ಜ್ಞಾನ ಹೆಚ್ಚಿಸಿಕೊಳ್ಳಲು ಕಾರ್ಯಾಗಾರಗಳು ಅತ್ಯವಶ್ಯ

ಜ್ಞಾನ ಹೆಚ್ಚಿಸಿಕೊಳ್ಳಲು ಕಾರ್ಯಾಗಾರಗಳು ಅತ್ಯವಶ್ಯ

ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿ ನಡೆದ ಉಪನ್ಯಾಸ ಮಾಲಿಕೆಯಲ್ಲಿ ನ್ಯಾಯಾಧೀಶರಾದ ರಾಜೇಶ್ವರಿ ಹೆಗಡೆ

ದಾವಣಗೆರೆ, ಅ. 17 – ಕಾನೂನು ಕಾರ್ಯಾಗಾರಗಳು ಯುವ ವಕೀಲರ ಅಧ್ಯಯನಕ್ಕೆ ಅತ್ಯಂತ ಅವಶ್ಯಕವಾಗಿದ್ದು, ಕಾರ್ಯಾಗಾರಗಳಲ್ಲಿ ಭಾಗವಹಿಸುವ ಮೂಲಕ ತಮ್ಮ ಜ್ಞಾನ ಸಂಪತ್ತನ್ನು ಹೆಚ್ಚಿಸಿಕೊಂಡು ಪ್ರಕರಣಗಳ ವಿಲೇವಾರಿಗೆ ಮುಂದಾಗಬೇಕೆಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್.ಹೆಗಡೆ ಸಲಹೆ ನೀಡಿದರು.

ಜಿಲ್ಲಾ ವಕೀಲರ ಸಂಘದಿಂದ ನಗರದ ಜಿಲ್ಲಾ ನ್ಯಾಯಾಲಯಗಳ ಸಂಕೀರ್ಣದಲ್ಲಿನ ವಕೀಲರ ಸಾಂಸ್ಕೃತಿಕ ಸಮುದಾಯ ಭವನದಲ್ಲಿ ಆಯೋಜಿಸಲಾಗಿದ್ದ ಉಪನ್ಯಾಸ ಮಾಲಿಕೆಯಲ್ಲಿ ಗ್ರಾಹಕರ ಸಂರಕ್ಷಣಾ ಕಾಯ್ದೆ -2019 ಕುರಿತು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಂವಿಧಾನದ ಯಾವುದೇ ರಾಷ್ಟ್ರದಲ್ಲಿ ತನ್ನ ಸಂವಿಧಾನದ ಚೌಕಟ್ಟಿನೊಳಗೆ ಕಾಲಕಾಲಕ್ಕೆ ಕಾನೂನುಗಳನ್ನು ಜಾರಿಗೆ ತಂದು ಜನರ ಹಕ್ಕುಗಳನ್ನು ಕಾಪಾಡಲಾಗುತ್ತದೆ. ಆಧುನಿಕ ಜಗತ್ತಿನಲ್ಲಿ ಕಾನೂನುಗಳ ಬಗ್ಗೆ ತಿಳಿದುಕೊಳ್ಳವುದು ಅತ್ಯಂತ ಅವಶ್ಯಕವಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ವಕೀಲರ ಸಂಘವು ಉಪನ್ಯಾಸಗಳನ್ನು ಏರ್ಪಡಿಸುತ್ತಿರುವುದು ಶ್ಲ್ಯಾಘನೀಯ. ಕಾನೂನು ನಿರಂತರವಾಗಿ ಬದಲಾಗುವ ಮತ್ತು ವಿಕಸನಗೊಳ್ಳುವ ವಿಷಯವಾಗಿರುವು ದರಿಂದ ಅವುಗಳ ಅಧ್ಯಯನ ಮಾಡಲು ಮತ್ತು ತಿಳಿದುಕೊಳ್ಳಲು ಉಪನ್ಯಾಸ ಮಾಲಿಕೆಗಳು ಅವಶ್ಯಕವಾಗಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಡಾ.ಎಂ.ವಿ. ವೆಂಕಟೇಶ್, ವಕೀಲರ ಜ್ಞಾನ ಸಂಪತ್ತು ಹೆಚ್ಚುವುದರಿಂದ ಸಮಾಜಕ್ಕೆ, ಪ್ರಕರಣಗಳಿಗೆ ನ್ಯಾಯ ದೊರಕಿಸಲು ಸಾಧ್ಯವಾಗುತ್ತದೆ. ಗ್ರಾಹಕರ ಹಿತರಕ್ಷಣಾ ಕಾಯಿದೆ ಗ್ರಾಹಕರ ಸಂರಕ್ಷಣೆ ಹಿತದ ಹಿನ್ನೆಲೆಯಲ್ಲಿ ಆದ ಕಾನೂನು ಎಂದು ತಿಳಿಸಿದರು.

ಜಿಲ್ಲಾ ಪೆೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮಾತನಾಡಿ, ನ್ಯಾಯಯುತ ಸಮಾಜ ನಿರ್ಮಾಣ ಮಾಡುವಲ್ಲಿ, ಶಾಂತಿ, ಸುವ್ಯವಸ್ಥೆ ಕಾಪಾಡುವಲ್ಲಿ ವಕೀಲರ ಸಹಕಾರ ಮುಖ್ಯವಾಗಿದ್ದು, ನ್ಯಾಯಾಂಗ ಮತ್ತು ಕಾರ್ಯಾಂಗಗಳು ಸೌಹಾರ್ದಯುತವಾಗಿ ಉತ್ತಮ ಸಮಾಜದ ನಿರ್ಮಾಣಕ್ಕೆ ಕಾರ್ಯೋನ್ಮುಖರಾಗಬೇಕೆಂದು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ  ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಎಚ್. ಅರುಣ ಕುಮಾರ್ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗಗಳು ಸಮರ್ಪಕವಾಗಿ ತಮ್ಮ ಕಾರ್ಯ ನಿರ್ವಹಿಸಿದಾಗ ಮಾತ್ರ ಸಂವಿಧಾನದ ಆಶಯಗಳು ಅನುಷ್ಠಾನಗೊಳ್ಳಲು ಸಾಧ್ಯ. ಈ ನಿಟ್ಟಿನಲ್ಲಿ ಜಿಲ್ಲಾ ವಕೀಲರ ಸಂಘವು ಎಲ್ಲಾ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ, ಉತ್ತಮ ಸಮಾಜ ನಿರ್ಮಾಣ ಮಾಡಲು ಮುಂದಾಗಿದೆ ಎಂದು ಹೇಳಿದರು.

ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷ ಮಹಾಂತೇಶ್ ಈರಪ್ಪ ಶಿಗ್ಲಿ ಉಪನ್ಯಾಸ ನೀಡಿದರು. ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿಜಯಾನಂದ, ಮಕ್ಕಳ ಸ್ನೇಹಿ ನ್ಯಾಯಾಲಯದ ಎನ್. ಶ್ರೀಪಾದ, 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಪ್ರವೀಣ್‍ಕುಮಾರ್, ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶರಾದ ಧಶರಥ್ ಸೇರಿದಂತೆ ಸ್ಥಳೀಯ ಎಲ್ಲಾ ನ್ಯಾಯಾಧೀಶರು ಇದ್ದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ಜಿ.ಕೆ. ಬಸವರಾಜ್ ಗೋಪನಾಳ್, ಕಾರ್ಯದರ್ಶಿ ಎಸ್. ಬಸವರಾಜ್ ಸಹ ಕಾರ್ಯದರ್ಶಿ ಎ.ಎಸ್. ಮಂಜುನಾಥ್, ಕಾರ್ಯಕಾರಿ ಸಮಿತಿ ಸದಸ್ಯರಾದ ವಾಗೀಶ ಕಟ್ಟಿಗಿಹಳ್ಳಿ ಮಠ, ಅಜೇಯ ಆವರಗೆರೆ, ಎಲ್. ನಾಗರಾಜ್, ಮಧುಸೂದನ್, ನೀಲಕಂಠಯ್ಯ, ಭಾಗ್ಯಲಕ್ಷ್ಮಿ, ಚೌಡಪ್ಪ ಇತರರು ಇದ್ದರು. 

ಇದೇ ವೇಳೆ ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಗ್ರಾಹಕರ ಆಯೋಗದ ಅಧ್ಯಕ್ಷರಿಗೆ ಸನ್ಮಾನಿಸಿ ಗೌರವಿಸಲಾಯಿತು.

error: Content is protected !!