ದಾವಣಗೆರೆ, ಮೇ 25- ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಬೆಂಬಲ ಬೆಲೆಗೆ ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ಬೋನಸ್ ಘೋಷಣೆ ಮಾಡಬೇಕೆಂದು, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ರೈತ ಮುಖಂಡ ಹುಚ್ಚವ್ವನಹಳ್ಳಿ ಮಂಜುನಾಥ್ ಮಾತನಾಡಿ, ರಾಜ್ಯ ಸರ್ಕಾರ ಘೋಷಣೆ ಮಾಡಿರುವ ಬೆಂಬಲ ಬೆಲೆಗೆ ಸುಗ್ರೀವಾಜ್ಞೆಯನ್ನು ಹೊರಡಿಸಿ ರಾಜ್ಯಮಟ್ಟದಲ್ಲಿ ಎಂಎಸ್ಪಿಗೆ ಕಾಯ್ದೆ ಜಾರಿಗೆ ತರಬೇಕು. ಇದರಿಂದ ರೈತರು ಬೆಳೆದ ಬೆಳೆಗಳಿಗೆ ಅನುಕೂಲವಾಗಲಿದೆ ಎಂದರು.
ಈ ಕಾಯ್ದೆಯಡಿ ಬೆಂಬಲ ಬೆಲೆಗಿಂತ ಕಡಿಮೆ ಬೆಲೆಗೆ ಖರೀದಿಸಿದರೆ ಖರೀದಿದಾರರಿಗೆ ಕನಿಷ್ಠ 1 ವರ್ಷ ಜೈಲು ಹಾಗೂ ದಂಡ ವಿಧಿಸಬೇಕು. ಪರವಾನಗಿ ರದ್ದು ಎಂಬ ಕಾನೂನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರ್ಕಾರ ಘೋಷಣೆ ಮಾಡಿರುವ ಬೆಂಬಲ ಬೆಲೆಗೆ ರಾಜ್ಯ ಸರ್ಕಾರವು ಘೋಷಣೆ ಮಾಡಿರುವ ಬೆಂಬಲ ಬೆಲೆಗೆ ರಾಜ್ಯ ಸರ್ಕಾರವು ಬೋನಸ್ ರೂಪದಲ್ಲಿ ಸಹಾಯಧನ ಸೇರಿಸಿ ರಾಜ್ಯ ಸರ್ಕಾರ ಬೆಂಬಲ ಬೆಲೆ ಘೋಷಿಸಬೇಕೆಂದು ಮನವಿ ಮಾಡಿದರು.
ಅಕಾಲಿಕ ಮಳೆಯಿಂದಾಗಿ ಹಾನಿಯುಂಟಾದ ಎಲ್ಲಾ ಬೆಳೆಗಳಿಗೆ ತಕ್ಷಣವೇ ವೈಜ್ಞಾನಿಕ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.
ಪತ್ರಿಭಟನೆಯಲ್ಲಿ ಗುಮ್ಮನೂರು ಬಸವರಾಜ್, ಚಿರಂಜೀವಿ, ರಾಜು, ಭಗತ್ ಸಿಂಹ ಮತ್ತಿತರರಿದ್ದರು.