ದಾವಣಗೆರೆ, ನ.7- ನಗರದ ಆಂಜನೇಯ ಬಡಾವಣೆಯಲ್ಲಿನ ಕುಸ್ತಿ ಒಳಾಂಗಣ ಕ್ರೀಡಾಂಗಣದಲ್ಲಿ ಅಂತರ್ ಕಾಲೇಜುಗಳ ಪುರುಷ ಮತ್ತು ಮಹಿಳಾ ಕುಸ್ತಿ ಪಂದ್ಯಾವಳಿ ಹಾಗೂ ದಾವಣಗೆರೆ ವಿವಿ ತಂಡದ ಆಯ್ಕೆ ಪ್ರಕ್ರಿಯೆ ಇಂದು ನಡೆಯಿತು.
ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅವರು, ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ದೈಹಿಕ ಶಿಕ್ಷಕರ ನೇಮಕಾತಿ ಆಗಬೇಕು. ಅವರಿಗೆ ಸರ್ಕಾರದಿಂದ ಉತ್ತಮ ವೇತನವನ್ನೂ ನೀಡಬೇಕು ಎಂದರು.
ದಾವಣಗೆರೆ ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಡೀನ್ ಡಾ.ಕೆ. ವೆಂಕಟೇಶ ಮಾತನಾಡಿ, ಪಂದ್ಯಾವಳಿಯಲ್ಲಿ ವಿಶ್ವವಿದ್ಯಾಲಯ ಮಟ್ಟದ ದಾವಣಗೆರೆ ಮತ್ತು ಚಿತ್ರದುರ್ಗದ ಒಟ್ಟು 120 ಕಾಲೇಜುಗಳಿಂದ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ಸೇರಿದಂತೆ 40 ಜನ ಕುಸ್ತಿಪಟುಗಳು ಭಾಗವಹಿಸಿದ್ದಾರೆ ಎಂದರು.
ಇಲ್ಲಿ ಆಯ್ಕೆಯಾಗುವ ಕ್ರೀಡಾ ಪಟುಗಳು ಪಂಜಾಬಿನ ಗುರುಕಾಶಿ ವಿಶ್ವವಿದ್ಯಾನಿಲಯದಲ್ಲಿ ನಡೆಯುವ ಅಂತರ್ ವಿಶ್ವವಿದ್ಯಾನಿಲಯ ಮಟ್ಟದ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.
ಬಿಇಎ ಮಹಾವಿದ್ಯಾಲಯ, ದಾವಣಗೆರೆ ವಿಶ್ವ ವಿದ್ಯಾಲಯ ಮತ್ತು ದಾವಣಗೆರೆ ವಿವಿ ದೈಹಿಕ ಶಿಕ್ಷಣ ನಿರ್ದೇಶಕರ ಸಹಯೋಗದಲ್ಲಿ ಕ್ರೀಡಾಕೂಟ ಜರುಗಿತು.
ಬಿ.ಇ.ಎ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ನೀತಾ ಸೇರಿದಂತೆ, ವಿವಿಧ ಕಾಲೇಜುಗಳ ದೈಹಿಕ ಶಿಕ್ಷಕರು ಹಾಗೂ ಕ್ರೀಡಾಪಟುಗಳು ಇದ್ದರು.