ದಾವಣಗೆರೆ, ಡಿ.14- ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಮತದಾನ ಮಾಡುವ ಮತದಾರರಿಗೆ ಎಡಗೈ ಹೆಬ್ಬೆರಳಿಗೆ ಶಾಯಿ ಹಚ್ಚಲಾಗುವುದು ಎಂದು ಜಿಲ್ಲಾಧಿಕಾರಿ ಮಹಾತೇಶ ಬೀಳಗಿ ಹೇಳಿದರು.
ಜಿಲ್ಲಾಡಳಿತ ಭವನದಲ್ಲಿ ಸೋಮವಾರ ನಡೆದ ಚುನಾವಣೆ ಸಿದ್ದತಾ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮತದಾನ ಮಾಡುವ ಮತದಾರರಿಗೆ ರಾಜ್ಯ ಚುನಾವಣಾ ಆಯೋಗದ ನಿರ್ದೇಶನದಂತೆ ಎಡಗೈ ಹೆಬ್ಬೆರಳಿಗೆ ಶಾಯಿ ಹಾಕಲಾಗುವುದು ಎಂದರು.
ಚುನಾವಣೆಗೆ ಜಿಲ್ಲಾಡಳಿತ ಎಲ್ಲಾ ಸಿದ್ದತೆ ಮಾಡಿಕೊಂಡಿದ್ದು, ಚುನಾವಣಾ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳಿಗೆ ತರಬೇತಿ, ಮತಗಟ್ಟೆಗಳ ಮೂಲಭೂತ ಸೌಕರ್ಯ, ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳ ಗುರುತಿಸುವಿಕೆ, ಸರ್ವಿಸ್ ವೋಟರ್ಸ್ ಪಟ್ಟಿ ತಯಾರಿಕೆ ಸೇರಿದಂತೆ ಎಲ್ಲಾ ಸಿದ್ದತೆಗಳಾಗಿವೆ. ಜಿಲ್ಲೆಯಲ್ಲಿ ಒಟ್ಟಾರೆ 1,279 ಮತಗಟ್ಟೆಗಳಿದ್ದು, ಅವುಗಳಲ್ಲಿ 174 ಸೂಕ್ಷ್ಮ, 143 ಅತಿಸೂಕ್ಷ್ಮ ಮತ್ತು 962 ಸಾಮಾನ್ಯ ಮತಗಟ್ಟೆಗಳಿವೆ. ಮತದಾರರು ಯಾವುದೇ ಭಯ, ಹೆದರಿಕೆ, ಅಂಜಿಕೆಗೆ ಒಳಗಾಗದೆ ಮುಕ್ತ, ನ್ಯಾಯ ಸಮ್ಮತ ಮತ್ತು ನಿರ್ಭೀತವಾಗಿ ಮತ ಚಲಾಯಿಸಲು ಅನುವಾಗುವಂತೆ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ರಾಜಕೀಯ ಮುಖಂಡರ ಭಾವಚಿತ್ರ ಅಥವಾ ಪಕ್ಷದ ಚಿಹ್ನೆ ನಿಷೇಧ: ರಾಜಕೀಯ ಪಕ್ಷಗಳು ಸಭೆ, ಸಮಾರಂಭಗಳನ್ನು ಏರ್ಪಡಿಸಿ, ವೇದಿಕೆಯ ಮೇಲೆ ಪಕ್ಷದ ಬಾವುಟ, ಬ್ಯಾನರ್ ಗಳನ್ನು ಬಳಸುವಂತಿಲ್ಲ. ಸ್ಪರ್ಧಿಸುವ ಅಭ್ಯರ್ಥಿಗಳನ್ನು ತಮ್ಮ ಪಕ್ಷದ, ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸುವುದು ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ.
ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ರಾಜಕೀಯ ಮುಖಂಡರ ಭಾವಚಿತ್ರ, ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರಗಳು, ಕಟೌಟ್‍ಗಳು, ಬ್ಯಾನರ್ ಮತ್ತು ಬಂಟಿಂಗ್‍ಗಳ ಮೂಲಕ ಪ್ರಚಾರ ಮಾಡುವಂತಿಲ್ಲ. ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಟಿ.ವಿ ಮಾಧ್ಯಮಗಳು, ಪತ್ರಿಕೆಗಳ ಮೂಲಕ ರಾಜಕೀಯ ಮುಖಂಡರ ಭಾವಚಿತ್ರ ಮತ್ತು ಪಕ್ಷಗಳ ಚಿಹ್ನೆಗಳನ್ನು ಬಳಸಿ ಜಾಹೀರಾತು ನೀಡುವಂತಿಲ್ಲ ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮಾತನಾಡಿ, ಚುನಾವಣೆ ಸಂಬಂಧ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಎಲ್ಲಿಯಾದರೂ ಅಭ್ಯರ್ಥಿಗಳ ಹರಾಜು ಪ್ರಕ್ರಿಯೆ ಕಂಡುಬಂದರೆ ಸಂಬಂಧಿಸಿದವರ ವಿರುದ್ದ ಎಫ್‍ಐಆರ್ ಮಾಡಲಾಗುವುದು ಹಾಗೂ ಚುನಾವಣೆ ಬಹಿಷ್ಕರಿಸುವವರ ಮನ ವೊಲಿಸಲಾಗುವುದು. ಈಗಾಗಲೇ ಪರವಾನಗಿ ಪಡೆದಿರುವ ಶಸ್ತ್ರಾಸ್ತ್ರಗಳನ್ನು ಇಲಾಖೆಯಲ್ಲಿ ಡೆಪಾಸಿಟ್ ಮಾಡಲು ತಿಳಿಸಲಾಗಿದೆ ಎಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಮಮತ ಹೊಸಗೌಡರ್, ದೂಡಾ ಆಯುಕ್ತ ಬಿ.ಟಿ.ಕುಮಾರಸ್ವಾಮಿ, ಹರಿಹರ-ಕೊಟ್ಟೂರು ರೈಲ್ವೆ ಭೂಸ್ವಾಧಿನಾಧಿಕಾರಿ ರೇಷ್ಮಾ ಹಾನಗಲ್, ಅಬಕಾರಿ ಡಿವೈಎಸ್‍ಪಿ ನಾಗರಾಜ್, ಚುನಾವಣಾ ತಹಶೀಲ್ದಾರ್ ಪ್ರಸಾದ್, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್‍ಗಳು, ಪೊಲೀಸ್ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.