ದಾವಣಗೆರೆ, ಏ. 4 – ಪೊಲೀಸ್ ಧ್ವಜ ದಿನಾಚರಣೆ ಅಂಗವಾಗಿ ಜಿಲ್ಲಾ ಪೊಲೀಸ್ ಮತ್ತು ಪೊಲೀಸ್ ಕಲ್ಯಾಣ ಸಮಿತಿ, ಕರ್ನಾಟಕ ಹಿಮೊಫಿಲಿಯಾ ಸೊಸೈಟಿಯ ಲೈಫ್ ಲೈನ್ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಇತ್ತೀಚೆಗೆ ಜಿಲ್ಲಾ ಪೊಲೀಸ್ ಕವಾಯತು ಆವರಣದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಮತ್ತು ಪೂರ್ವ ವಲಯದ ಪೊಲೀಸ್ ಮಹಾ ನಿರೀಕ್ಷಕ ಡಾ. ಕೆ ತ್ಯಾಗರಾಜನ್ ಅವರು ರಕ್ತದಾನ ಮಾಡುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಜಯಕುಮಾರ್ ಎಂ. ಸಂತೋಷ್, ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ, ಚನ್ನಗಿರಿ ಡಿವೈಎಸ್ಪಿ ಪ್ರಶಾಂತ್ ಮನ್ನೋಳಿ, ಗ್ರಾಮಾಂತರ ಡಿವೈಎಸ್ಪಿ ಪ್ರಶಾಂತ್ ಸಿದ್ಧನಗೌಡರ್, ಡಿಎಆರ್ ಡಿವೈಎಸ್ಪಿ ನಿಶಿಮಪ್ಪ, ಪೋಲಿಸ್ ನೀರೀಕ್ಷಕ ಎಚ್.ಬಿ ಸೋಮಶೇಖರಪ್ಪ ಮತ್ತು ಜಿಲ್ಲೆಯ ಹಾಗೂ ತಾಲ್ಲೂಕಿನ ಪೋಲಿಸ್ ನಿರೀಕ್ಷಕರು, ಸಿಬ್ಬಂದಿ ಶಿಬಿರದಲ್ಲಿ ಭಾಗವಹಿಸಿದ್ದರು. ಈ ವೇಳೆ 16 ಕ್ಕೂ ಅಧಿಕ ಜನರು ರಕ್ತದಾನ ಮಾಡಿದರು.
ನಿವೃತ್ತ ಪೊಲೀಸ್ ಅಧೀಕ್ಷಕ ರವಿನಾರಾಯಣ್, ಲೈಫ್ಲೈನ್ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಎಂ.ಎಂ. ದೊಡ್ಡಿಕೊಪ್ಪದ್, ಹಿಮೊಫಿಲಿಯಾ ಸೊಸೈಟಿಯ ಮಹಿಳಾ ವಿಭಾಗದ ಅಧ್ಯಕ್ಷರಾದ ಡಾ. ಮೀರಾ ಹನಗವಾಡಿ ಮತ್ತು ಇತರರು ಇದ್ದರು.