ಜಗಳೂರು, ಮೇ 14- ಕ್ಷೇತ್ರದ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಅಭಿವೃದ್ಧಿಗಾಗಿ ಕೆಲಸ ಮಾಡುತ್ತೇನೆ ಎಂದು ಕ್ಷೇತ್ರದ ನೂತನವಾಗಿ ಶಾಸಕರಾಗಿ ಆಯ್ಕೆಯಾಗಿರುವ ಬಿ. ದೇವೇಂದ್ರಪ್ಪ ತಿಳಿಸಿದರು.
ಪಟ್ಟಣದ ತಮ್ಮ ಸ್ವಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನರು ಬದಲಾವಣೆಯನ್ನು ಬಯಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ನನಗೆ ಹೆಚ್ಚಿನ ಮತ ನೀಡಿ ಗೆಲ್ಲಿಸಿ ದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ನಾನು ಕೆಲಸ ಮಾಡುತ್ತೇನೆ ಎಂದು ಭರವಸೆ ವ್ಯಕ್ತಪಡಿಸಿದರು.
ಇದು ನನ್ನ ಗೆಲು ವಲ್ಲ ಕ್ಷೇತ್ರದ ಜನರ ಗೆಲುವು. ಕ್ಷೇತ್ರದಲ್ಲಿ ಉತ್ತಮ ಆಡಳಿತ ನೀಡಲು ನಾನು ಶಕ್ತಿಮೀರಿ ಪ್ರಯತ್ನಿಸುತ್ತೇನೆ ಎಂದರು.
ರಾಜ್ಯದಲ್ಲಿ ಶೇಕಡ 40 ಭ್ರಷ್ಟ ಬಿಜೆಪಿ ಸರ್ಕಾರದ ಆಡಳಿತ ಅಂತ್ಯ ಗೊಂಡಿದೆ. ಜನ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಗೆಲುವು ನೀಡಿದ್ದಾರೆ. ಕ್ಷೇತ್ರದಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ.
ಮಾಜಿ ಶಾಸಕ ಎಚ್.ಪಿ. ರಾಜೇಶ್ ಅವರು ಕಾಂಗ್ರೆಸ್ ಪಕ್ಷದ ಎಲ್ಲಾ ಅಧಿಕಾರ, ಸೌಲಭ್ಯ ಗಳನ್ನು ಅನುಭವಿಸಿ ನನಗೆ ಟಿಕೆಟ್ ನೀಡಿದ್ದರಿಂದಾಗಿ ಪಕ್ಷೇತರರಾಗಿ ಸ್ಪರ್ಧಿಸಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಷಡ್ಯಂತ್ರ ರೂಪಿಸಿದ್ದರು. ಆದರೂ ಜನತೆ ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿದ್ದಾರೆ. ಕ್ಷೇತ್ರದ ಮನೆ ಮಗನಾಗಿ ನಾನು ಕೆಲಸ ಮಾಡುತ್ತೇನೆ ಎಂದು ದೇವೇಂದ್ರಪ್ಪ ಭರವಸೆ ವ್ಯಕ್ತಪಡಿಸಿದರು.
ಪ್ರಗತಿಯಲ್ಲಿರುವ 57 ಕೆರೆ ತುಂಬಿಸುವ ಯೋಜನೆ ಮತ್ತು ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳಿಗೆ ಚುರುಕು ಗೊಳಿಸುವ ಮೂಲಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಗಮನ ಹರಿಸುವುದಾಗಿ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಎಸ್ಟಿ ಘಟಕದ ಅಧ್ಯಕ್ಷ ಕೆ.ಪಿ. ಪಾಲಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಶೀರ್ ಅಹ್ಮದ್, ಮಾಜಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಎಸ್. ಸುರೇಶ್ ಗೌಡ ಮತ್ತಿತರರು ಇದ್ದರು.