ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಶಾಮನೂರು ಟಿ. ಬಸವರಾಜ್
ದಾವಣಗೆರೆ, ಅ.20- ಡಿಪ್ಲೋಮಾ, ಪದವಿ ಪೂರೈಸಿಕೊಂಡು ಉದ್ಯೋಗ ಸಿಗಲಾರದೇ ಸಂದರ್ಶನಗಳಿಗೆ ಹಾಜ ರಾಗಲು ಹಣಕಾಸಿನ ತೊಂದರೆಗಳ ಕುರಿತಂತೆ ಸರ್ಕಾರ ಗಮನಿಸಿದ್ದು, ಅಂತಹ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಯುವ ನಿಧಿ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಶಾಮನೂರು ಟಿ. ಬಸವರಾಜ್ ಹೇಳಿದರು.
ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಮತ್ತು ಜೈನ್ ಪದವಿ ಕಾಲೇಜು ಇವರ ಸಂಯುಕ್ತಾಶ್ರಯದಲ್ಲಿ ಇಂದು ಯುವ ನಿಧಿ ಯೋಜನೆಯ ಅರಿವು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯ ಎಚ್.ಜೆ. ಮೈನುದ್ದೀನ್ ಅವರು ಸರ್ಕಾರದ ಸೌಲಭ್ಯಗಳನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಜೈನ್ ಪದವಿ ಕಾಲೇಜಿನ ಪ್ರಾಂಶುಪಾಲ ಜಿ.ಎಸ್. ಮಧು ಮಾತನಾಡಿ, ಯುವನಿಧಿ ಅರಿವು ಕಾರ್ಯಕ್ರಮ ಅರ್ಥಪೂರ್ಣ ಎಂದು ಹೇಳಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರುಗಳಾದ ಎಸ್. ಎಸ್. ಗಿರೀಶ್, ಶಿವಶಂಕರ್ ಕೈದಾಳೆ , ಜೈನ್ ಕಾಲೇಜಿನ ಉಪನ್ಯಾಸಕರಾದ ಶ್ರೀಮತಿ ಪೂರ್ಣಿಮಾ, ಕಾವ್ಯ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಎಸ್. ಮಲ್ಲಿಕಾರ್ಜುನ, ಬಿ. ಎನ್. ಧನಂಜಯ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.