ದಾವಣಗೆರೆ, ಫೆ.2- ಮೂರು ಕೃಷಿ ಕಾಯ್ದೆಗಳನ್ನು ರದ್ದು ಪಡಿಸಬೇಕು, ಕಾರ್ಮಿಕ ವಿರೋಧಿ ತಿದ್ದುಪಡಿ ಕೈಬಿಡಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಸಂಚರಿಸುತ್ತಿರುವ ಪ್ರಚಾರ ಜಾಥಾ ಇಂದು ನಗರಕ್ಕಾಗಮಿಸಿತು.
ಕರ್ನಾಟಕ ಪ್ರಾಂತ ರೈತ ಸಂಘ, ಸೆಂಟ್ರಲ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್, ಅಖಿಲ ಭಾರತ ಕೃಷಿ ಕೂಲಿಕಾರರ ಸಂಘ, ಜನವಾದಿ ಮಹಿಳಾ ಸಂಘಟನೆ, ಭಾರತ ವಿದ್ಯಾರ್ಥಿ ಫೆಡರೇಷನ್, ಅಖಿಲ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್, ದಲಿತ ಹಕ್ಕುಗಳ ಸಮಿತಿಯಿಂದ ಹಮ್ಮಿಕೊಂಡಿರುವ ಜಾಥಾ ಆಗಮನದ ಹಿನ್ನೆಲೆಯಲ್ಲಿ ನಗರ ಪಾಲಿಕೆ ಕಚೇರಿ ಎದುರು ಏರ್ಪಡಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದ ಕೆಪಿಆರ್‍ಎಸ್ ಪ್ರಧಾನ ಕಾರ್ಯದರ್ಶಿ ಯು.ಬಸವರಾಜ್, ಕೇಂದ್ರ ಸರ್ಕಾರ ಸಂಸತ್ತಿನಲ್ಲಿ 2020ರಲ್ಲಿ ಅಂಗೀಕರಿಸಿರುವ ತ್ರಿವಳಿ ಕೃಷಿ ಕಾಯ್ದೆಗಳನ್ನು, ಉದ್ದೇಶಿತ ವಿದ್ಯುತ್ ಮಸೂದೆ ರದ್ದು ಪಡಿಸಬೇಕು. 29 ಕಾರ್ಮಿಕ ಕಾನೂನುಗಳನ್ನು ರದ್ದು ಮಾಡಿ, ಅಂಗೀಕರಿಸಿರುವ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದು ಪಡಿಸಬೇಕು. ಕೋವಿಡ್-19 ನಿಯಂತ್ರಣಕ್ಕಾಗಿ ಘೋಷಿಸಿದ್ದ ಲಾಕ್‍ಡೌನ್‍ನಿಂದ ಹಳಿ ತಪ್ಪಿರುವ ಆರ್ಥಿಕತೆಯ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ನೌಕರರ ಒಕ್ಕೂಟದ ಆರ್.ಎಸ್.ಬಸವರಾಜ, ದೇವದಾಸಿ ವಿಮೋಚನಾ ಸಂಘದ ಮಾಳಮ್ಮ, ಸಿಐಟಿಯು ಜಿಲ್ಲಾ ಸಂಚಾಲಕ ಕೆ.ಎಚ್.ಆನಂದರಾಜ್, ಎಸ್‍ಎಫ್‍ಐನ ಅನಂತರಾಜ್, ಕಟ್ಟಡ ಕಾರ್ಮಿಕರ ಸಂಘಟನೆಯ ಗುಡ್ಡಪ್ಪ, ತಿಮ್ಮಣ್ಣ, ಬೀದಿಬದಿ ವ್ಯಾಪಾರಿಗಳ ಸಂಘದ ಜಯಪ್ಪ ಎಂ.ಎಚ್, ಎಆರ್‍ಡಿಯು ಜಿಲ್ಲಾ ಸಂಚಾಲಕ ಶ್ರೀನಿವಾಸಮೂರ್ತಿ ಸೇರಿದಂತೆ ಇತರರು ಇದ್ದರು.