ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ

ಮುಂದಿನ ಅಖಿಲ ಭಾರತ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ

ಹರಪನಹಳ್ಳಿ :  ಸುದೀರ್ಘ 66 ವರ್ಷದ ಬಳಿಕ ಗಡಿನಾಡಿಗೆ ನುಡಿ ತೇರು ಎಳೆಯುವ ಭಾಗ್ಯ

ಹರಪನಹಳ್ಳಿ, ಡಿ. 22 – 88ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಬಳ್ಳಾರಿಯಲ್ಲಿ ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ತಿನ ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ಅಖಂಡ ಬಳ್ಳಾರಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ತಿಳಿಸಿದ್ದಾರೆ.

ಈ ಕುರಿತು  ಸುದ್ದಿಗೋಷ್ಟಿಯಲ್ಲಿ  ಮಾತನಾಡಿದ ಅವರು ಬಳ್ಳಾರಿ, ಕೋಲಾರ, ಯಾದಗಿರಿ, ಚಿಕ್ಕಮಗಳೂರು, ದೆಹಲಿಯಲ್ಲಿ ಸಮ್ಮೇಳನ ನಡೆಸುವ ಕುರಿತು ಚರ್ಚೆಗಳು ಸಾಗಿದ್ದವು. ಆದರೆ ಅಂತಿಮವಾಗಿ ಮುಂದಿನ ಸಾಹಿತ್ಯ ಸಮ್ಮೆಳನವನ್ನು ಬಳ್ಳಾರಿಯಲ್ಲಿ ನಡೆಸಲು ಅವಿರೋಧವಾಗಿ ತೀರ್ಮಾನಿಸಿರುವುದು  ಸಂತಸ ತಂದಿದೆ ಎಂದರು.

1926 ಹಾಗೂ 1938ರಲ್ಲಿ ಬಳ್ಳಾರಿಯಲ್ಲಿ ಸಮ್ಮೇಳನ ನಡೆದಿತ್ತು. ಸ್ವಾತಂತ್ರ್ಯಾ ನಂತರ 1958ರಲ್ಲಿ ವಿ.ಕೃ.ಗೋಕಾಕ ಅವರ ಅಧ್ಯಕ್ಷತೆ ಯಲ್ಲಿ  ಬಳ್ಳಾರಿಯ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಸಮ್ಮೇಳನ ಅರ್ಥಪೂರ್ಣವಾಗಿ ನಡೆದಿತ್ತು. ಸುದೀರ್ಘ 66 ವರ್ಷಗಳ ಬಳಿಕ ಬಳ್ಳಾರಿಗೆ ಸಾಹಿತ್ಯ ಸಮ್ಮೇಳನದ ಅವಕಾಶ ದಕ್ಕಿದ್ದು,  ಸಮ್ಮೇಳನ‌ ನಡೆಸಲು  ಅವಕಾಶ ಮಾಡಿಕೊಟ್ಟ  ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ, ನಾಡೋಜ ಡಾ.ಮಹೇಶ ಜೋಶಿ ಮತ್ತು ಕೇಂದ್ರ ಕಾರ್ಯಕಾರಿ ಸಮಿತಿ ಸದಸ್ಯರಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಅಧ್ಯಕ್ಷ ಕೆ.ಉಚ್ಚೆಂಗೆಪ್ಪ, ಮಾತನಾಡಿ, ಆಂಧ್ರ ಪ್ರದೇಶ ರಾಜ್ಯದ ಗಡಿಗೆ ಹೊಂದಿಕೊಂಡಿರುವ ಬಳ್ಳಾರಿ ಜಿಲ್ಲೆಗೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದು 66 ವರ್ಷಗಳು ಸಂದಿವೆ. ಗಡಿನಾಡಿನಲ್ಲಿ ಕನ್ನಡವನ್ನು ಜಾಗೃತವಾಗಿ ಇರಿಸುವ ನಿಟ್ಟಿನಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಬಳ್ಳಾರಿ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವುದು ಸೂಕ್ತವಾಗಿದೆ.

ಬಳ್ಳಾರಿ ನಗರವು ಸ್ವಾತಂತ್ರ್ಯ ಪೂರ್ವದಿಂದಲೂ ಜಿಲ್ಲಾ ಕೇಂದ್ರವಾಗಿರುವುದರಿಂದ ಸಮ್ಮೇಳನಕ್ಕೆ ಬರುವ ಅತಿಥಿಗಳಿಗೆ ಮತ್ತು ಪ್ರತಿನಿಧಿಗಳಿಗೆ ಊಟ ಮತ್ತು ವಸತಿ ಸೌಲಭ್ಯ ಸೇರಿದಂತೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಸಮರ್ಥವಾಗಿ ನಿಭಾಯಿಸಲು ಸಾಧ್ಯವಾಗುತ್ತದೆ. ರಾಜ್ಯದ ಎಲ್ಲಾ ಭಾಗಗಳಿಂದ ಬಳ್ಳಾರಿಗೆ ಸಂಪರ್ಕ ಕಲ್ಪಿಸುವ ಬಸ್, ರೈಲು ಮತ್ತು ವಿಮಾನಗಳ ಸೌಲಭ್ಯವಿದೆ. 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಜರುಗಲು ಎಲ್ಲರ ಸಹಕಾರ ಅಗತ್ಯ ವಾಗಿದೆ ಎಂದರು.

ಸುದ್ದಿಗೋಷ್ಟಿಯಲ್ಲಿ ಹರಿಹರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಮಂಜುನಾಥಯ್ಯ, ಹರಪನಹಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಎಚ್.ಮಲ್ಲಿಕಾರ್ಜುನ, ಚಿಗಟೇರಿ ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ಅಧ್ಯಕ್ಷ ಸಿ.ರಾಮನಗೌಡ, ತೆಲಿಗಿ ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ಅಧ್ಯಕ್ಷ. ಕೆ.ಎಸ್. ವೀರಭದ್ರಪ್ಪ, ಅರಸೀಕೆರೆ ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ಅಧ್ಯಕ್ಷ ಎಂ.ಸುರೇಶ ಸೇರಿದಂತೆ ಇತರರು ಇದ್ದರು.

error: Content is protected !!