ಮಲೆನಾಡಿಗರ ಧ್ವನಿ, ಸಾಹಿತಿ ನಾ. ಡಿಸೋಜಾ ಇನ್ನಿಲ್ಲ

ಮಲೆನಾಡಿಗರ ಧ್ವನಿ, ಸಾಹಿತಿ ನಾ. ಡಿಸೋಜಾ ಇನ್ನಿಲ್ಲ

ಸಾಗರ, ಜ. 5 – ನಾಡಿನ ಹಿರಿಯ ಸಾಹಿತಿ ಡಾ. ನಾ ಡಿಸೋಜ ಅವರು ವಯೋಸಹಜ ಅನಾರೋಗ್ಯದಿಂದ ಇಂದು ಭಾನುವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರಿಗೆ 87 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ನಾಳೆ ಸೋಮವಾರ ಸಂಜೆ ಸಾಗರದಲ್ಲಿ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇಡಲಾಗುವುದು. ನಾಡಿದ್ದು ಮಂಗಳವಾರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿದೆ.

ಇವರು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು. ಮಡಿಕೇರಿಯಲ್ಲಿ ನಡೆದ 80 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದರು. 

1964ರಲ್ಲಿ ಡಿಸೋಜರ ಮೊದಲ ಕಾದಂಬರಿ ‘ಬಂಜೆ ಬೆಂಕಿ’ ಪ್ರಕಟಗೊಂಡಿತು. ನಂತರ ಮಂಜಿನ ಕಾನು, ಈ ನೆಲ ಈ ಜಲ, ಕೆಂಪು ತ್ರಿಕೋನ, ನೆಲೆ, ಗಾಂಧಿ ಬಂದರು, ದ್ವೀಪ, ಜೀವಕಳೆ ಹೀಗೆ 40ಕ್ಕೂ ಹೆಚ್ಚು ಕಾದಂಬರಿಗಳನ್ನು ಬರೆದಿದ್ದಾರೆ.

ನಾ. ಡಿಸೋಜ ಅವರು 75 ಕಾದಂಬರಿಗಳು, 6 ಚಾರಿತ್ರ್ಯಿಕ ಕಾದಂಬರಿ, ಮಕ್ಕಳಿಗಾಗಿ 25 ಕಾದಂಬರಿ, 9 ಕಥಾ ಸಂಕಲನ, ಸಮಗ್ರ ಕಥೆಗಳ ಎರಡು ಸಂಪುಟಗಳು, ಸುಮಾರು 500 ಕಥೆಗಳು, ಹತ್ತಾರು ನಾಟಕಗಳು, ರೇಡಿಯೋ ನಾಟಕಗಳು, ಅನೇಕ ಪತ್ರಿಕಾ ಲೇಖನಗಳನ್ನು ಬರೆದಿದ್ದಾರೆ. ಇವರ ‘ಮುಳುಗಡೆಯ ಊರಿಗೆ ಬಂದವರು’ ಎಂಬ ಮಕ್ಕಳ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ‘ಬಾಲ ಸಾಹಿತ್ಯ ಪುರಸ್ಕಾರ’ ಸಂದಿತ್ತು. ‘ದ್ವೀಪ’ ಮತ್ತು ‘ಕಾಡಿನ ಬೆಂಕಿ’ ಕಾದಂಬರಿಗಳು ಚಲನಚಿತ್ರಗಳಾಗಿ ರಾಷ್ಟ್ರಿಯ ಪ್ರಶಸ್ತಿಯನ್ನು ಗಳಿಸಿವೆ.

ನಾ.ಡಿಸೋಜ ಅವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಗುಲ್ವಾಡಿ ವೆಂಕಟರಾವ್‌ ಪ್ರಶಸ್ತಿ, ಅಖಿಲ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಸಂದೇಶ್ ಸಾಹಿತ್ಯ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಮಂಗಳೂರು ಸಂದೇಶ ಪ್ರಶಸ್ತಿ, ನವದೆಹಲಿ ಕಳಾ ಪ್ರಶಸ್ತಿ, ಪಂಪ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿಗಳು ದೊರೆತಿವೆ.

ಶೋಕ : ಹಿರಿಯ ಸಾಹಿತಿ ಡಾ. ನಾ. ಡಿಸೋಜ ಅವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.

error: Content is protected !!