ದಾವಣಗೆರೆ, ಮೇ 8- ಕಳೆದ ಒಂದೂವರೆ ತಿಂಗಳಿನಿಂದ ಕ್ಷೇತ್ರದ ಜನರ ಬಳಿ ತೆರಳಿ ಮತ ಬೇಟೆಯಲ್ಲಿ ತೊಡಗಿದ್ದ ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಬುಧವಾರ ವಿಶ್ರಾಂತಿಯ ಮೊರೆಯಲ್ಲೂ ಪಕ್ಷದ ಅಭ್ಯರ್ಥಿಯ ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದರು.
ರಣ ಬಿಸಿಲನ್ನು ಲೆಕ್ಕಿಸದೇ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಗೆಲುವಿಗಾಗಿ ಕಳೆದ ಒಂದೂವರೆ ತಿಂಗಳಿನಿಂದ ವಿಶ್ರಾಂತಿ ಪಡೆಯದ ಶಾಸಕ ಬಸವಂತಪ್ಪ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರೊಂದಿಗೆ ಮಾಯಕೊಂಡ ಕ್ಷೇತ್ರದ ಪ್ರತಿ ಮತದಾರನ ಬಳಿ ತೆರಳಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರ ಪರ ಮತಯಾಚಿಸಿದ್ದರು.
ಮಂಗಳವಾರ ಚುನಾವಣೆ ನಡೆದ ಬಳಿಕ ನಗರದ ಜಯದೇವ ವೃತ್ತದ ಕಟ್ಟಿಂಗ್ ಶಾಪ್‌ವೊಂದರಲ್ಲಿ ಬುಧವಾರ ಬೆಳಿಗ್ಗೆ ಕಾಂಗ್ರೆಸ್ ಮುಖಂಡರೊಂದಿಗೆ ದಾವಣಗೆರೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಗಳ ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದರು.
ಈ ಬಾರಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರ ಬೆಂಬಲ ಇದೆ. ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಒತ್ತು ಕೊಟ್ಟಿರುವುದರಿಂದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ ಅವರ ಗೆಲುವು ಶೇ.100 ರಷ್ಟು ಖಚಿತವಾಗಿದೆ ಎಂದು ಶಾಸಕ ಕೆ.ಎಸ್.ಬಸವಂತಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲೇ ಮಾಯಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಅತೀ ಹೆಚ್ಚು ಶೇ.82.96ರಷ್ಟು ಮತದಾನಕ್ಕೆ ಕಾರಣರಾಗಿರುವ ಮತದಾರರಿಗೆ ಇದೇ ಸಂದರ್ಭದಲ್ಲಿ ಬಸವಂತಪ್ಪ ಕೃತಜ್ಞತೆ ಸಲ್ಲಿಸಿದ್ದಾರೆ.