ಮಾ.9 ರಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್

ಮಾ.9 ರಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್

ಅದಾಲತ್‌ನಲ್ಲಿ ಚಾಲ್ತಿಯಲ್ಲಿರುವ ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ಶೀಘ್ರವಾಗಿ ವಿಲೇವಾರಿ ಮಾಡಿಕೊಡಲಾಗುವುದು.

-ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ, ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ  ನ್ಯಾಯಾಲಯ, ದಾವಣಗೆರೆ.

ದಾವಣಗೆರೆ, ಫೆ. 11- ರಾಷ್ಟ್ರೀಯ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಬರುವ ಮಾರ್ಚ್ 9 ರಂದು ರಾಷ್ಟ್ರೀಯ ಲೋಕ್‌ ಅದಾಲತ್ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಜಿಲ್ಲಾ ಮತ್ತು ಸತ್ರ  ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ಜಿಲ್ಲಾ ನ್ಯಾಯಾಲಯದ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಲೋಕ್‌ ಅದಾಲತ್ ತ್ವರಿತಗತಿಯಲ್ಲಿ ಅತಿ ಹೆಚ್ಚು ಪ್ರಕರಣಗಳನ್ನು ವಿಲೇವಾರಿ ಮಾಡಿ, ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡುವುದು ಮೂಲ ಉದ್ದೇಶವಾಗಿದೆ ಎಂದರು.

 ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳು ತಮ್ಮ ವ್ಯಾಪ್ತಿಯಲ್ಲಿ ಅದಾಲತ್ ಆಯೋಜಿಸಲು ಸೂಚನೆ ನೀಡಿದ್ದು, ಈ ಅದಾಲತ್‌ನಲ್ಲಿ ಚಾಲ್ತಿಯಲ್ಲಿರುವ ಮತ್ತು ವ್ಯಾಜ್ಯಪೂರ್ವ ಪ್ರಕರಣಗಳನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ಶೀಘ್ರವಾಗಿ ವಿಲೇವಾರಿ ಮಾಡಿಕೊಡಲಾಗುವುದು ಎಂದು ಮಾಹಿತಿ ನೀಡಿದರು.

ರಾಜೀಯಾಗಬಲ್ಲ ಮತ್ತು ಎಲ್ಲಾ ಸಿವಿಲ್, ಕ್ರಿಮಿನಲ್ ಪ್ರಕರಣಗಳು, ಮೋಟಾರ್ ವಾಹನ ಅಪಘಾತ ಪರಿಹಾರ ಪ್ರಕರಣಗಳು, ಚೆಕ್‌ ಅಮಾನ್ಯ ಪ್ರಕರಣಗಳು, ಭೂಸ್ವಾಧೀನ ಪರಿಹಾರ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ ಪ್ರಕರಣಗಳು, ಎಂಎಂಡಿಆರ್ ಕಾಯ್ದೆ ಅಡಿಯಲ್ಲಿನ ಪ್ರಕರಣಗಳನ್ನು ಲೋಕ್ ಅದಾಲತ್‌ನಲ್ಲಿ ಪರಿಹರಿಸಿಕೊಳ್ಳಬಹುದು ಎಂದು ಹೇಳಿದರು.

ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು (ವಿಚ್ಛೇದನ ಹೊರತುಪಡಿಸಿ) ಪಿಂಚಣಿ ಪ್ರಕರಣಗಳು ವೇತನ ಭತ್ಯೆ ಸಂಬಂಧಿಸಿದ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆಗಳ ಕಾರ್ಮಿಕರ ವೇತನ, ಕಾರ್ಮಿಕ ವಿವಾದ ಇತ್ಯಾದಿ ಪ್ರಕರಣಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಬಹುದು ಎಂದು ಮಾಹಿತಿ ತಿಳಿಸಿದರು.

ರಾಜೀ ಮೂಲಕ ಅನುಕೂಲವಾಗಲಿ ಎಂದು ರಾಜಿ ಪೂರ್ವ ಸಮಾಲೋಚನೆಗಳನ್ನು ಕೂಡ ಆಯೋಜಿಸಲಾಗಿದೆ. ಸಮಾಲೋಚನೆಗಳಲ್ಲಿ ನ್ಯಾಯಾಧೀಶರುಗಳು ಮತ್ತು ನುರಿತ ವಕೀಲರುಗಳು ಭಾಗವಹಿಸಿ ಕಕ್ಷಿಗಾರರಿಗೆ ಮಾಹಿತಿಗಳನ್ನು ಒದಗಿಸುವರು ಎಂದರು.

2023 ರ ಫೆಬ್ರುವರಿ ತಿಂಗಳಿನಿಂದ ಡಿಸೆಂಬರ್ ವರೆಗೆ ಒಟ್ಟು ನಾಲ್ಕು ಆಯೋಜಿಸಲಾಗಿತ್ತು. ಆ ಸಮಯದಲ್ಲಿ ಒಟ್ಟಾಗಿ 15,300 ಜಾರಿಯಲ್ಲಿದ್ದ ಪ್ರಕರಣಗಳು, ಮತ್ತು 493179 ವ್ಯಾಜ್ಯಪೂರ್ವ ಪ್ರಕರಣಗಳು ವಿಲೇವಾರಿಯಾಗಿರುತ್ತವೆ ಎಂದು ತಿಳಿಸಿದರು.

ಸಾರ್ವಜನಿಕರು ರಾಷ್ಟ್ರೀಯ ಲೋಕ್ ಅದಾಲತ್ ನ ಸಂಪೂರ್ಣ ಸದುಪಯೋಗ ಪಡೆದುಕೊಳ್ಳಬೇಕೆಂದು ಕೋರಲಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ (08192-296364), ತಾಲ್ಲೂಕು ಕಾನೂನು ಸೇವಾ ಪ್ರಾಧಿಕಾರ ಹರಿಹರ (08192-296885), ಹೊನ್ನಾಳಿ ಸಮಿತಿ (08188-251732), ಚನ್ನಗಿರಿ (08189-229195), ಜಗಳೂರು (08196-227600) ಇವರನ್ನು ಸಂಪರ್ಕಿಸಬಹುದು.

ಪತ್ರಿಕಾಗೋಷ್ಠಿಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ. ಕರೆಣ್ಣವರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಲ್.ಹೆಚ್. ಅರುಣ್ ಕುಮಾರ್, ಕಾರ್ಯದರ್ಶಿ ಬಸವರಾಜ್ ಮತ್ತಿತರರಿದ್ದರು.

error: Content is protected !!