ಅಂಬೇಡ್ಕರ್, ಬಾಬೂಜಿ ಸ್ಮರಣೆ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ. ಕರೆಣ್ಣವರ
ದಾವಣಗೆರೆ, ಜು.16- ಮಕ್ಕಳ ಮೇಲಿನ ದೌರ್ಜನ್ಯ ತಡೆಯುವುದು ಕೇವಲ ಸರ್ಕಾರದ ಕೆಲಸ ಎಂಬ ಮನೋಭಾವನೆ ಸಲ್ಲದು. ಸಾರ್ವಜನಿಕರು, ಸಂಘ-ಸಂಸ್ಥೆಗಳು ಸಹಭಾಗಿತ್ವ ವಹಿಸಿಕೊಳ್ಳುವ ಜೊತೆಗೆ ಸ್ವಯಂ ಪ್ರೇರಣೆಯಿಂದ ಇಂತಹ ಪ್ರಕರಣಗಳನ್ನು ತಡೆಗಟ್ಟಲು ಮುಂದಾಗಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಮ. ಕರೆಣ್ಣವರ ಕರೆ ನೀಡಿದರು.
ನಗರದ ರೋಟರಿ ಬಾಲಭವನದ ಆವರಣದಲ್ಲಿ ರುವ ಚನ್ನಗಿರಿ ಕೇಶವಮೂರ್ತಿ ರೋಟರಿ ಸಭಾಂಗಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಡಾ.ಬಿ.ಆರ್. ಅಂಬೇಡ್ಕರ್ 133 ನೇ ಜಯಂತಿ ಹಾಗೂ ಬಾಬು ಜಗಜೀವನರಾಂ ಅವರ 38 ನೇ ಪುಣ್ಯಸ್ಮರಣೆ ಅಂಗವಾಗಿ ಹಮ್ಮಿಕೊಂಡಿದ್ದ `ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ’ ಕುರಿತ ಕಾನೂನು ಜಾಗೃತಿ ವಿಚಾರಸಂಕಿರಣದಲ್ಲಿ ಉಪನ್ಯಾಸ ನೀಡಿದರು.
ಜಿಲ್ಲೆಯಲ್ಲಿ 18 ಲಕ್ಷ ಜನಸಂಖ್ಯೆ ಇದ್ದು, ವಿವಿಧ ಸರ್ಕಾರಿ ಇಲಾಖೆಗಳ ಒಟ್ಟು ಸಿಬ್ಬಂದಿ ಕೇವಲ 18 ಸಾವಿರ ಮಾತ್ರ.ಹೀಗಿದ್ದಾಗ ಜನರನ್ನು ತಲುಪುವುದಾದರೂ ಹೇಗೆ. ಎಲ್ಲಾ ಕೆಲಸವನ್ನು ಸರ್ಕಾರವೇ ಮಾಡಬೇಕೆಂದು ಕೈಕಟ್ಟಿ ಕುಳಿತರೇ ಸಾಲದು. ಸಾರ್ವಜನಿಕರು, ವಿವಿಧ ಸಂಘಟನೆಗಳು ಮಕ್ಕಳ ಮೇಲಿನ ದೌರ್ಜನ್ಯ ತಡೆ ಹಾಗೂ ಅವರ ಹಕ್ಕುಗಳ ರಕ್ಷಣೆಗೆ ಇಲಾಖೆಗಳ ಜೊತೆ ಕೈಜೋಡಿಸಬೇಕೆಂದರು.
ಬಹಳಷ್ಟು ಜನರಿಗೆ ಬಾಲ್ಯ ವಿವಾಹ ಅಪರಾಧ ಎಂಬ ವಿಚಾರ ತಿಳಿದಿಲ್ಲ. ಆದರೆ ಬಾಲ್ಯ ವಿವಾಹ ಕೂಡ ಅಪರಾಧ ಎಂಬುದನ್ನು ಅರಿತು. ಅದನ್ನು ತಡೆಯಲು ಪ್ರಯತ್ನಿಸಬೇಕು. ಅಪ್ರಾಪ್ತರನ್ನು ವಿವಾಹ ಮಾಡುವುದು ಸಹ ಮಕ್ಕಳ ಮೇಲೇ ನಡೆಸುವ ಲೈಂಗಿಕ ದೌರ್ಜನ್ಯ ಎಂದೇ ಪರಿಗಣಿಸಲಾಗುತ್ತಿದೆ. ಇಂತಹ ವಿವಾಹದಲ್ಲಿ ಭಾಗಿಯಾದವರ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂದರು.
ಜೈಲಿನಲ್ಲಿ ಶೇ. 85 ರಷ್ಟು ಅಪರಾಧಿಗಳು ಪೋಕ್ಸೋ ಪ್ರಕರಣದಲ್ಲಿ ಬಂಧನಕ್ಕೆ ಒಳಗಾದವರೇ ಆಗಿರುತ್ತಾರೆ ಎಂದು ಹೇಳಿದರು.
ಕರ್ನಾಟಕ ದಲಿತ ಸಂಘರ್ಷ ಸಮಿತಿ ಸಂಸ್ಥಾಪಕ ಡಾ.ಎನ್. ಮೂರ್ತಿ ಮಾತನಾಡಿ, ಶಿಕ್ಷಣದಲ್ಲಿ ಇಂದು ಅಸಮಾನತೆಯನ್ನು ಕಾಣುತ್ತೇವೆ. ಉಳ್ಳವರ ಮಕ್ಕಳು ದುಬಾರಿ ಶುಲ್ಕ ತೆತ್ತು ಮಕ್ಕಳಿಗೆ ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಕೊಡಿಸುತ್ತಾರೆ. ಆದರೆ ಬಡವರ ಮಕ್ಕಳ ಸರ್ಕಾರಿ ಶಾಲೆಗಳಲ್ಲಿಯೇ ಕನ್ನಡ ಮಾಧ್ಯಮದಲ್ಲಿ ಓದುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಸರ್ಕಾರಿ ಶಾಲೆಗಳನ್ನು ಉನ್ನತೀಕರಿಸುವ ಜೊತೆಗೆ ಗುಣಮಟ್ಟದ ಮತ್ತು ಆಂಗ್ಲ ಮಾಧ್ಯಮ ಶಿಕ್ಷಣದ ಕಡೆ ಹೆಚ್ಚು ಒತ್ತು ನೀಡಬೇಕಾಗಿದೆ ಎಂದು ಹೇಳಿದರು.
ದಾವಣಗೆರೆ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಡಿ. ಕುಂಬಾರ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ಹೆಚ್. ಮಂಜುನಾಥ್, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಎನ್.ಕವಿತಾ, ರಾಜನಹಳ್ಳಿ ಸೀತಮ್ಮ ಸರ್ಕಾರಿ ಪ.ಪೂ. ಕಾಲೇಜಿನ ಪ್ರಾಚಾರ್ಯರಾದ ಟಿ.ಎ. ಕುಸಗಟ್ಟಿ, ಅಲಿ ರೆಹಮತ್ ಪೈಲ್ವಾನ್ ಮತ್ತಿತರರು ಉಪಸ್ಥಿತರಿದ್ದರು.
ಇದೇ ವೇಳೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 80 ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.