ದಾವಣಗೆರೆ, ಅ. 25- ತಾಲ್ಲೂಕಿನ ಲೋಕಿಕೆರೆ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದ್ದು, ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಪಂದಿಸದಿದ್ದಲ್ಲಿ ಗ್ರಾಮಕ್ಕೆ ಆಗಮಿಸುವ ಶಾಸಕರು, ಸಚಿವರು ಹಾಗೂ ಅಧಿಕಾರಿಗಳಿಗೆ ಘೇರಾವ್ ಹಾಕಲಾಗುವುದು ಮತ್ತು ನ್ಯಾಯಾಲಯದಲ್ಲಿ ಪಿಇಎಲ್ ಹಾಕುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಗ್ರಾಮದ ಮುಖಂಡ ಪುರಂದರ್ ಲೋಕಿಕೆರೆ ಅವರು, ಜಲಜೀವನ ಮಿಷನ್ ಯೋಜನೆಯಲ್ಲಿ ಕೋಟಿಗಟ್ಟಲೆ ಅವ್ಯವಹಾರ ನಡೆದಿದ್ದು, ಯೋಜನೆಯಡಿ ಕಾಮಗಾರಿ ಕೂಡ ಕಳಪೆಯಿಂದ ಕೂಡಿದೆ. ಎರಡು ವರ್ಷಗಳಿಂದ ಜನರಿಗೆ ಶುದ್ಧ ಕುಡಿಯುವ ನೀರಿನ ಸರಬರಾಜು ಆಗುತ್ತಿಲ್ಲ ಎಂದು ಆರೋಪಿಸಿದರು.
ಪ್ರಾಥಮಿಕ ಆರೋಗ್ಯ ಕೇಂದ್ರವಿದ್ದರೂ ವೈದ್ಯರುಗಳ ಹಾಗೂ ಸಿಬ್ಬಂದಿಗಳ ಕೊರತೆ ಇದ್ದು, ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಶಾಸಕರು ಇತ್ತ ಕಡೆ ಗಮನಹರಿಸುತ್ತಿಲ್ಲ. ಮುಖ್ಯಮಂತ್ರಿಗಳು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಾರೆ. ನಾವಾಗಿಯೇ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಮನವಿ ಮಾಡಿದರೆ ಆಯ್ತು ಮಾಡೋಣ ಎನ್ನುತ್ತಾರೆ. ಆದರೆ ಇಲ್ಲಿಯವರೆಗೂ ಯಾವುದೇ ಕೆಲಸ ಮಾಡಿಸಿಲ್ಲ ಎಂದು ದೂರಿದರು.
ಕೆಲಸ ಮಾಡಿಸಲು ಆಗದಿದ್ದರೆ ರಾಜೀನಾಮೆ ನೀಡಿ ಮನೆಗೆ ಹೋಗಿ, ಗ್ರಾಮಕ್ಕೆ ಬಂದರೆ ಘೇರಾವ್ ಹಾಕುವುದಾಗಿ ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಗ್ರಾಮದ ಮುಖಂಡರಾದ ಎಸ್.ಎಸ್. ನಾಗಪ್ಪ, ಆರ್. ರಾಮಸ್ವಾಮಿ, ಪೆರಿಯಾರ್ ಮಂಜುನಾಥ, ರುದ್ರಪ್ಪ ಉಪಸ್ಥಿತರಿದ್ದರು.