ದಾವಣಗೆರೆ, ಸೆ.24-ಜೀವನದಲ್ಲಿ ಕ್ರೀಡೆ ಮತ್ತು ವಿದ್ಯಾಭ್ಯಾಸ ಒಂದು ನಾಣ್ಯದ ಎರಡು ಮುಖಗಳಿದ್ದಂತೆ. ವಿದ್ಯಾರ್ಥಿಗಳು ಕ್ರೀಡೆ ಮತ್ತು ವಿದ್ಯಾಭ್ಯಾಸವನ್ನು ಸಮತೋಲನದಲ್ಲಿ ಕಾಯ್ದುಕೊಂಡು ಜೀವನವನ್ನು ಉತ್ತಮ ರೀತಿಯಲ್ಲಿ ನಿರೂಪಿಸಿಕೊಳ್ಳಬೇಕೆಂದು ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಏರ್ಪಡಿಸಲಾಗಿದ್ದ 2024- 25 ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಎಲ್ಲಾ ಪದವಿ ಪೂರ್ವ ಕಾಲೇಜಿನಲ್ಲಿ ಉತ್ತಮ ದೈಹಿಕ ಶಿಕ್ಷಕರ ನೇಮಕಾತಿ ಆದರೆ ಮಕ್ಕಳಿಗೆ ಒಳ್ಳೆಯ ಕ್ರೀಡಾ ಪ್ರೋತ್ಸಾಹಕರು ದೊರೆತಂತಾಗಿ, ಮಕ್ಕಳು ರಾಜ್ಯ, ರಾಷ್ಟ್ರಮಟ್ಟದಲ್ಲಿ ಬೆಳೆಯುವಂತೆ ಪ್ರೋತ್ಸಾಹ ಸಿಕ್ಕಂತಾಗುತ್ತದೆ ಎಂದು ಹೇಳಿದರು.
ರಾಜನಹಳ್ಳಿ ಸೀತಮ್ಮ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಟಿ.ಎ. ಕುಸಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್. ಜಿ. ಕರಿಬಸಪ್ಪ, ಮಹಾನಗರ ಪಾಲಿಕೆ ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಮಾಜಿ ಮೇಯರ್ ಎಸ್.ಟಿ. ವೀರೇಶ್, ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಬಿ.ಪಾಲಾಕ್ಷಿ ಮತ್ತು ಇತರರು ಭಾಗವಹಿಸಿದ್ದರು.