ದಾವಣಗೆರೆ, ಫೆ. 18 – ಆರೋಗ್ಯ ವಲಯ ಹಾಗೂ ಮುಂಚೂಣಿ ವಲಯಗಳಲ್ಲಿ ಕಾರ್ಯ ನಿರ್ವಹಿಸುವವರು ಕೊರೊನಾ ಲಸಿಕೆ ಪಡೆಯದೇ ಇದ್ದರೆ ಸರ್ಕಾರಿ ಸೌಲಭ್ಯ ಕಡಿತಗೊಳಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸ್ಪಷ್ಟನೆ ನೀಡಿದ್ದಾರೆ.
ಆರೋಗ್ಯ ಇಲಾಖೆ ಆಯುಕ್ತ ಡಾ. ತ್ರಿಲೋಕಚಂದ್ರ ಅವರು ನಿನ್ನೆ ವಿಡಿಯೋ ಕಾನ್ಫರೆನ್ಸ್ನಲ್ಲಿ ಮಾತನಾಡುತ್ತಾ, ಲಸಿಕೆ ಪಡೆಯದ ಮೊದಲ ಹಾಗೂ ಎರಡನೇ ಹಂತದ ಫಲಾನುಭವಿಗಳಿಗೆ ಸರ್ಕಾರದಿಂದ ಯಾವುದೇ ಸೌಲಭ್ಯ ನೀಡುವುದಿಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಬೀಳಗಿ ನಿನ್ನೆ ಹೇಳಿದ್ದರು.
ಈ ಕುರಿತು ಪತ್ರಕರ್ತರೊಂದಿಗೆ ಮಾತನಾಡುತ್ತಾ ಸ್ಪಷ್ಟನೆ ನೀಡಿರುವ ಅವರು, ಲಸಿಕೆ ಪಡೆಯದವರಿಗೆ ಸರ್ಕಾರಿ ಸೌಲಭ್ಯಗಳನ್ನು ಕಡಿತಗೊಳಿಸುವುದಿಲ್ಲ ಎಂದಿದ್ದಾರೆ.
ಆದರೆ, ಈ ಹಿಂದೆ ಕೊರೊನಾ ಸೋಂಕಿಗೆ ಒಳಗಾದಾಗ ಸರ್ಕಾರದಿಂದ ಚಿಕಿತ್ಸಾ ಸೌಲಭ್ಯ ಕಲ್ಪಿಸಲಾಗಿತ್ತು. ಲಸಿಕೆ ಪಡೆಯದೇ ಇದ್ದರೆ ಸೋಂಕು ಬರುವ ಸಾಧ್ಯತೆ ಇರುತ್ತದೆ. ಮತ್ತೆ ಕೊರೊನಾ ಸೋಂಕು ಬಂದಾಗ ಹಿಂದಿನ ರೀತಿಯಲ್ಲಿ ಸರ್ಕಾರದಿಂದ ಉಚಿತ ಚಿಕಿತ್ಸಾ ಸೌಲಭ್ಯ ಲಭ್ಯವಾಗದೇ ಇರಬಹುದು ಎಂದು ಡಾ. ತ್ರಿಲೋಕಚಂದ್ರ ಅಭಿಪ್ರಾಯ ತಿಳಿಸಿದ್ದಾರೆ ಎಂದು ಬೀಳಗಿ ಹೇಳಿದ್ದಾರೆ.
ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದವರಿಗೆ ನೀಡಲಾದ ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯಲ್ಲಿ 18920 ಫಲಾನುಭವಿಗಳಿಗೆ ಲಸಿಕೆ ನೀಡುವ ಗುರಿ ಬದಲಿಗೆ ಈವರೆಗೆ 9979 ಜನರು ಲಸಿಕೆ ಹಾಕಿಸಿಕೊಂಡಿದ್ದು, ಶೇ. 52.7 ಸಾಧನೆಯಾಗಿದೆ.
ಎರಡನೆ ಹಂತದಲ್ಲಿ ಪೊಲೀಸ್, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ ಅಧಿಕಾರಿ, ಸಿಬ್ಬಂದಿಗಳಿಗೆ ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿ ಅವರಿಗೆ ಕೋವಿಡ್ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿತ್ತು. ಇವರೂ ಸಹ ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದಿಲ್ಲ.
ಲಸಿಕೆ ತೆಗೆದುಕೊಳ್ಳಲು ಮನವಿ : ಕೋವಿಡ್ ಲಸಿಕೆಯಿಂದ ಯಾವುದೇ ತೊಂದರೆ ಇಲ್ಲ. ಅದಕ್ಕೆ ನಾನು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ ಇತರೆ ಅಧಿಕಾರಿಗಳೇ ಉದಾಹರಣೆ. ನಾವು ಲಸಿಕೆ ಪಡೆದಿದ್ದು, ಏನೂ ಅಡ್ಡ ಪರಿಣಾಮ ಆಗಿಲ್ಲ ಎಂದು ಜಿಲ್ಲಾಧಿಕಾರಿ ಬೀಳಗಿ ತಿಳಿಸಿದ್ದಾರೆ.
ಆದರೆ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ. ಯಾರೂ ಹಿಂಜರಿಯದೇ ಲಸಿಕೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಮನವಿ ಮಾಡಿಕೊಂಡಿದ್ದಾರೆ.
ಮಾರ್ಗಸೂಚಿಯಂತೆ ಪುನರ್ವಿಂಗಡಣೆ : ಜಿಲ್ಲಾ ಪಂಚಾಯ್ತಿ ಹಾಗೂ ತಾಲ್ಲೂಕು ಪಂಚಾಯ್ತಿ ಕ್ಷೇತ್ರಗಳ ಪುನರ್ವಿಂಗಡಣೆ ಸರ್ಕಾರದ ಮಾರ್ಗಸೂಚಿ ಅನ್ವಯವೇ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಹೇಳಿದ್ದಾರೆ.
ಕ್ಷೇತ್ರ ಪುನರ್ವಿಂಗಡಣೆ ಕುರಿತು ಕೆಲ ಜನಪ್ರತಿನಿಧಿಗಳು ಆಕ್ಷೇಪ ವ್ಯಕ್ತಪಡಿಸಿರುವ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ, 2011ರ ಜನಗಣತಿ ಹಾಗೂ 2015ರ ಮಾರ್ಗಸೂಚಿಗಳ ಅನ್ವಯ ಕ್ಷೇತ್ರಗಳ ಪುನರ್ವಿಂಗಡಣೆ ನಡೆಯುತ್ತಿದೆ. ಮಾರ್ಗದರ್ಶಿ ಸೂತ್ರ ಬಿಟ್ಟು ಕ್ಷೇತ್ರ ಪುನರ್ವಿಂಗಡಣೆ ಮಾಡಲು ಅವಕಾಶವಿಲ್ಲ ಎಂದು ತಿಳಿಸಿದ್ದಾರೆ.