ಹರಿಹರ, ಜು. 21- ಭಾರೀ ಪ್ರಮಾಣದಲ್ಲಿ ಮಳೆ ಆಗುತ್ತಿರುವುದರಿಂದ ತುಂಗಭದ್ರಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ. ನದಿ ಪಾತ್ರದಲ್ಲಿ ವಾಸಿಸುವಂತಹ ಸಾರ್ವಜನಿಕರು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ, ತಾಲ್ಲೂಕು ಆಡಳಿತಾಧಿಕಾರಿಗಳು ಸೂಚನೆ ನೀಡಿದ್ದಾರೆ.
ನಗರದಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೆ ಧಾರಾಕಾರವಾಗಿ ಸುರಿಯುತ್ತಿರುವ ಮುಂಗಾರು ಮಳೆಯಿಂದಾಗಿ ಸೊಪ್ಪು, ಹಣ್ಣು, ಹೂವು ಸೇರಿದಂತೆ ಇತರೆ ವ್ಯಾಪಾರಸ್ಥರು, ರೈನ್ ಕೋಟ್ ಹಾಕಿಕೊಂಡು ವ್ಯಾಪಾರ ವಹಿವಾಟು ನಡೆಸಿದರು. ಇತ್ತ ಶಾಲಾ-ಕಾಲೇಜು ವಿದ್ಯಾರ್ಥಿಗಳು ಛತ್ರಿ ಹಿಡಿದುಕೊಂಡು ಓಡಾಡುತ್ತಿರುವುದು ಸಾಮಾನ್ಯವಾಗಿತ್ತು. ರಾಜ್ಯದ ಆಗುಂಬೆ, ಶೃಂಗೇರಿ, ತೀರ್ಥಹಳ್ಳಿ, ಶಿವಮೊಗ್ಗ ಸೇರಿದಂತೆ ಹಲವಾರು ನಗರಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಆಗುತ್ತಿರುವುದರಿಂದ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದೆ.