ಡೆಂಗ್ಯೂ ನಿಯಂತ್ರಣಕ್ಕಾಗಿ ಮುನ್ನೆಚ್ಚರಿಕೆ ಅನುಸರಿಸಲು ಸಲಹೆ

ಡೆಂಗ್ಯೂ ನಿಯಂತ್ರಣಕ್ಕಾಗಿ ಮುನ್ನೆಚ್ಚರಿಕೆ ಅನುಸರಿಸಲು ಸಲಹೆ

ದಾವಣಗೆರೆ, ಅ. 4 – ಕೀಟಜನ್ಯ ರೋಗಗಳ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಸಾರ್ವಜನಿಕ ಜಾಗೃತಿ ಅಗತ್ಯವಾದುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಷಣ್ಮುಖಪ್ಪ ತಿಳಿಸಿದ್ದಾರೆ.

ಕೀಟಜನ್ಯ ರೋಗಗಳ ನಿಯಂತ್ರಣಕ್ಕಾಗಿ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಮತ್ತು ಸಾರ್ವಜನಿಕರ ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಗ್ರಾಮಗಳಲ್ಲಿ ಮನೆ-ಮನೆ ಭೇಟಿ ನೀಡಿ  ಜ್ವರ ಸಮೀಕ್ಷೆ ಮತ್ತು ಲಾರ್ವಾ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಹೆಚ್ಚಿನ ಜ್ವರ ಪ್ರಕರಣಗಳು ಕಂಡುಬಂದಲ್ಲಿ ರಕ್ತದ ಮಾದರಿ, ರಕ್ತಲೇಪನ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗುತ್ತದೆ. ವಿಶೇಷವಾಗಿ ವಲಸಿಗರ ಕಾವಲು ಸಮೀಕ್ಷೆಯನ್ನು ನಡೆಸಲಾಗುತ್ತಿದ್ದು, ಈ ವರ್ಷ ವಲಸಿಗರಲ್ಲಿ 9 ಮಲೇರಿಯಾ ಪ್ರಕರಣಗಳು ಕಂಡುಬಂದಿವೆ.

ಈಡೀಸ್ ಲಾರ್ವಾ ಪ್ರಾತ್ಯಕ್ಷಿಕೆಯೊಂದಿಗೆ ಆರೋಗ್ಯ ಶಿಕ್ಷಣ ನೀಡಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು. ಡೆಂಗ್ಯೂ ನಿಯಂತ್ರಣ ಕ್ರಮಗಳ ಅನುಷ್ಠಾನದಲ್ಲಿ ಸಮುದಾಯದ ಸಹಕಾರ ಅತ್ಯಗತ್ಯ. ಮಳೆಗಾಲದಲ್ಲಿ ಡೆಂಗ್ಯು ಪ್ರಕರಣಗಳು ಹೆಚ್ಚು  ಕಂಡುಬರುತ್ತವೆ. ಆದ್ದರಿಂದ ಜನರು ಮಳೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಟೈರು, ತೆಂಗಿನ ಚಿಪ್ಪು ಸೇರಿದಂತೆ ನೀರು ಇಂಗದೆ ಸಂಗ್ರಹವಾಗುವ ಅಲ್ಲಲ್ಲಿ ಬಿದ್ದ ಪ್ಲಾಸ್ಟಿಕ್‍ಗಳ ಬಗ್ಗೆ ಹೆಚ್ಚು ಗಮನ ಹರಿಸಬೇಕು ಮತ್ತು ನೀರಿನ ತೊಟ್ಟಿ ಡ್ರಮ್‍ಗಳನ್ನು ಪದೇ ಪದೇ ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದ್ದಾರೆ.

error: Content is protected !!