ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಡಾ. ಬಿ.ವಿ. ವಸಂತಕುಮಾರ್
ಚನ್ನಗಿರಿ, ಮಾ. 5- ಅಕ್ಷರ ಸಂಸ್ಕೃತಿ, ಸಾಹಿತ್ಯ, ಕಲೆಗಳಿಗೆ ಜಾತಿ ಇಲ್ಲ. ಇವೆಲ್ಲವೂ ಜಾತಿ, ಧರ್ಮಗಳನ್ನು ಮೀರಿ ಬೆಳೆದಿವೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ನಿಕಟಪೂರ್ವ ಅಧ್ಯಕ್ಷ ಡಾ. ಬಿ.ವಿ. ವಸಂತಕುಮಾರ್ ಹೇಳಿದರು.
ಚನ್ನಗಿರಿ ತಾಲ್ಲೂಕು ಹರನಹಳ್ಳಿ-ಕೆಂಗಾಪುರದಲ್ಲಿ ನಡೆದ ದಾವಣಗೆರೆ ಜಿಲ್ಲಾ 12 ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಮಾರೋಪ ಭಾಷಣ ಮಾಡಿದ ಅವರು, ಸೃಜನಶೀಲತೆಯ ಬರಹ ಮತ್ತು ಭಾಷಣ ಇಂದು ಬಹಳ ಮುಖ್ಯವಾಗಿವೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕನ್ನಡ ಸಾಹಿತ್ಯ, ಸಂಸ್ಕೃತಿ, ಕಲೆಗಳು ಇನ್ನಷ್ಟು ಬಲಿಷ್ಠಗೊಳ್ಳಬೇಕಾಗಿದೆ ಎಂದರು.
ಮಾತಾಡಿದ್ದು ಸಾಕು, ಬರೆದಿದ್ದು ಸಾಕು, ಮಾತು, ಕೃತಿಗಿಂತ ಆಚರಣೆಗೆ ತರುವುದು ಲೇಸು. ತನ್ಮೂಲಕ ಉತ್ತಮ ಬದುಕು ಬದುಕೋಣ ಎಂದು ಎಂದು ಆಶಿಸಿದರು.
ಜಾನಪದ ಕಲಾವಿದ ಯುಗಧರ್ಮ ರಾಮಣ್ಣ ಅವರನ್ನು ಸಮ್ಮೇಳನಾಧ್ಯಕ್ಷರನ್ನಾಗಿ ಮಾಡಿರುವುದು ನಮಗೆ ಅತ್ಯಂತ ಸಂತೋಷ ಉಂಟುಮಾಡಿದೆ. ಚನ್ನಗಿರಿ ತಾಲ್ಲೂಕಿಗೆ ತನ್ನದೇ ಆದ ವೈಶಿಷ್ಟ್ಯತೆ ಇದೆ. ಇಂತಹ ನಾಡಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಸ್ವಾಗತಾರ್ಹ ಎಂದು ಹೇಳಿದರು.
ಸಮ್ಮೇಳನಾಧ್ಯಕ್ಷ ಯುಗಧರ್ಮ ರಾಮಣ್ಣ ಮಾತನಾಡಿ, ಸಮ್ಮೇಳನದಲ್ಲಿ ಕೈಗೊಳ್ಳಲಾದ ನಿರ್ಣಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿ, ಅನುಷ್ಠಾನಗೊಳಿಸುವಂತೆ ಆಗ್ರಹಪೂರ್ವಕ ಮನವಿ ಮಾಡಿದರು.
ಹರನಹಳ್ಳಿ-ಕೆಂಗಾಪುರ ಮಠದ ಶ್ರೀ ರಾಮಲಿಂಗೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ. ವಾಮದೇವಪ್ಪ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ಅಧ್ಯಕ್ಷ ಎ.ಆರ್. ಉಜ್ಜನಪ್ಪ, ಪತ್ರಕರ್ತ ಬಿ.ಎನ್. ಮಲ್ಲೇಶ್, ಜಾನಪದ ವಿದ್ವಾಂಸ ಡಾ.ಎಂ.ಜಿ. ಈಶ್ವರಪ್ಪ, ಕಸಾಪ ಜಿಲ್ಲಾ ಗೌರವ ಕಾರ್ಯದರ್ಶಿ ಬಿ. ದಿಳ್ಳೆಪ್ಪ, ಸಂಘಟನಾ ಕಾರ್ಯದರ್ಶಿ ಜಿಗಳಿ ಪ್ರಕಾಶ್, ಶ್ರೀ ರಾಮಲಿಂಗೇಶ್ವರ ವಿದ್ಯಾಸಂಸ್ಥೆ ಅಧ್ಯಕ್ಷ ಹೆಚ್.ಆರ್. ವಿಜಯಕುಮಾರ್, ಕಸಾಪ ತಾಲ್ಲೂಕು ಅಧ್ಯಕ್ಷ ಎಲ್.ಜಿ.ಮಧುಕುಮಾರ್, ಡಿ.ಎಂ.ಹಾಲಾರಾಧ್ಯ, ಕೆ.ಎಸ್. ವೀರೇಶ್ ಪ್ರಸಾದ್, ಎ.ಜಿ. ಸುಮತಿ ಜಯ್ಯಪ್ಪ, ಕೆ. ಸುಜಾತಮ್ಮ, ಜಿ. ಮುರುಗೆಪ್ಪ ಗೌಡ, ಡಿ.ಎಂ. ಮಂಜುನಾಥಯ್ಯ ಮತ್ತಿತರರು ಉಪಸ್ಥಿತರಿದ್ದರು.
ಕಸಾಪ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿ.ಜಿ. ಜಗದೀಶ ಕೂಲಂಬಿ ನಿರೂಪಿಸಿದರು. ಜಿಲ್ಲಾ ಗೌರವ ಕೋಶಾಧ್ಯಕ್ಷ ಕೆ. ರಾಘವೇಂದ್ರ ನಾಯರಿ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ರೇವಣಸಿದ್ಧಪ್ಪ ಅಂಗಡಿ ವಂದಿಸಿದರು.