ಸುಗಮ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸೂಕ್ತ ಕ್ರಮ

ಜಗಳೂರು ತಹಶೀಲ್ದಾರ್ ಡಾ. ನಾಗವೇಣಿ

ಜಗಳೂರು, ಜು.1- ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಸುರಕ್ಷತೆ ಮತ್ತು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪೋಷಕರು ಹಾಗೂ ವಿದ್ಯಾರ್ಥಿಗಳು ಸಹಕರಿಸಬೇಕು ಎಂದು ತಹಶೀಲ್ದಾರ್ ಡಾ. ನಾಗವೇಣಿ ಹೇಳಿದರು.

ಪಟ್ಟಣದ ಗುರುಭವನದಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಪೂರ್ವಸಿದ್ಧತಾ ಸಭೆಯನ್ನು ಉದ್ಘಾಟಿಸಿ  ಅವರು ಮಾತನಾಡಿದರು.

2021 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜುಲೈ 19 ಹಾಗೂ 22 ರಂದು ನಡೆಯಲಿದ್ದು, ಸರ್ಕಾರದ ಆದೇಶಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕರ್ತವ್ಯ ನಿರ್ವಹಿಸುವ ಶಿಕ್ಷಕರು ಕಡ್ಡಾಯವಾಗಿ ಕೋವಿಡ್  ಲಸಿಕೆ  ಹಾಕಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇಓ ಮಲ್ಲಾನಾಯ್ಕ ಮಾತನಾಡಿ, ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪರೀಕ್ಷಾ ಕೇಂದ್ರದ ಕೊಠಡಿಗಳನ್ನು  ಸ್ಯಾನಿಟೈಸ್‌ ಮಾಡಲು ಹಾಗೂ ಕುಡಿಯುವ ನೀರಿನ ಪೂರೈಕೆ ಸೇರಿದಂತೆ ಸಕಲ ಸಿದ್ಧತೆ ನಡೆಸಲು ಪಿಡಿಓಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಟಿಎಚ್‌ಒ ಡಾ. ನಾಗರಾಜ್ ಮಾತನಾಡಿ, ಆರೋಗ್ಯ ಇಲಾಖೆ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಕಿಟ್‌ಗಳನ್ನು ಪರೀಕ್ಷೆ ನಡೆಸುವ  ಮೇಲ್ವಿಚಾರಕರಿಗೆ ಹಾಗೂ ಸಿಬ್ಬಂದಿಗಳಿಗೆ ಕೋವಿಡ್ ಸುರಕ್ಷತಾ ಕಿಟ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದರು.

ಪ್ರಭಾರಿ ಬಿಇಓ ಡಿ. ಮಂಜುನಾಥ್ ಮಾತನಾಡಿ, ತಾಲ್ಲೂಕಿನಲ್ಲಿ 14 ಪರೀಕ್ಷಾ ಕೇಂದ್ರಗಳನ್ನು ಪ್ರೌಢಶಾಲೆ ಶಿಕ್ಷಕರಿಗೆ ಸಂಪೂರ್ಣ  ಜವಾಬ್ದಾರಿ ಒದಗಿಸಿದ್ದು, ಸಿಬ್ಬಂದಿ ಕೊರತೆ ಇರುವ ಕಡೆ ಅಗತ್ಯವಿರುವಲ್ಲಿ  ಪ್ರಾಥಮಿಕ ಶಾಲಾ ಶಿಕ್ಷಕರನ್ನು ಹೆಚ್ಚುವರಿಯಾಗಿ ನಿಯೋಜಿಸಲಾಗುವುದು ಎಂದು ತಿಳಿಸಿದರು.

ಸಮಾರಂಭದಲ್ಲಿ ಪ.ಪಂ. ಮುಖ್ಯಾಧಿಕಾರಿ ರಾಜು ಡಿ. ಬಣಕಾರ್, ಪೊಲೀಸ್ ವೃತ್ತ ನಿರೀಕ್ಷಕ ಮಂಜುನಾಥ್ ಪಂಡಿತ್, ಬಿಆರ್‌ಸಿ ಗಿರೀಶ್, ದೈಹಿಕ ಶಿಕ್ಷಕರ ಸಂಘದ ತಾಲ್ಲೂಕು ಅಧ್ಯಕ್ಷ ವೆಂಕಟೇಶ್, ಪ್ರೌಢಶಾಲಾ ಮುಖ್ಯಶಿಕ್ಷಕರ ಸಂಘದ ಅಧ್ಯಕ್ಷ  ಹಾಲಪ್ಪ, ಪದಾಧಿಕಾರಿ ಜಯಶೀಲರೆಡ್ಡಿ, ಪ್ರೌಢಶಾಲಾ ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಎಲ್.ಟಿ. ಬಸವರಾಜ್, ಇಸಿಓ ಹನುಮಂತಪ್ಪ ಇನ್ನಿತರರಿದ್ದರು.

error: Content is protected !!