ಕಳಪೆ ಬಿತ್ತನೆ ಬೀಜ ಮಾರಾಟ ಜಾಲಕ್ಕೆ ಸಿಲುಕಬೇಡಿ

ಅಧಿಕೃತ ಮಾರಾಟ ಕೇಂದ್ರಗಳಲ್ಲಿ ಮಾತ್ರ ಬೀಜ ಖರೀದಿಸಲು ಸೂಚನೆ

ದಾವಣಗೆರೆ, ಮೇ 22 –   ಪ್ರಸಕ್ತ ಮುಂಗಾರು ಹಂಗಾಮು ಚುರುಕಾಗಿದ್ದು,  ಉತ್ತಮ ಇಳುವರಿ ಪಡೆಯುವಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಬಹು ಮುಖ್ಯ.  ಹಾಗಾಗಿ ರೈತರು ಬಿತ್ತನೆ ಬೀಜ ಖರೀದಿ ಮಾಡುವಾಗ ಎಚ್ಚರ ವಹಿಸಬೇಕೆಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ತಿಳಿಸಿದ್ದಾರೆ. 

ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ನಿಗದಿಪಡಿಸಿದ ಸಹಕಾರಿ ಸಂಘಗಳ ಮೂಲಕ ರಿಯಾಯತಿ ದರದಲ್ಲಿ ವಿವಿಧ ಬಿತ್ತನೆ ಬೀಜಗಳನ್ನು ವಿತರಣೆ ಮಾಡಲಾಗುವುದು.  ಜಿಲ್ಲೆಯ ವಿವಿಧ ಕೃಷಿ ಪರಿಕರ ಮಾರಾಟ ಮಳಿಗೆಗಳಲ್ಲಿ ಗುಣಮಟ್ಟದ ಬಿತ್ತನೆ ಬೀಜಗಳು ಲಭ್ಯವಿದ್ದು, ರೈತರಿಗೆ ಯಾವುದೇ ಬಿತ್ತನೆ ಬೀಜಗಳ ಕೊರತೆ ಇರುವುದಿಲ್ಲ.  

ಆದರೆ ಇತ್ತೀಚಿನ ದಿನಗಳಲ್ಲಿ ಕಳಪೆ, ಬಿಡಿ ಬಿತ್ತನೆ ಬೀಜದ ಹಾವಳಿ ಹೆಚ್ಚಾಗುತ್ತಿದೆ. ಅಲ್ಲಲ್ಲಿ ರೈತರು ಅನಧಿಕೃತ ಲೂಸ್ ಬಿತ್ತನೆ ಬೀಜಗಳನ್ನು ಖರೀದಿಸುತ್ತಿರುವುದಾಗಿ ತಿಳಿದು ಬಂದಿದೆ.   ಹಲವರು ಲೂಸ್ ಬೀಜಗಳನ್ನು ವಿವಿಧ ಭಾಗಗಳಿಂದ ಸಂಗ್ರಹಿಸಿ ರೈತರಿಗೆ ಮಾರಾಟ ಮಾಡುತ್ತಿದ್ದಾರೆ.  ರೈತರು ಬಿಡಿ ಬೀಜಗಳನ್ನು ಖರೀದಿಸಿ ಬಿತ್ತನೆ ಮಾಡಿ ತೊಂದರೆ ಹಾಗೂ ಬೆಳೆ ನಷ್ಟ ಅನುಭವಿಸಿದಲ್ಲಿ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ಪರಿಹಾರ ಪಡೆಯಲು ಅರ್ಹರಾಗುವುದಿಲ್ಲ.  ಆದ್ದರಿಂದ ರೈತರು ಲೂಸ್ ಬಿತ್ತನೆ ಬೀಜ ಮಾರಾಟ ಜಾಲಕ್ಕೆ ಸಿಲುಕದೇ ಉತ್ತಮ ಗುಣಮಟ್ಟದ ದೃಢೀಕೃತ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಿಂದ ಅಧಿಕೃತ ಕೃಷಿ ಪರಿಕರ ಮಾರಾಟಗಾರರಿಂದ ಖರೀದಿಸಿ ಬಿತ್ತನೆ ಮಾಡಬೇಕು.

ಜಿಲ್ಲೆಯಲ್ಲಿ ಯಾವುದೇ ಅನಧಿಕೃತ ಲೂಸ್ ಬಿತ್ತನೆ ಬೀಜ ದಾಸ್ತಾನು ಹಾಗೂ ಮಾರಾಟ ಮಾಡುವವರು ಕಂಡು ಬಂದಲ್ಲಿ, ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ)  ಮೊ.  8277931106/8277931207ಗೆ ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಗಳನ್ನು ಸಂಪರ್ಕಿಸ ಬೇಕೆಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

error: Content is protected !!