ಬೆಂಗಳೂರು, ಏ.28- ಕೋವಿಡ್ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಹಾಗೂ ಜಿಲ್ಲಾ ಮತ್ತು ಗಡಿ ಘಟಕಗಳ ಅಧ್ಯಕ್ಷ ಸ್ಥಾನಕ್ಕೆ ಮೇ 9 ರಂದು ನಿಗದಿಯಾಗಿದ್ದ ಚುನಾವಣೆಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಪರಿಸ್ಥಿತಿ ಗಂಭೀರವಾಗಿದ್ದು, ಮತದಾರರು ಮತ್ತು ಚುನಾವಣಾ ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಟಿಯಿಂದ ಚುನಾವಣೆ ನಡೆಸುವುದು ಸೂಕ್ತವಲ್ಲ. ಕೋವಿಡ್ ಸಾಂಕ್ರಾಮಿಕ ಕಡಿಮೆಯಾಗುವವರೆಗೂ ಚುನಾವಣೆಯನ್ನು ಮುಂದೂಡಲು ತೀರ್ಮಾನಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣಾ ಪ್ರಕ್ರಿಯೆಯನ್ನು ಯಾವ ಹಂತದಲ್ಲಿ ಇರುತ್ತದೆಯೋ ಅಲ್ಲಿಂದ ಮುಂದೂಡಿ, ಮುಂದೆ ಅದೇ ಹಂತದಿಂದ ಚುನಾವಣೆ ಪ್ರಕ್ರಿಯೆಯನ್ನು ಯಥಾವತ್ತಾಗಿ ನಡೆಸಲು ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶದಲ್ಲಿ ತಿಳಿಸಿದೆ.