ದಾವಣಗೆರೆ, ಮಾ.5- ಪೌರ ಕಾರ್ಮಿಕರ ಕಲ್ಯಾಣ ಮತ್ತು ಜೀವನ ಭದ್ರತೆಗಾಗಿ ರಾಜ್ಯ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ನಗರಾಭಿವೃದ್ಧಿ ಮತ್ತು ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಹೇಳಿದರು.
ಭಾನುವಾರ ಪಾಲಿಕೆ ವ್ಯಾಪ್ತಿಯ ದೊಡ್ಡಬೂದಿಹಾಳ ಗ್ರಾಮದಲ್ಲಿ ಪೌರ ಕಾರ್ಮಿಕರ ಮನೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪೌರ ಕಾರ್ಮಿಕರ ಆರೋಗ್ಯ ಮತ್ತು ಜೀವನ ಸುಧಾರಣೆಗೆ ಸರ್ಕಾರ ಮೊದಲ ಆದ್ಯತೆ ನೀಡಿದೆ. 9 ಎಕರೆ 20 ಗುಂಟೆ ಜಾಗದಲ್ಲಿ 51 ಕೋಟಿ ರೂ. ವೆಚ್ಚದಲ್ಲಿ ಜಿ+1 ಮಾದರಿಯ 381 ಮನೆಗಳನ್ನು ನಿರ್ಮಾಣ ಮಾಡಲಾಗಿದೆ. ಪ್ರತಿ ಬ್ಲಾಕ್ನಲ್ಲಿ ನೆಲ ಹಾಗೂ ಮೊದಲ ಮಹಡಿ ಸೇರಿ ಒಟ್ಟು 4 ಮನೆಗಳಿದ್ದು, ಪ್ರತಿ ಮನೆಗೆ 13.40 ಲಕ್ಷ ರೂ. ನಿರ್ಮಾಣ ವೆಚ್ಚ ತಗುಲಿದೆ. ಪಾರದಶರ್ಕವಾಗಿ ಶೀಘ್ರವೇ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಗುವುದು ಎಂದರು.
ತರಾತುರಿಯಲ್ಲಿ ನಡೆದ ಕಾಮಗಾರಿ ಉದ್ಘಾಟನೆ
ವಿವಿಧ ಕಾಮಗಾರಿಗಳ ಉದ್ಘಾಟನೆಗೆ ಆಗಮಿಸಿದ್ದ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಸೌಲಭ್ಯ ಪಡೆದ ಫಲಾನುಭವಿಗಳ ಸಮ್ಮೇಳನದಲ್ಲಿ ಭಾಗವಹಿಸುವ ಅವಸರದಲ್ಲಿಯೇ
ಗೃಹ ಭಾಗ್ಯ ಯೋಜನೆಯಡಿ ಪೌರ ಕಾರ್ಮಿಕರಿಗೆ ನಿರ್ಮಿಸಿರುವ ಮನೆಗಳನ್ನು ಟೇಪ್ ಕತ್ತರಿಸುವ ಮೂಲಕ ಉದ್ಘಾಟಿಸಿದರು. ನಂತರ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದ ಮೇಲ್ಭಾಗಕ್ಕೂ ಹೋಗದೆ ಕೆಳಗೆ ನಿಂತು ಸಮಾರಂಭದ ವೇದಿಕೆ ಉದ್ಘಾಟನೆ ನೆರವೇರಿಸಿದರು.
ಬಳಿಕ ನವೀಕೃತ ಖಾಸಗಿ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿ, ಅಲ್ಲಿಂದ ಮಿನಿ ವಿಧಾನ ಸೌಧ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಕುಂದುವಾಡದ ಬಳಿ ನಿರ್ಮಿಸಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಮತ್ತು ಉದ್ಯೋಗಸ್ಥ ಮಹಿಳಾ ನಿಲಯದ ಕಟ್ಟಡಗಳನ್ನು ಉದ್ಘಾಟಿಸಿದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಗರದ ಕುಂದುವಾಡದ ಬಳಿ ಖಾಸಗಿ ಲೇಔಟ್ನ ಸಿ.ಎ ನಿವೇಶನದಲ್ಲಿ 3.93 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ತಲಾ 50 ಸಂಖ್ಯಾಬಲದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಯೋಗಸ್ಥ ಮಹಿಳಾ ನಿಲಯ ಮತ್ತು ರೂ.5.82 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಮಿನಿ ವಿಧಾನಸೌಧ ಕಟ್ಟಡಗಳನ್ನು ಉದ್ಘಾಟಿಸಿದರು.
ನಂತರ ಸಚಿವರು ಸ್ಮಾರ್ಟ್ ಸಿಟಿ ಯೋಜನೆಯಡಿ 26.42 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ನವೀಕೃತ ಖಾಸಗಿ ಬಸ್ ನಿಲ್ದಾಣ ಲೋಕಾರ್ಪಣೆಗೊಳಿಸಿದರು.
ಕಾರ್ಯಕ್ರಮದಲ್ಲಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಶಾಸಕ ಎಸ್.ಎ.ರವೀಂದ್ರನಾಥ್, ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಎಸ್.ವಿ.ರಾಮಚಂದ್ರ, ಎಂಎಲ್ಸಿ ಮೋಹನ್ ಕೊಂಡಜ್ಜಿ, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಪಾಲಿಕೆ ಮೇಯರ್ ವಿನಾಯಕ ಬಿ.ಹೆಚ್, ಉಪ ಮೇಯರ್ ಯಶೋಧ ಹೆಗ್ಗಪ್ಪ, ಪಾಲಿಕೆ ಆಯುಕ್ತೆ ರೇಣುಕಾ ಸೇರಿದಂತೆ ಇತರರು ಉಪಸ್ಥಿತರಿದ್ದರು.