ದಾವಣಗೆರೆ, ಅ.30- ದೀಪಾವಳಿ ಹಬ್ಬವನ್ನು ಜಿಲ್ಲೆಯಾದ್ಯಂತ ನಾಳೆ ದಿನಾಂಕ 31 ಮತ್ತು 2 ರಂದು ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮನವಿ ಮಾಡಿದ್ದಾರೆ.
ಪಟಾಕಿ ಬಾಕ್ಸ್‍ಗಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‍ಐಆರ್) ಮತ್ತು ನ್ಯಾಷನಲ್ ಎನ್ವಿರಾನ್‌ಮೆಂಟಲ್ ಇಂಜಿನಿಯರಿಂಗ್ ರಿಸರ್ಚ್ ಇನ್‌ಸ್ಟಿಟ್ಯೂಟ್ (ಎನ್‍ಇಇಆರ್‍ಐ) ಇವರ ಲೋಗೋ ಹಾಗೂ ನೋಂದಾಯಿತ ಸಂಖ್ಯೆಯೊಂದಿಗೆ ಮುದ್ರಿತವಾಗಿರಬೇಕು. ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು.
125 ಡೆಸಿಬಲ್ ಶಬ್ದಕ್ಕಿಂತಲೂ ಮೇಲ್ಪಟ್ಟ ಪಟಾಕಿಗಳ ಸಿಡಿಸುವುದನ್ನು ನಿಷೇಧಿಸಲಾಗಿದೆ.
ಶಿಕ್ಷಣ ಸಂಸ್ಥೆ, ಆಸ್ಪತ್ರೆ ಮತ್ತು ವೃದ್ಧಾಶ್ರಮಗಳಂತಹ ಸೂಕ್ಷ್ಮ ಪ್ರದೇಶಗಳ ಹತ್ತಿರ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ.
ರಾತ್ರಿ 8 ರಿಂದ 10 ವರೆಗೆ ಮಾತ್ರ ಪಟಾಕಿಗಳನ್ನು ಸ್ಫೋಟಿಸಲು ಅವಕಾಶ ನೀಡಿದ್ದು, ಉಳಿದ ಸಮಯದಲ್ಲಿ ಪಟಾಕಿಗಳ ಸ್ಫೋಟವನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.