ದಾವಣಗೆರೆ, ಜು. 28- ‘ಮುಡಾ’ ವಿಚಾರದಲ್ಲಿ ಮುಖ್ಯಮಂತ್ರಿ ಯಾವುದೇ ತಪ್ಪು ಮಾಡಿಲ್ಲ ಹಾಗೂ ಕಾನೂನು ಬಾಹಿರ ಕೆಲಸ ಆಗಿಲ್ಲ. ಜನಸಮುದಾಯಕ್ಕೆ ಸತ್ಯ ಮುಟ್ಟಿಸುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿದೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾನೂನು ಬಾಹಿರ ಗಣಿಗಾರಿಕೆ ನಡೆಸಿ ರಾಜ್ಯದ ಸಂಪತ್ತು ಲೂಟಿ ಮಾಡುತ್ತಿರುವುದನ್ನು ವಿರೋಧಿಸಿ ಬಳ್ಳಾರಿವರೆಗೆ ಕಾಂಗ್ರೆಸ್ ಪಾದಯಾತ್ರೆ ಮಾಡಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಪಾದಯಾತ್ರೆಗೆ ಮುಂದಾಗಿದೆ ಎಂದು ಟೀಕಿಸಿದರು.
ವ್ಯಾಪಾರಿಯೊಬ್ಬರು ರೈಲಿನಲ್ಲಿ ರಾಜಸ್ಥಾನದಿಂದ ಬೆಂಗಳೂರಿಗೆ ತಂದಿದ್ದು ಮೇಕೆ ಮಾಂಸ ಎಂಬುದು ಪ್ರಯೋಗಾಲಯದ ವರದಿ ದೃಢಪಡಿಸಿದೆ. ನಾಯಿ ಮಾಂಸ ಎಂಬುದಾಗಿ ದುರುದ್ದೇಶದಿಂದ ಗಲಾಟೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಹಗರಣವನ್ನು ಸರ್ಕಾರ ಸಮರ್ಥನೆ ಮಾಡಿಕೊಳ್ಳುತ್ತಿಲ್ಲ. ತಪ್ಪು ಮಾಡಿದವರಿಗೆ ಶಿಕ್ಷೆ ವಿಧಿಸಬೇಕು ಎಂಬ ಕಾರಣಕ್ಕೆ ಸರ್ಕಾರ ವಿಶೇಷ ತನಿಖಾ ತಂಡ ರಚಿಸಿದೆ. ಜಾರಿ ನಿರ್ದೇಶನಾಲಯ, ಸಿಬಿಐ ಕೂಡ ತನಿಖೆ ಮಾಡುತ್ತಿವೆ. ಒಂದು ವೇಳೆ ಸಚಿವರ ಖಾತೆಗೆ ಹಣ ವರ್ಗಾವಣೆ ಆಗಿದ್ದು ಖಚಿತವಾದರೆ ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದೆ ಎಂದರು.