ದಾವಣಗೆರೆ, ಅ. 24 – ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರನ್ನು ಆಯ್ಕೆ ಮಾಡಲು ಕರ್ನಾಟಕ ಸರ್ಕಾರವು ಕರೆದಿರುವ ಉನ್ನತ ಮಟ್ಟದ ಆಯ್ಕೆ ಸಮಿತಿ ಸಭೆಗೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ್ ಜೋಶಿ ಅವರನ್ನು ಆಹ್ವಾನಿಸಿರುವ ಸರ್ಕಾರದ ನಿರ್ಧಾರವನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಸ್ವಾಗತಿಸಿದ್ದಾರೆ. ಕಳೆದ ಎರಡು ವರ್ಷಗಳಿಂದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಆಯ್ಕೆ ಸಮಿತಿಯಿಂದ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರನ್ನು ಹೊರಗಿಡಲಾಗಿತ್ತು. ಇದನ್ನು ಬಿ. ವಾಮದೇವಪ್ಪ ತೀವ್ರವಾಗಿ ವಿರೋಧಿಸಿದ್ದರು. 108 ವರ್ಷಗಳ ಇತಿಹಾಸವಿರುವ ಮತ್ತು ಸರ್ವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರನ್ನು ಆಯ್ಕೆ ಸಮಿತಿಯಲ್ಲಿ ಸೇರಿಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದರು. ಜೊತೆಗೆ ಈ ಶಿಷ್ಟಾಚಾರವು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲೂ ಅನುಸರಿ ಸಬೇಕೆಂದು ವಾಮದೇವಪ್ಪ ಅವರು ಪ್ರತಿಪಾದಿಸಿದ್ದರು.
December 5, 2024