ಎಲೆಬೇತೂರಿನ ಶ್ರೀ ಕೊಂಡಜ್ಜಿ ಬಸಪ್ಪ ಪ್ರೌಢಶಾಲೆಯಲ್ಲಿ ತಾಲ್ಲೂಕು ಕಸಾಪದಿಂದ ದತ್ತಿ ಉಪನ್ಯಾಸ ಕಾರ್ಯಕ್ರಮ
ಎಲೆಬೇತೂರು, ಆ. 27- ಕನ್ನಡ ನಾಡು ಸಮೃದ್ಧ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಅದನ್ನು ತಿಳಿಯುವ ಕುತೂಹಲವನ್ನು ವಿದ್ಯಾರ್ಥಿಗಳಲ್ಲಿ ಮೂಡಿಸುವ ಅಗತ್ಯವಿದೆ ಎಂದು ವಿಶ್ರಾಂತ ಉಪನ್ಯಾಸಕ ಸುಭಾಷ್ ಚಂದ್ರ ಅಭಿಪ್ರಾಯಪಟ್ಟರು.
ದಾವಣಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಎಲೆಬೇತೂರಿನ ಶ್ರೀ ಕೊಂಡಜ್ಜಿ ಬಸಪ್ಪ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಸುಭಾಷ್ ಚಂದ್ರ `ಕರ್ನಾಟಕ ನಿಮಗೆಷ್ಟು ಗೊತ್ತು’ ಎಂಬ ವಿಷಯ ಕುರಿತು ಅವರು ಮಾತನಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ವರ್ತಕ, ಶಾಲಾ ಸಲಹಾ ಸಮಿತಿ ಅಧ್ಯಕ್ಷ ಬಸವರಾಜಪ್ಪ ಮಾತನಾಡಿ, ದುಡಿದ ಹಣದಲ್ಲಿ ಸ್ವಲ್ಪ ಭಾಗವನ್ನಾದರು ಸತ್ಕಾರ್ಯಗಳಿಗೆ ದಾನ ಮಾಡುವುದನ್ನು ರೂಢಿಸಿಕೊಳ್ಳಬೇಕು. ಈ ದಾನ, ದತ್ತಿಗಳಿಂದ ನಾಡು ನುಡಿಯ ಬಗ್ಗೆ ಅಭಿಮಾನ ಮೂಡಿಸುವ ಇಂತಹ ಕಾರ್ಯ ಗಳಿಗೆ ಪ್ರೋತ್ಸಾಹಿಸಿದಂತಾಗುತ್ತದೆ ಎಂದರು.
ಮುಖ್ಯೋಪಾಧ್ಯಾಯಿನಿ ಎಂ.ಬಿ. ಪ್ರೇಮ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ದಾವಣಗೆರೆ ತಾಲ್ಲೂಕು ಪರಿಷತ್ತಿನ ಅಧ್ಯಕ್ಷರಾದ ಶ್ರೀಮತಿ ಸುಮತಿ ಜಯಪ್ಪ, ಹೆಚ್. ಬಸವರಾಜಪ್ಪ, ನಾಗರಾಜ ಸಿರಿಗೆರೆ, ಪರಿಮಳ ಜಗದೀಶ್, ಸೌಭಾಗ್ಯ ನಾಗರಾಜ್, ಮುಂತಾದವರು ಉಪಸ್ಥಿತರಿದ್ದರು.
ಪ್ರಾರಂಭದಲ್ಲಿ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಪರಿಷತ್ತಿನ ನಿರ್ದೇಶಕ ಷಡಾಕ್ಷರಪ್ಪ ಸ್ವಾಗತಿಸಿದರು. ಶಶಿಕಲಾ ವಂದಿಸಿದರು. ಹೆಚ್.ಎಸ್. ದ್ಯಾಮೇಶ್ ಕಾರ್ಯಕ್ರಮ ನಿರೂಪಿಸಿದರು.