ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಕಿವಿಮಾತು
ದಾವಣಗೆರೆ, ಮಾ. 8- ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಸ್ಥಿತಿಗತಿ ಬಗ್ಗೆ ತಿಳಿಯಲು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮಂಗಳವಾರ ನಗರಕ್ಕೆ ಭೇಟಿ ನೀಡಿ ಸಭೆ ನಡೆಸಿದರು.
ಬಿಜೆಪಿ ಕಛೇರಿಯಲ್ಲಿ ಪ್ರಮುಖರ ಸಭೆ ನಡೆಸಿದ ಅವರು ಬಳಿಕ ದಾವಣಗೆರೆ-ಹರಿಹರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ಶಕ್ತಿ ಕೇಂದ್ರದ ಪ್ರಮುಖರ ಜೊತೆಗೆ ಚರ್ಚೆ ನಡೆಸಿದರು.
ಮತದಾರರ ಜೊತೆಗೆ ನೇರ ಸಂಪರ್ಕವನ್ನು ಇಟ್ಟುಕೊಳ್ಳಬೇಕು. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಯನ್ನು ತಿಳಿ ಹೇಳಬೇಕು. ಪಕ್ಷದ ಸಿದ್ಧಾಂತವನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು. ಆ ಸಿದ್ಧಾಂತದಂತೆ ನಡೆದುಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಪ್ರತಿ ಕ್ಷೇತ್ರದ ವಿವರ ಪಡೆದರು. ಅವರು ಕೆಲಸ ಮಾಡಿಲ್ಲ. ಇವರು ಕೆಲಸ ಮಾಡಿಲ್ಲ ಎಂದು ದೂರುತ್ತಾ ಕೂರದೇ ನೀವು ಕೆಲಸ ಮಾಡಿ. ಯಾರಿಗೆ ಟಿಕೆಟ್ ನೀಡಬೇಕು ಎಂದು ಪಕ್ಷ ನಿರ್ಧರಿಸುತ್ತದೆ ಎಂದು ಹೇಳಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಇದೇ ದಿನಾಂಖ 25ರಂದು ನಗರದಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಲಾಗಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಾವೇಶ ನಡೆಯುವ ಸ್ಥಳವನ್ನು ಸಂತೋಷ್ ಪರಿಶೀಲಿಸಿದರು.
ಸಂಸದ ಜಿ.ಎಂ. ಸಿದ್ದೇಶ್ವರ, ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ, ಜಗಳೂರು ಶಾಸಕ ಎಸ್.ವಿ. ರಾಮಚಂದ್ರ, ಮಾಯಕೊಂಡ ಶಾಸಕ ಪ್ರೊ|| ಲಿಂಗಣ್ಣ, ಜಿಲ್ಲಾ ಬಿಜೆಪಿ ಅಧ್ಯಕ್ಷ ಹನಗವಾಡಿ ವೀರೇಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್, ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್, ಯುವ ಮುಖಂಡ ಜಿ.ಎಸ್. ಅನಿತ್ ಮತ್ತಿತರರು ಈ ವೇಳೆ ಇದ್ದರು.