ದಾವಣಗೆರೆ, ನ. 8- ಜಿಲ್ಲೆಯಲ್ಲಿನ ಎಲ್ಲಾ ಮೆಟ್ರಿಕ್ ಪೂರ್ವ ಹಾಸ್ಟೆಲ್ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಮ್ಯಾಪ್ ಮಾಡಬೇಕೆಂದು ಜಿಲ್ಲಾ ಪಂಚಾಯ್ತಿ ಸಿಇಓ ಸುರೇಶ್ ಬಿ.ಇಟ್ನಾಳ್ ಸೂಚನೆ ನೀಡಿದರು.
ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಹಾಸ್ಟೆಲ್ ವಾರ್ಡನ್‌ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲಾ ತಾಲ್ಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಸ್ಟೆಲ್ ಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪರಿಶೀಲನೆ ಮಾಡಬೇಕು. ಹಾಗೂ ಬಿಇಓಗಳು ಸೋಮವಾರದಂದು ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿವಿಧ ಬಗೆಯ ವಿದ್ಯಾರ್ಥಿ ವೇತನಗಳ ಕುರಿತು ಮಾಹಿತಿ ನೀಡುವ ಆಂದೋಲನ ಕೈಗೊಳ್ಳಬೇಕು. ಸೌಲಭ್ಯಗಳು ಅರ್ಹ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಉಚಿತ ವಿದ್ಯಾರ್ಥಿ ವೇತನಗಳು ಸಿಗುವಂತಾಗಬೇಕು ಎಂದು ತಿಳಿಸಿದರು.
ಹಾಸ್ಟೆಲ್ ವಾರ್ಡನ್‌ಗಳು ಗುಣಮಟ್ಟದ ಆಹಾರ ನೀಡಬೇಕು. ಹಾಸ್ಟೆಲ್ ವಾತಾವರಣವನ್ನು ಸ್ವಚ್ಛವಾಗಿ ಇರಿಸಿಕೊಳ್ಳಬೇಕು. ಒಂದು ವೇಳೆ ವಿದ್ಯಾರ್ಥಿಗಳಿಗೆ ಗುಣಮಟ್ಟದ ಆಹಾರ ಮತ್ತು ಸ್ವಚ್ಚತೆಯಲ್ಲಿ ಲೋಪ ದೋಷ ಕಂಡುಬಂದಲ್ಲಿ ಸಂಬಂಧಪಟ್ಟವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕೃಷ್ಣ ನಾಯಕ್, ಸಿಪಿಓ ಮಲ್ಲನಾಯಕ್, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ನಾಗರಾಜ್ ಕೆ. ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.