ದಾವಣಗೆರೆ, ಜು. 7 – ರಾಜ್ಯದ ಖಾಸಗಿ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಇಲ್ಲ. ಇದರಿಂದಾಗಿ ಭಾರೀ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಸರ್ಕಾರ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಬೇಕೆಂದು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದರು.
ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ ಅವರು ಮಾತನಾಡಿದರು.
ರಾಜ್ಯದ ಖಾಸಗಿ ಕಾಲೇಜುಗಳಲ್ಲಿ ಬಿಇಡಿ, ಡಿಪ್ಲೋಮಾ, ಐಟಿಐ, ಪ್ಯಾರಾ ಮೆಡಿಕಲ್ ಸೇರಿದಂತೆ ವಿವಿಧ ಜಾಬ್ ಓರಿಯೆಂಟೆಡ್ ಕೋರ್ಸ್ಗಳಿಗೆ ಪ್ರವೇಶ ಪಡೆದ ಗ್ರಾಮೀಣ ಪ್ರದೇಶದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಕ್ಕಳಿಗೆ ಹಾಸ್ಟೆಲ್ ವ್ಯವಸ್ಥೆ ಇಲ್ಲ. ಪ್ರತಿನಿತ್ಯ 25-30 ಕಿ.ಮೀ. ದೂರದ ಊರುಗಳಿಂದ ಕಾಲೇಜಿಗೆ ಬಂದು ಹೋಗುವುದು ಬಹಳ ಕಷ್ಟವಾಗುತ್ತಿದೆ. ಅಲ್ಲದೇ, ಆ ಮಕ್ಕಳು ಶಿಕ್ಷಣ ವಂಚಿತರಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರ ಅನುದಾನ ಒದಗಿಸಿ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಿದರೆ ಬಡ ಮಕ್ಕಳು ಶಿಕ್ಷಣ ಕಲಿತು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.
ಕೆಎಸ್ಎಸ್ಐಡಿಸಿಯಲ್ಲಿ ಉದ್ದಿಮೆ ಸ್ಥಾಪಿಸಲು ನಿವೇಶನ ಪಡೆದ ಎಸ್ಸಿ-ಎಸ್ಟಿ ನಿರುದ್ಯೋಗಿ ಯುವಕರು ಆರ್ಥಿಕ ತೊಂದರೆಯಿಂದ ಕಂತು ಪಾವತಿ ಮಾಡಲು ವಿಳಂಬ ಆಗಿರುತ್ತದೆ. ಅದಕ್ಕೆ ಹೆಚ್ಚಿನ ಬಡ್ಡಿ ವಿಧಿಸುತ್ತಿದ್ದು, ಮೊದಲೇ ಆರ್ಥಿಕ ಸಂಕಷ್ಟದಿಂದ ಎದುರಿಸುತ್ತಿರುವ ಎಸ್ಸಿ-ಎಸ್ಟಿ ಫಲಾನುಭವಿಗಳಿಗೆ ಹೆಚ್ಚಿನ ಬಡ್ಡಿ ಹಾಕುವುದು ಸರಿಯಲ್ಲ. ಕೂಡಲೇ ಬಡ್ಡಿಯನ್ನು ಮನ್ನಾ ಮಾಡಬೇಕು. ಉದ್ಯಮ ಸ್ಥಾಪಿಸಿ ಆರ್ಥಿಕ ವೃದ್ಧಿ ಕಾಣುವ ಫಲಾನುಭವಿಗಳಿಗೆ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ದೇವದಾಸಿ ಮಕ್ಕಳಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ನೇರ ಪ್ರವೇಶ ಕಲ್ಪಿಸಲು ಅವಕಾಶ ನೀಡಬೇಕು. ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ನಿವೇಶನ ಹೊಂದಿರುವ ಎಸ್ಸಿ ಮತ್ತು ಎಸ್ಟಿ ಫಲಾನುಭವಿಗಳಿಗೆ ಮನೆ ಕಟ್ಟಿಕೊಳ್ಳಲು 1 ಲಕ್ಷ ರೂ. ನಿಗದಿ ಮಾಡಲಾಗಿದೆ. ಅದನ್ನು 3 ರಿಂದ 5 ಲಕ್ಷ ರೂ.ಗೆ ನಿಗದಿ ಮಾಡಬೇಕು. ಇದರಿಂದ ಬಡ ಕುಟುಂಬಗಳಿಗೆ ಅನುಕೂಲವಾಗಲಿದೆ ಎಂದರು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಶಾಸಕರ ಅಧ್ಯಕ್ಷತೆಯಲ್ಲಿ ಸರ್ಕಾರದಿಂದ ಬೋರ್ ವೆಲ್, ವಸತಿ, ಸಾಲ, ಗುಂಪು ಸಾಲ, ವೈಯಕ್ತಿಕ ಸಾಲ ಸೇರಿದಂತೆ ವಿವಿಧ ಸೌಲಭ್ಯಗಳ ವಿತರಣೆಗೆ ಕಡಿಮೆ ಪ್ರಮಾಣದ ಗುರಿ ನೀಡಲಾಗುತ್ತದೆ. ಸೌಲಭ್ಯ ವಿತರಿಸುವ ಗುರಿಯನ್ನು ಹೆಚ್ಚಳ ಮಾಡಬೇಕು ಎಂದು ಮುಖ್ಯಮಂತ್ರಿಗಳಿಗೆ ಬಸವಂತಪ್ಪ ಮನವಿ ಮಾಡಿದರು.