ದಾವಣಗೆರೆ, ಅ. 31- ನಗರದ ಹಳೇ ಭಾಗದಲ್ಲಿ ಮೂಲ ಸೌಕರ್ಯದ ಕೊರತೆ ಇದ್ದು, ಈ ಬಗ್ಗೆ ಮನವಿ ಸಲ್ಲಿಸಿದ್ದರೂ ಮಹಾನಗರ ಪಾಲಿಕೆಯ ಆಯುಕ್ತರು ಸ್ಪಂದಿಸುತ್ತಿಲ್ಲ ಎಂದು ಕರ್ನಾಟಕ ಜನ ಶಕ್ತಿ ಜಿಲ್ಲಾ ಸಂಚಾಲಕ ಸತೀಶ್ ಅರವಿಂದ್ ಆರೋಪಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖ್ತರ್ ರಜಾ ವೃತ್ತದಿಂದ ಆರ್‌ಟಿಒ ಕಚೇರಿ ವರೆಗೆ ರಸ್ತೆ ಸಂಪೂರ್ಣ ಹಾಳಾಗಿದೆ. ಈ ಬಗ್ಗೆ ಪ್ರಶ್ನಿಸಿದರೆ ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ಅಧಿಕಾರಿಗಳು ಒಬ್ಬರ ಮೇಲೊಬ್ಬರು ಬೆರಳು ತೋರಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಪಾಲಿಕೆ ವ್ಯಾಪ್ತಿಯಲ್ಲಿ ವಾರ್ಡ್ ಕಮಿಟಿ ರಚಿಸಿ ಮೂರು ತಿಂಗಳಿಗೊಮ್ಮೆ ಸಾರ್ವಜನಿಕ ಸಭೆ ನಡೆಸಬೇಕು ಎಂದು ಒತ್ತಾಯಿಸಿದರು.
ವಾರ್ಡುಗಳಲ್ಲಿ ಚರಂಡಿ, ಕುಡಿಯುವ ನೀರು, ರಸ್ತೆ, ಸ್ವಚ್ಛತೆ, ಬೀದಿ ದೀಪ ಸೇರಿದಂತೆ ಮೂಲ ಸೌಲಭ್ಯಗಳ ಕೊರತೆ ಬಗ್ಗೆ ಪಟ್ಟಿ ಮಾಡಿ ಸದಸ್ಯರಿಗೆ ತಿಳಿಸಲಾಗುವುದು. ಸದಸ್ಯರು ಸ್ಪಂದಿಸದಿದ್ದರೆ ಅವರ ಮನೆ ಮುಂದೆ ಧರಣಿ ನಡೆಸಲಾಗುವುದು ಎಂದು ಆಮ್ ಆದ್ಮಿ ಪಾರ್ಟಿಯ ಎಸ್.ಕೆ. ಆದಿಲ್ ಖಾನ್ ಎಚ್ಚರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಸೋಷಿಯಲ್ ಸರ್ವೀಸ್ ಅಧ್ಯಕ್ಷ ಮಹ್ಮದ್ ಹಯಾತ್, ಟಿಪ್ಪು ಟ್ರಸ್ಟ್ ಮುಖಂಡ ಮಹಬೂಬ್ ಭಾಷ, ಜನಶಕ್ತಿ ಅಣ್ಣಪ್ಪ ಮತ್ತಿತರರು ಉಪಸ್ಥಿತರಿದ್ದರು.