ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್
ದಾವಣಗೆರೆ, ಸೆ.21- ಬಡತನ ದಿಂದಾಗಿ ಶಾಲೆಯಿಂದ ಹೊರಗುಳಿದಿರುವ ಕಾರಣ, ಮಾಹಿತಿ ಕೊರತೆಯಿಂದಾಗಿ ಸರ್ಕಾರದ ಸೌಲಭ್ಯಗಳ ಬಗ್ಗೆ ಅರಿವಿನ ಕೊರತೆಯಿಂದಾಗಿ ಇಂದಿಗೂ ಸಹ ಮುಸ್ಲಿಂ ಸಮುದಾಯದವರಿಗೆ ಸರ್ಕಾರದ ಸೌಲತ್ತುಗಳು ಮರೀಚಿಕೆ ಆಗಿವೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್.ಅರುಣ್ ಕುಮಾರ್ ಅಭಿಪ್ರಾಯಪಟ್ಟರು.
ನಗರದ ರೋಟರಿ ಬಾಲ ಭವನದಲ್ಲಿ ನೆರಳು ಬೀಡಿ ಕಾರ್ಮಿಕರ ಯೂನಿಯನ್, ದಲಿತ ಮುಸ್ಲಿಂ ಒಕ್ಕೂಟದ ಸಂಯುಕ್ತಾಶ್ರಯದಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ವತಿಯಿಂದ ಆಯೋಜಿಸಲಾಗಿದ್ದ ಮುಸ್ಲಿಂ ಸಮುದಾಯಕ್ಕೆ ಇರುವ ಸರ್ಕಾರಿ ಸೌಲಭ್ಯಗಳ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸರ್ಕಾರದ ಸೌಲಭ್ಯಗಳ ಬಗ್ಗೆ ಇಲಾಖೆಗಳು ಜಾಗೃತಿ ಮೂಡಿಸಬೇಕು. ಅದರಲ್ಲೂ ಸಮಾಜದ ಮುಖ್ಯ ವಾಹಿನಿಗೆ ಬರಲಾರದ ಅಲ್ಪಸಂಖ್ಯಾತರನ್ನು ಗುರುತಿಸಿ, ಸರ್ಕಾರದ ಇಲಾಖೆಗಳು ಅವರಿಗೆ ಸೂಕ್ತ ಶಿಕ್ಷಣ ನೀಡುವ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರಬೇಕಾಗಿದೆ ಎಂದು ಹೇಳಿದರು.
ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಸೈಯದ್ ಜುನೇದ್ ಪಾಷಾ ಮಾತನಾಡಿ, ಅಲ್ಪಸಂಖ್ಯಾತರು ಎಂದರೆ ಕೇವಲ ಮುಸ್ಲಿಂ ಸಮುದಾಯ ಮಾತ್ರ ಅಲ್ಲ. ಹಲವಾರು ಜಾತಿಗಳಿವೆ. ಶಿಕ್ಷಣದ ಕೊರತೆ ಇದಕ್ಕೆಲ್ಲ ಕಾರಣವಾಗಿದೆ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ನೆರಳು ಬೀಡಿ ಕಾರ್ಮಿಕರ ಸಂಘದ ಅಧ್ಯಕ್ಷೆ ಜಬೀನಾ ಖಾನಂ ವಹಿಸಿದ್ದರು. ವೇದಿಕೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಮಲ್ಲಿಕಾರ್ಜುನ ಮಠದ, ದಲಿತ ಮುಸ್ಲಿಂ ಮಹಿಳಾ ಒಕ್ಕೂಟದ ಅಧ್ಯಕ್ಷೆ ಸಾಹೇರ ಬಾನು, ನೆರಳು ಬೀಡಿ ಕಾರ್ಮಿಕರ ಯೂನಿಯನ್ ಸದಸ್ಯೆ ರುಕ್ಸಾನಾ ಬಾನು. ಪ್ರಧಾನ ಕಾರ್ಯದರ್ಶಿ ಎಂ.ಕರಿಬಸಪ್ಪ ಮತ್ತಿತರರು ಉಪಸ್ಥಿತರಿದ್ದರು.