ಹೊನ್ನಾಳಿ, ಜೂ.1- ಜಿಲ್ಲೆಯಲ್ಲಿ 20,927 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ ಎಂದು ಸಾರ್ವ ಜನಿಕ ಶಿಕ್ಷಣ ಇಲಾಖೆ ಜಿಲ್ಲಾ ಉಪ ನಿರ್ದೇಶಕ ಪರಮೇಶ್ವರಪ್ಪ ತಿಳಿಸಿದರು.
ಪಟ್ಟಣದ ಶ್ರೀ ಹಳದಮ್ಮ ದೇವಿ ಬಾಲಕಿಯರ ಪ್ರೌಢಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಈಗಾಗಲೇ ಪರೀಕ್ಷೆ ಕುರಿತು ವಿಡಿಯೋ ಕಾನ್ಫರೆನ್ಸ್ ನಡೆಸಲಾಗಿದೆ. ಜೂನ್ 25 ರಿಂದ ಜುಲೈ 4 ರವರೆಗೆ ನಡೆಯುವ ಪರೀಕ್ಷೆಗೆ 79 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಹೆಚ್ಚುವರಿಯಾಗಿ 14 ಬ್ಲಾಕ್‌ಗಳನ್ನು ಸ್ಥಾಪಿಸಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ ಎಂದರು.
ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಗಳಿಗೆ ಎರಡು ಮಾಸ್ಕ್ ಹಾಗೂ ಸ್ಯಾನಿಟೈಸರ್‌ಗಳ ವ್ಯವಸ್ಥೆ ಮಾಡಲಾಗಿದೆ. ಒಂದು ಮಾಸ್ಕ್ ಶಿಕ್ಷಣ ಇಲಾಖೆ ನೀಡಿದರೆ ಇನ್ನೊಂದನ್ನು ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆ ನೀಡಿದೆ. ಪರೀಕ್ಷಾ ಕೊಠಡಿಯಲ್ಲಿ ಕೇವಲ 16 ರಿಂದ 20 ವಿದ್ಯಾರ್ಥಿಗಳಿಗೆ ಅವಕಾಶ ನೀಡಿದ್ದು, ಪ್ರತಿ ವಿದ್ಯಾರ್ಥಿ ಒಂದು ಮೀಟರ್ ಅಂತರ ಕಾಯ್ದುಕೊಳ್ಳಬೇಕಾಗಿದೆ. ಎಲ್ಲಾ ಕೇಂದ್ರಗಳಲ್ಲೂ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಸಿಬ್ಬಂದಿಗಳು ಒಂದು ಗಂಟೆ ಮುಂಚಿತವಾಗಿ ಬರ ಲಿದ್ದು, ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲ್ಲದೇ ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಉಚಿತ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದರು.
ಈ ಸಂದರ್ಭದಲ್ಲಿ ಎಸ್.ಎನ್. ಮೊಂಜಿಲ್, ಉಚಿತ ಮನೆ ಪಾಠ ಸಂಸ್ಥಾಪಕಿ ಷಹಜಹಾನ್ ಹೊನ್ನಾಳಿ ತಾಲ್ಲೂಕಿನ 2,900 ವಿದ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಉಚಿತ ಮಾಸ್ಕ್‌ಗಳನ್ನು ನೀಡುವುದಾಗಿ ಉಪನಿರ್ದೇಶಕರಿಗೆ ಭರವಸೆ ನೀಡಿದರು.