ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ದಿನೇಶ್ ಕೆ. ಶೆಟ್ಟಿ ವಿಶ್ವಾಸ
ದಾವಣಗೆರೆ, ಜ. 27 – ಶಾಸಕ ಶಾಮನೂರು ಶಿವಶಂಕರಪ್ಪ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮತ್ತು ಸಂಸದರಾದ ಪ್ರಭಾ ಮಲ್ಲಿಕಾರ್ಜುನ್ ಅವರ ನೇತೃತ್ವದಲ್ಲಿ ಬರಲಿರುವ ಮಹಾನಗರ ಪಾಲಿಕೆಯ ಎಲ್ಲಾ ಸ್ಥಾನಗಳನ್ನು ಕಾಂಗ್ರೆಸ್ ಪಕ್ಷ ಗೆಲ್ಲುವ ಮೂಲಕ ಆಡಳಿತದ ಚುಕ್ಕಾಣಿ ಹಿಡಿಯಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ. ಶೆಟ್ಟಿ ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಿನ್ನೆ ನಡೆದ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯರು, 2018ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ವಾರ್ಡ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯ ಕರ್ತರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.
ಅವಧಿ ಮುಂದಿನ ತಿಂಗಳು ಅಂತ್ಯಗೊಳ್ಳಲಿದ್ದು, ರಾಜ್ಯ ಸರ್ಕಾರ ಯಾವುದೇ ಸಮಯದಲ್ಲಾದರೂ ಚುನಾವಣೆ ನಡೆಸುವ ಸಾಧ್ಯತೆ ಇರುವುದರಿಂದ ಚುನಾವಣೆ ಎದುರಿಸಲು ಸಿದ್ದರಾಗಬೇಕು. ಕಾರ್ಯಕರ್ತರು ತಮ್ಮ ತಮ್ಮ ವಾರ್ಡ್ಗಳಲ್ಲಿ ಪಕ್ಷದ ಮುಖಂಡರೊಂದಿಗೆ ಸೇರಿ ಪಕ್ಷ ಸಂಘಟನೆ ಮಾಡಬೇಕೆಂದು ಕರೆ ನೀಡಿದರು.
ಕಾಂಗ್ರೆಸ್ ಪಕ್ಷ ಬಡವರ ಪಕ್ಷ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬಡವರ ಅನುಕೂಲಕ್ಕಾಗಿ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಯೋಜನೆಗಳು ಪ್ರತಿ ಕುಟುಂಬಕ್ಕೂ ತಲುಪಿದ್ದು, ಕಾರ್ಯಕರ್ತರು ಮನೆ ಮನೆಗೆ ತೆರಳಿ ಸರ್ಕಾರದ ಸಾಧನೆಗಳನ್ನು ತಿಳಿಸಬೇಕೆಂದರು.
ಉತ್ತರ ವಿಧಾನಸಭಾ ಕ್ಷೇತ್ರದ ನಗರ ಘಟಕದ ಅಧ್ಯಕ್ಷ ಕೆ.ಜಿ. ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ಮಹಾಪೌರರಾದ ಕೆ. ಚಮನ್ಸಾಬ್, ಉಪ ಮಹಾಪೌರರಾದ ಸೋಗಿ ಶಾಂತಕುಮಾರ್, ಮಾಜಿ ನಗರಸಭೆ ಅಧ್ಯಕ್ಷ ಆರ್.ಹೆಚ್. ನಾಗಭೂಷಣ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಶ್ರೀಮತಿ ಅನಿತಾಬಾಯಿ ಮಾಲತೇಶ್, ಬ್ಲಾಕ್ ಅಧ್ಯಕ್ಷರಾದ ಶ್ರೀಮತಿ ಮಂಗಳಮ್ಮ ಮತ್ತಿತರರು ಮಾತನಾಡಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀಮತಿ ಸವಿತ ಗಣೇಶ್ ಹುಲ್ಮನಿ, ಶ್ರೀಮತಿ ಆಶಾ ಉಮೇಶ್, ಸದಸ್ಯರುಗಳಾದ ಅಬ್ದುಲ್ ಲತೀಫ್, ಜಿ.ಎಸ್. ಮಂಜುನಾಥ್ ಮತ್ತು ಇತರರು ಭಾಗವಹಿಸಿದ್ದರು.