ದಾವಣಗೆರೆ, ಫೆ. 25- ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕು ಕುಮಾರ ಪಟ್ಟಣಂ ತುಂಗಭದ್ರಾ ನದಿ ತೀರದಲ್ಲಿ ಅವಿಮುಕ್ತ ತಪೋಕ್ಷೇತ್ರ ಪುಣ್ಯ ಕೋಟಿಮಠದಲ್ಲಿ ಮುಕ್ತಿಮಂದಿರ ಮಹರ್ಷಿ ಲಿಂ.ಶ್ರೀಮದ್ ರಂಭಾಪುರಿ ಜಗದ್ಗುರು ವೀರಗಂಗಾಧರ ಭಗವತ್ಪಾದರ ಪುಣ್ಯಸ್ಮರಣೋತ್ಸವದ ನಿಮಿತ್ತ್ಯ `ತುಂಗಾರತಿ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಇದೇ 28ರ ಸಂಜೆ 4 ಗಂಟೆಗೆ ನಡೆಯುವ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಆದಿಚುಂಚನಗಿರಿ ಮಠದ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ, ರಾಜನಹಳ್ಳಿ ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ವಹಿಸಲಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ರಾಮೇಗೌಡ ಹೇಳಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮುಜರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ತುಂಗಾರತಿ ಸಮಾರಂಭ ಉದ್ಘಾಟಿಸಲಿದ್ದಾರೆ. ರಾಣೇಬೆನ್ನೂರು ಶಾಸಕ ಅರುಣಕುಮಾರ ಪೂಜಾರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಹೇಳಿದರು.
ಜಲಸಂಪನ್ಮೂಲ ಇಲಾಖೆಯಿಂದ ಮಂಜೂರಾತಿ 10 ಕೋಟಿ ರೂ. ವೆಚ್ಚದಲ್ಲಿ ತುಂಗಭದ್ರಾ ನದಿಗೆ ತಡೆಗೋಡೆ ನಿರ್ಮಣದ ಅಡಿಗಲ್ಲು ಸಮಾರಂಭ ಹಾಗೂ ರಸ್ತೆ ನಿರ್ಮಾಣಕ್ಕೆ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಭೂಮಿ ಪೂಜೆ ನೆರವೇರಿಸಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರಿಗೆ ಶ್ರೀಕ್ಷೇತ್ರದ ದ್ವಿತೀಯ ವರ್ಷದ ವಿಶ್ವಮಾತಾ ಪುಣ್ಯಕೋಟಿ ಪ್ರಶಸ್ತಿಯನ್ನು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರಿಗೆ ಕನ್ನಡದ ಕುಲ ಸಾರ್ವಭೌಮ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಹೇಳಿದರು.
ದೊಡ್ಡೇರಿ ಅವಧೂತ ದತ್ತಾಶ್ರಮದ ಪರಮಹಂಸ ಸದ್ಗುರು ಶ್ರೀಸತ್ ಉಪಾಸಿ ಸಮ್ಮುಖದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ರಾಣೇಬೆನ್ನೂರು ಹಿರೇಮಠದ ಶ್ರೀ ಶಿವಯೋಗಿ ಶಿವಾಚಾರ್ಯರು ಪುಣ್ಯಕೋಟಿಯ ಬದುಕು-ಬೆಳಕು ನುಡಿ ನೈವೇದ್ಯ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವರುಗಳಾದ ಬಸವರಾಜ ಬೊಮ್ಮಾಯಿ, ಆರ್.ಶಂಕರ್, ಬಿ.ಸಿ. ಪಾಟೀಲ್ ಇತರೆ ಜನಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದು ಹೇಳಿದರು.
ದಾವಿವಿ ಕನ್ನಡ ವಿಭಾಗದ ಮುಖ್ಯಸ್ಥರೂ, ಜಾನಪದ ತಜ್ಞರೂ ಆದ ಡಾ.ಹೆಚ್.ವಿಶ್ವನಾಥ್, ಕರವೇ ಗೌರವಾಧ್ಯಕ್ಷ ವಾಸುದೇವ ರಾಯ್ಕರ್, ಕರವೇ ಪದಾಧಿಕಾರಿಗಳಾದ ಲೋಕೇಶ್, ತಿಮ್ಮೇಶ್, ಕೆ.ಜಿ. ಬಸವರಾಜ್, ಮಲ್ಲಿಕಾರ್ಜುನ್, ಎಂ.ಡಿ. ರಫೀಕ್, ಶ್ರೀಮತಿ ಬಸಮ್ಮ, ಎನ್.ಟಿ. ಹನುಮಂತಪ್ಪ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು.