ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲರೂ ಸಹಕರಿಸಿ

ಆರೋಗ್ಯವಂತ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲರೂ ಸಹಕರಿಸಿ

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರಿ ಎನ್. ಹೆಗಡೆ

ದಾವಣಗೆರೆ, ಅ.12- ಮಾನಸಿಕ ಖಿನ್ನತೆಗೆ ಒಳಗಾದವರನ್ನು ಸೂಕ್ಷ್ಮವಾಗಿ ವಿಚಾರಿಸಿ ಸೂಕ್ತ ಚಿಕಿತ್ಸೆ ಕೊಡಿಸಬೇಕು ಹಾಗೂ ಆರೋಗ್ಯವಂತಹ ಸಮಾಜ ನಿರ್ಮಾಣ ಮಾಡುವಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ವರಿ ಎನ್. ಹೆಗಡೆ ತಿಳಿಸಿದರು.

ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿ ಪಕ್ಕದಲ್ಲಿರುವ ಪ್ರಭಂಜನ ಅಪೆರಲ್ ಅಂಡ್ ಕಂಪನಿಯಲ್ಲಿ `ಮಾನಸಿಕ ಆರೋಗ್ಯವು ಸಾರ್ವತ್ರಿಕ ಮಾನವ ಹಕ್ಕು’ ಎಂಬ ಘೋಷ ವಾಕ್ಯದೊಂದಿಗೆ  ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನಮ್ಮ ಸಂವಿಧಾನದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಸ್ವತಂತ್ರವಾಗಿ ಬದುಕುವ ಹಕ್ಕಿದೆ. ದೇಶದಲ್ಲಿ 100 ಕ್ಕೆ  12 ಜನ ಮಾನಸಿಕ ಆರೋಗ್ಯದಿಂದ ಬಳಲುತ್ತಿದ್ದಾರೆ. ಅವರನ್ನು ಮನೆಯಿಂದ ಹೊರಗಾಕದೇ ವೈದ್ಯರ ಬಳಿ ಸೂಕ್ತ ಚಿಕಿತ್ಸೆ ಕೊಡಿಸಬೇಕು. ಇದರಿಂದ ಸಮಾಜದಲ್ಲಿ ಪ್ರತಿಯೊಬ್ಬರು ಮುಖ್ಯ ವಾಹಿನಿಗೆ ಬರಲು ಸಾಧ್ಯವಾಗಲಿದೆ.  ಕೊರೊನಾದ ನಂತರ ಮಾನಸಿಕವಾಗಿ ಖಿನ್ನತೆಗೆ ಒಳಗಾದವರೇ ಹೆಚ್ಚು ಎಂದು ಹಲವು ಸಮೀಕ್ಷೆಗಳು ಹೇಳುತ್ತವೆ. ಜನರು ಅಂತಹ ಸಮಸ್ಯೆಗಳನ್ನು ಸುಲಭವಾಗಿ ಬಗೆಹರಿಸಿಕೊಳ್ಳಬೇಕು ಎಂದರು.

ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಒತ್ತಡಗಳಿಂದ ಹೊರಬರುವ ಸುಲಭ ವಿಧಾನವನ್ನು ಜಾಗೃತಿಗಳ ಮೂಲಕ ಅರಿವು ಮೂಡಿಸಬೇಕು. ರಸ್ತೆ ಬದಿ ಹಾಗೂ ಇತರೆ ಸ್ಥಳಗಳಲ್ಲಿ ಮಾನಸಿಕ ರೋಗಿಗಳು ಕಂಡುಬಂದಲ್ಲಿ ಸಂಬಂಧಿಸಿದ ಇಲಾಖೆಗಳಿಗೆ ಮಾಹಿತಿ ನೀಡಬೇಕು. ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ವೈದ್ಯರಿಗಿಂತ ಮಾನಸಿಕ ವೈದ್ಯರ ಅವಶ್ಯಕತೆ ಬಹಳಷ್ಟಿದೆ ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಷಣ್ಮುಖಪ್ಪ ಎಸ್. ಮಾತನಾಡಿ, ಪ್ರತಿಯೊಬ್ಬರಿಗೂ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಬಹು ಮುಖ್ಯವಾಗಿದ್ದು, ಮಾನಸಿಕವಾಗಿ ಖಿನ್ನತೆಗೆ ಒಳಗಾದವರು ತಪಾಸಣೆ ಮಾಡಿಸಿಕೊಂಡು ವೈದ್ಯರ ಸಲಹೆ ಮೇರೆಗೆ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಮನುಷ್ಯನಿಗೆ ಒಂದಲ್ಲಾ ಒಂದು ರೀತಿಯ ಸಮಸ್ಯೆಗಳಿರುತ್ತವೆ. ಅವುಗಳನ್ನು ಸುಲಭವಾಗಿ ಪರಿಹರಿಸುವುದಕ್ಕೆ ಪ್ರಯತ್ನಿಸಬೇಕು ಎಂದರು.

ಮನುಷ್ಯನ ದುರಾಸೆ, ಕೆಲಸದ ಒತ್ತಡ ಹಾಗೂ ಅತಿಯಾದ ಮದ್ಯ ವ್ಯಸನದಿಂದ ಮಾನಸಿಕ ರೋಗಕ್ಕೆ ತುತ್ತಾಗುತ್ತಾರೆ. ಜನರು ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸಿದಾಗ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬಹುದು ಎಂದರು.

ಇದೇ ಸಂದರ್ಭದಲ್ಲಿ `ಸಮಾಧಾನ ಚಿಂತನಾ’ ಪುಸ್ತಕ ಬಿಡುಗಡೆ ಮಾಡಲಾಯಿತು.

 ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸದಸ್ಯ ಕಾರ್ಯದರ್ಶಿ ಮಹಾವೀರ ಮಾ, ಕರೆಣ್ಣವರ, ಜಿಲ್ಲಾ ಕುಷ್ಠ ರೋಗ ನಿವಾರಣಾಧಿಕಾರಿ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಮಂಜುನಾಥ್ ಎಲ್. ಪಾಟೀಲ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ್‍ಕುಮಾರ್, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಅಧಿಕಾರಿ ಡಾ. ಕೆ.ಕೆ. ಪ್ರಕಾಶ್, ಜಿಲ್ಲಾ ಕಾರ್ಮಿಕಾಧಿಕಾರಿ ಜಿ. ಇಬ್ರಾಹಿಂ ಸಾಬ್, ಜಿಲ್ಲಾ ಮನೋವೈದ್ಯ ಡಾ. ಮುರಳಸಿದ್ದಪ್ಪ ಪಿ.ಎಂ ಉಪಸ್ಥಿತರಿದ್ದರು.

error: Content is protected !!