ಸಿದ್ದರಾಮಯ್ಯ, ಯಡಿಯೂರಪ್ಪ, ಎಸ್ಸೆಸ್, ಬೊಮ್ಮಾಯಿ, ನಂದಿಗುಡಿ, ಪುಷ್ಪಗಿರಿ, ಸಿರಿಗೆರೆ, ಕಾಗಿನೆಲೆ ಶ್ರೀಗಳ ಭಾಗಿ
ಮಲೇಬೆನ್ನೂರು, ಜ.11- ಬ್ಯಾಡಗಿ ತಾಲ್ಲೂಕಿನ ಚಿಕ್ಕಬಾಸೂರಿನಲ್ಲಿ ಇದೇ ದಿನಾಂಕ 14 ಮತ್ತು 15 ರಂದು ಶ್ರೀ ಗುರುಸಿದ್ದರಾಮೇಶ್ವರರ 851ನೇ ಜಯಂತಿ ಮಹೋತ್ಸವವನ್ನು ಹಮ್ಮಿಕೊಳ್ಳ ಲಾಗಿದೆ ಎಂದು ನೊಳಂಬ ಸಮಾಜದ ಮುಖಂಡ ಜಿ.ಬೇವಿನಹಳ್ಳಿಯ ಬಿ.ಕೆ.ಮಹೇಶ್ವರಪ್ಪ ತಿಳಿಸಿದ್ದಾರೆ.
ಇದೇ ದಿನಾಂಕ 14ರ ಭಾನುವಾರ ಬೆಳಿಗ್ಗೆ 7.30ಕ್ಕೆ ನೊಳಂಬ ಲಿಂಗಾಯತ ಸಂಘ ರಾಜ್ಯಾಧ್ಯಕ್ಷ ಎಸ್.ಆರ್.ಪಾಟೀಲ್ ಅವರು ನಂದಿ ಧ್ವಜಾರೋಹಣ ಮಾಡಲಿದ್ದಾರೆ
ನಂದಿಗುಡಿ ಬೃಹನ್ಮಠದ ಶ್ರೀ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಮತ್ತು ಪುಷ್ಪಗಿರಿ ಮಹಾಸಂಸ್ಥಾನದ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಹೋತನಹಳ್ಳಿಯ ಸಿದ್ಧಾರೂಢ ಮಠದ ಶ್ರೀ ಸದ್ಗುರು ಶ್ರೀ ಶಂಕರಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ನಂತರ ಬೆಳಿಗ್ಗೆ 8 ಗಂಟೆಗೆ ಶ್ರೀ ಗುರುಸಿದ್ದರಾಮೇಶ್ವರರ ಭಾವಚಿತ್ರದ ಮೆರವಣಿಗೆ ನಡೆಯಲಿದ್ದು, ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ್ ಚಾಲನೆ ನೀಡಲಿದ್ದಾರೆ.
ಬೆಳಿಗ್ಗೆ 11 ಗಂಟೆಗೆ ಜಯಂತ್ಯೋತ್ಸವವನ್ನು ನಂದಿಗುಡಿ ಬೃಹನ್ಮಠದ ಶ್ರೀ ಸಿದ್ದರಾಮೇಶ್ವರ ಶ್ರೀಗಳ ದಿವ್ಯ ನೇತೃತ್ವದಲ್ಲಿ ಮತ್ತು ಸಿರಿಗೆರೆ ಬೃಹನ್ಮಠದ ಶ್ರೀ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಕೆರೆಗೋಡಿ-ರಂಗಾಪುರ ಸುಕ್ಷೇತ್ರದ ಶ್ರೀಗುರು ಪರದೇಶಿಕೇಂದ್ರ ಸ್ವಾಮೀಜಿ, ಪುಷ್ಪಗಿರಿಯ ಶ್ರೀ ಸೋಮಶೇಖರ ಶಿವಾಚಾರ್ಯ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ.
ಮಾಜಿ ಶಾಸಕ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆ ವಹಿಸಲಿದ್ದು, ತುಮಕೂರು ಸಂಸದ ಜಿ.ಎಸ್.ಬಸವರಾಜ್, ಮಾಜಿ ಸಿಎಂ ಬಸವರಾಜ ಬೊಮ್ಮಾ ಯಿ, ಬಿ.ಸಿ.ಪಾಟೀಲ್, ಎಸ್.ಎಂ.ನಾಗರಾಜ್, ಎಂ.ಪಿ.ರೇಣುಕಾಚಾರ್ಯ ಸೇರಿದಂತೆ ಇನ್ನೂ ಅನೇಕರು ಭಾಗವಹಿಸಲಿದ್ದಾರೆ.
ಈ ವೇಳೆ ದಾವಣಗೆರೆಯ ಸುರೇಂದ್ರಪ್ಪ ವಿ.ಕಿರವಾಡಿ ಅವರಿಗೆ `ನೊಳಂಬ ಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಅಂದು ಮಧ್ಯಾಹ್ನ 3 ಗಂಟೆಗೆ ನಡೆಯುವ ಶರಣ ಸಾಹಿತ್ಯ ಗೋಷ್ಠಿಯನ್ನು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಉದ್ಘಾಟಿಸುವರು.
ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ದಿನಾಂಕ 15ರ ಸೋಮವಾರ ಬೆಳಿಗ್ಗೆ 6.30ಕ್ಕೆ ಇಷ್ಠಲಿಂಗ ಮಹಾಪೂಜೆ, ಬೆಳಿಗ್ಗೆ 9 ರಿಂದ 11 ಗಂಟೆವರೆಗೆ ಮಹಿಳಾಗೋಷ್ಠಿ, 11 ರಿಂದ 1 ಗಂಟೆವರೆಗೆ ಕೃಷಿಗೋಷ್ಠಿ ಜರುಗಲಿದ್ದು, ಮಧ್ಯಾಹ್ನ 3 ಗಂಟೆಗೆ ಸಮಾ ರೋಪ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ.
ನಂದಿಗುಡಿ, ಪುಷ್ಪಗಿರಿ, ಕಾಗಿನೆಲೆ ಮತ್ತು ತಿಪಟೂರಿನ ಶ್ರೀ ಗುರುಕಲಾನಂದಶ್ರಮದ ಶ್ರೀಗಳು ಸಾನ್ನಿಧ್ಯ ವಹಿಸುವರು. ಶಾಸಕ ಬಸವರಾಜ್ ಶಿವಣ್ಣನವರ್ ಅಧ್ಯಕ್ಷತೆ ವಹಿಸಲಿದ್ದು, ವಿಧಾನಸಭೆಯ ಉಪಸಭಾಪತಿ ರುದ್ರಪ್ಪ ಲಮಾಣಿ, ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ಕೆ.ಷಡಾಕ್ಷರಿ ಮತ್ತಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.