನಾ ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ಪ್ರಮಾಣ ಹಾಗೂ ಸಾವಿನ ಪ್ರಮಾಣ ಶೇ.1 ರಷ್ಟು ಇದ್ದು, ಸಂಘಟಿತ ಕಾರ್ಯ ಫಲ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಹೇಳಿದರು.
ಜಿಲ್ಲೆಯ ಕೊರೊನಾ ಪ್ರಕರಣಗಳ ಅಂಕಿ ಅಂಶಗಳನ್ನು ಆಲಿಸಿದ ಅವರು ಕೊರೊನಾ ಆರಂಭದ ದಿನಗಳಲ್ಲಿ ಬಹಳ ಆತಂಕ ಉಂಟಾಗಿತ್ತು. ಹಾಗೂ ಮುಂದಿನ ದಿನಗಳಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಿ ಕೊರೊನಾ ನಿಯಂತ್ರಣಕ್ಕೆ ತನ್ನಿ ಎಂದು ಸೂಚಿಸಿದರು. ಕೊರೊನಾ ಎರಡನೇ ಅಲೆಯ ಬಗೆಗೆ ಮಾತುಗಳು ಕೇಳಿ ಬರುತ್ತಿದ್ದು, ಮತ್ತಷ್ಟು ಎಚ್ಚರ ವಹಿಸಬೇಕಾಗಿದೆ. ಈ ಸಂಬಂಧ ಜಿಲ್ಲೆಯಲ್ಲಿ ಐಇಸಿ ಕಾರ್ಯಕ್ರಮಗಳನ್ನು ಮತ್ತಷ್ಟು ಪರಿಣಾಮಕಾರಿಗೊಳಿಸಬೇಕಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಯ್ದುಕೊಳ್ಳಲು ವಿವಿಧ ಇಲಾಖೆಗಳು ಹೆಚ್ಚು ಹೆಚ್ಚು ಪ್ರಚಾರ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕ ರಲ್ಲಿ ಜಾಗೃತಿ ಮೂಡಿಸಬೇಕಾಗಿದೆ ಎಂದರು.
ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ರಾಘವನ್ , ಎಸ್‍ಪಿ ಹನುಮಂತರಾಯ, ಜಿ.ಪಂ. ಸಿಇಓ ಪದ್ಮಾ ಬಸವಂತಪ್ಪ, ಡಿಹೆಚ್‍ಓ ಡಾ.ನಾಗರಾಜ್, ಸಿ.ಜಿ.ಆಸ್ಪತ್ರೆ ಅಧೀಕ್ಷಕ ಡಾ.ಜಯಪ್ರಕಾಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.