ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ವೀರೇಶ್
ದಾವಣಗೆರೆ,ಮಾ.11- ಕೋವಿಡ್ ಸಂಕಷ್ಟದ ದಿನಗಳು, ಪ್ರಕೃತಿ ವಿಕೋಪದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಭಿವೃದ್ಧಿಗೆ ಪೂರಕವಾಗಿರುವ ಬಜೆಟ್ ಮಂಡಿಸಿ ದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹನಗವಾಡಿ ಎಸ್.ಎಂ. ವೀರೇಶ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಬಾರಿಯ ಬಜೆಟ್ ನಲ್ಲಿ ತೆರಿಗೆ ಹೆಚ್ಚಳ ಮಾಡಿಲ್ಲ ಮತ್ತು ಹೊಸ ತೆರಿಗೆಯ ಪ್ರಸ್ತಾಪ ಕೂಡಾ ಇಲ್ಲ. ಎಲ್ಲಾ ವರ್ಗದ ಮತ್ತು ಎಲ್ಲಾ ಕ್ಷೇತ್ರಗಳಿಗೆ ಪ್ರಾಮುಖ್ಯತೆ ನೀಡುವ ಮೂಲಕ ಸಮತೋಲನ ಕಾಪಾಡಿಕೊಂಡು ಬರುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದರು.
ವಿಶ್ವ ಮಹಿಳಾ ದಿನಾಚರಣೆ ಸಂದರ್ಭದಲ್ಲಿ ಮಂಡನೆಯಾದ ಬಜೆಟ್ ನಲ್ಲಿ ಮಹಿಳಾ ಸ್ವಾವಲಂಬನೆ, ಉದ್ಯಮಶೀಲತೆ ಹಾಗೂ ಅಭ್ಯುದಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಸೇವಾ ವಲಯದ ಮಹಿಳಾ ಉದ್ಯಮಗಳಿಗೆ ಶೇ. 4ರ ಬಡ್ಡಿ ದರದಲ್ಲಿ 2 ಕೋಟಿವರೆಗೆ ಸಾಲ ಸೌಲಭ್ಯ ನೀಡುತ್ತಿರುವುದು ಸ್ವಾಗತಾರ್ಹ ಎಂದು ಹೇಳಿದರು.
ಸಾವಯವ ಉತ್ತೇಜನಕ್ಕಾಗಿ 500 ಕೋಟಿ ಮೀಸಲಿಟ್ಟಿದ್ದು, ಗೋ ಸಂಪತ್ತಿನ ರಕ್ಷಣೆಗಾಗಿ ಪ್ರತಿ ಜಿಲ್ಲೆಗಳಲ್ಲಿ ಗೋಶಾಲೆ ಆರಂಭ ಸೇರಿದಂತೆ, ರೈತ ವರ್ಗಕ್ಕೆ ಪ್ರಾಮುಖ್ಯತೆ ನೀಡಲಾಗಿದೆ ಎಂದು ಹೇಳಿದರು. ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ 31.028 ಕೋಟಿ, ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ 62.150 ಕೋಟಿ, ಆರ್ಥಿಕ ಅಭಿವೃದ್ಧಿಯ ಪ್ರಚೋದನೆಗೆ 52.529 ಕೋಟಿ, ಬೆಂಗಳೂರು ಸಮಗ್ರ ಅಭಿವೃದ್ಧಿಗೆ 7.795 ಕೋಟಿ, ಸಂಸ್ಕೃತಿ, ಪರಂಪರೆ, ನೈಸರ್ಗಿಕ ಸಂಪನ್ಮೂಲ ರಕ್ಷಣೆಗೆ 2.645 ಕೋಟಿ, ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗೆ 52.519 ಕೋಟಿ ರೂ. ಮೀಸಲಿಡಲಾಗಿದೆ ಎಂದು ಅವರು ಮಾಹಿತಿ ನೀಡಿದರು. ದಾವಣಗೆರೆ ಜಿಲ್ಲೆಗೆ ಜಯದೇವ ಹೃದ್ರೋಗ ಸಂಸ್ಥೆ ಉಪ ಕೇಂದ್ರ ಹಾಗೂ ಗೋಶಾಲೆ ಮಂಜೂರು ಮಾಡಿರುವುದು ಸಂತಸ ತಂದಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಸೊಕ್ಕೆ ನಾಗರಾಜ್, ಮಂಜಾನಾಯ್ಕ, ಡಿ.ಹೆಚ್. ಶಿವಶಂಕರ್, ವಿಶ್ವಾಸ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.