ನಗರದಲ್ಲಿ ಇಂದು ಸರ್ಕಾರಿ ನೌಕರರ ಸಂಘದಿಂದ ವಾರ್ಷಿಕ ಮಹಾಸಭೆ

ದಾವಣಗೆರೆ, ನ. 26- ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯಿಂದ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಮುದಾಯ ಭವನದಲ್ಲಿ ನಾಳೆ ದಿನಾಂಕ 27 ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಪ್ರಸಕ್ತ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಹಾಗೂ ಕರ್ನಾಟಕ ರಾಜ್ಯೋತ್ಸವ ಆಚರಣೆ ಕಾರ್ಯಕ್ರಮ  ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಜಿಲ್ಲಾಧ್ಯಕ್ಷ ವೀರೇಶ್ ಎಸ್.ಒಡೇನಪುರ ತಿಳಿಸಿದ್ದಾರೆ.

ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ   ಶಾಮನೂರು ಶಿವಶಂಕರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜನ್ ಭುವನೇಶ್ವರಿ ದೇವಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಿದ್ದಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಾಕ್ಷರಿ ಪ್ರತಿಭಾ ಪುರಸ್ಕಾರ ಪ್ರಧಾನ ಮಾಡಲಿದ್ದಾರೆ ಎಂದು ಹೇಳಿದರು.

ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಶಾಂತನಗೌಡ ಡಿ.ಜಿ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ, ಎಸ್ಪಿ ಉಮಾ ಪ್ರಶಾಂತ್, ಜಿ.ಪಂ. ಸಿಇಒ ಸುರೇಶ್ ಬಿ.ಇಟ್ನಾಳ್ ಉಪಸ್ಥಿತರಿರಲಿದ್ದಾರೆ.

‘ಪ್ರಜಾಸ್ನೇಹಿ ಆಡಳಿತದಲ್ಲಿ ನೌಕರರ ಪಾತ್ರ’ ವಿಷಯ ಕುರಿತು ಸಂಪನ್ಮೂಲ ವ್ಯಕ್ತಿ ಮಹೇಶ್‌ ಮಾಶ್ಯಾಳ್ ಉಪನ್ಯಾಸ ನೀಡುವರು. ಗಂಗಾವತಿ ಪ್ರಾಣೇಶ್ ತಂಡದವರಿಂದ ಹಾಸ್ಯ ಸಂಜೆ ಕಾರ್ಯಕ್ರಮ ನಡೆಯಲಿದೆ. ಸಂಘದ ಶ್ರೀನಿವಾಸ್ ತಿಮ್ಮೇಗೌಡ, ಮಲ್ಲಿಕಾರ್ಜುನ್ ಬಿ. ಬಳ್ಳಾರಿ, ಗೌರವಾಧ್ಯಕ್ಷ ಬಿ.ಎಚ್. ವೆಂಕಟೇಶಯ್ಯ, ಎಂ.ವಿ. ರುದ್ರಪ್ಪ ಸೇರಿದಂತೆ ಹಲವರು ಭಾಗಹಿಸುವರು. ಎಸ್ಸೆಸ್ಸೆಲ್ಸಿಯಲ್ಲಿ ಶೇ 90ಕ್ಕಿಂತ ಹೆಚ್ಚು ಅಂಕ ಗಳಿಸಿದ 114 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಜಿಲ್ಲಾ ಕಾರ್ಯದರ್ಶಿ ಗುರುಮೂರ್ತಿ ಸಿ, ಖಜಾಂಚಿ ತಿಪ್ಪೇಸ್ವಾಮಿ ಬಿ.ಆರ್., ಗೌರವಾಧ್ಯಕ್ಷ ಸಿ.ತಿಪ್ಪೇಸ್ವಾಮಿ, ಕಾರ್ಯಾಧ್ಯಕ್ಷ ಪಾಲಾಕ್ಷಿ ಬಿ. , ಗಣೇಶ್ ಡಿ.ಎನ್. ಉಪಸ್ಥಿತರಿದ್ದರು.

error: Content is protected !!