ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಅಂತಿಮ ಮುದ್ರೆ ಬಾಕಿ

ಸರ್ಕಾರಿ ಮೆಡಿಕಲ್ ಕಾಲೇಜು  ಸ್ಥಾಪನೆಗೆ ಅಂತಿಮ ಮುದ್ರೆ ಬಾಕಿ

ಬಸವ ನಗರ ಪೊಲೀಸ್ ಠಾಣೆ ನೂತನ ಕಟ್ಟಡ ಉದ್ಘಾಟನೆ 

ದಾವಣಗೆರೆ, ಜ.25- ದಾವಣಗೆರೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಕುರಿತಂತೆ ಈಗಾಗಲೇ ಪ್ರಸ್ತಾವನೆ ಸಿದ್ಧವಾಗಿದ್ದು, ಇದಕ್ಕೆ ಸರ್ಕಾರದಿಂದ ಅಂತಿಮ ಮುದ್ರೆ ಹಾಕುವ ಕೆಲಸ ಬಾಕಿ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ತಿಳಿಸಿದರು.

ಅವರು, ಇಂದು ನಗರದ ಬಸವ ನಗರ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಸುದ್ದಿಗಾರ ರೊಂದಿಗೆ ಮಾತನಾಡಿ, ನಗರದಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಆರಂಭಕ್ಕೆ ಜಾಗ ಸೂಕ್ತವಾಗಿದೆ. ಈ ಬಗ್ಗೆ ಆರೋಗ್ಯ ಸಚಿವರು ಹೆಚ್ಚು ಆಸಕ್ತಿ ವಹಿಸಿದ್ದಾರೆ. ಪ್ರಸ್ತಾವನೆ ಕೂಡ ಸಿದ್ದವಿದೆ. ಸಾರ್ವಜನಿಕ ಸಹಭಾಗಿತ್ವದಲ್ಲಿ ಸರ್ಕಾರಿ ‌ಮೆಡಿಕಲ್ ಕಾಲೇಜು ಆರಂಭಿಸುವ ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿಗಳು ಕೈಗೊಳ್ಳಲಿದ್ದಾರೆ. ಮುಂದಿನ ವಾರ ಮುಖ್ಯಮಂತ್ರಿಗಳೇ ನಗರಕ್ಕೆ ಆಗಮಿಸುತ್ತಿದ್ದು, ಈ ಬಗ್ಗೆ ನಿರ್ಣಯ ಕೈಗೊಳ್ಳುವರು ಎಂದು ಹೇಳಿದರು.

ಮಧ್ಯ ಕರ್ನಾಟಕವಾಗಿರುವ ದಾವಣಗೆರೆಯು ರಾಜ್ಯದ ಹೃದಯ ಭಾಗವಾಗಿರುವುದರಿಂದ ಹಾವೇರಿ, ಹೊಸಪೇಟೆ ಈ ಭಾಗಗಳಿಂದಲೂ ಜನ ಚಿಕಿತ್ಸೆಗಾಗಿ ಆಗಮಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ದಾವಣಗೆರೆ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜು ಅತ್ಯವಶ್ಯಕವಾಗಿದ್ದು, ಕಾಲೇಜು ಬೇಕೇ ಬೇಕು ಎಂದು ರಾಜ್ಯ ಸರ್ಕಾರಕ್ಕೆ ಜಿಲ್ಲಾ ಸಚಿವನಾಗಿ ನಾನು ಈಗಾಗಲೇ ಒತ್ತಾಯವನ್ನು ಮಾಡಿದ್ದೇನೆ. ಮೆಡಿಕಲ್ ಕಾಲೇಜು ಸ್ಥಾಪನೆಗೆ  ಅಂತಿಮವಾಗಿ ಮುದ್ರೆ ಬೀಳಬೇಕಾಗಿದ್ದು, ಅದು ಆಗಲಿದೆ ಎಂಬ ಭರವಸೆ ನೀಡಿದರು.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬದಲಿಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಮುಂಬರುವ ಚುನಾವಣೆಯನ್ನು ಎದುರಿಸುವುದಾಗಿ ಬಿಜೆಪಿ ಪಕ್ಷದ 70 ಜನ ಹೈಕಮಾಂಡ್‌ಗೆ ಪತ್ರ ನೀಡಿರುವ ವಿಚಾರವಾಗಿ ಪ್ರಶ್ನೆಗೆ ಪ್ರತಿಕ್ರಿಸಿದ ಸಚಿವರು, ಈ ರೀತಿಯಾದಂತದ್ದು ಯಾವುದೂ ಇಲ್ಲ. ನಾವೆಲ್ಲ ಒಟ್ಟಾಗಿ ಸೇರಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯಾಗಲೀ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಆಗಲೀ, ನಾವುಗಲಾಗಲೀ ಎಲ್ಲರೂ ಒಗ್ಗಟ್ಟಾಗಿ ಸಾಮೂಹಿಕ ನಾಯಕತ್ವದಲ್ಲಿ ಅಮಿತ್ ಶಾ, ಜೆ.ಪಿ. ನಡ್ಡಾ, ನರೇಂದ್ರ ಮೋದಿ ನೇತೃತ್ವದಲ್ಲಿ ಮುಂಬರುವ ಚುನಾವಣೆಯನ್ನು ಎದುರಿಸಲಿದ್ದು, ಮುಂದಿನ ದಿನಗಳಲ್ಲಿ ನಮ್ಮ ಬಿಜೆಪಿ ಪಕ್ಷವೇ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದರಲ್ಲಿ ಯಾವುದೇ ಸಂಶಯವಿಲ್ಲ. ನಮ್ಮ ಬಿಜೆಪಿ ಸರ್ಕಾರ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಪ್ರಧಾನಿ ನರೇಂದ್ರ ಮೋದಿ ಅವರ ಜನಪರ ಯೋಜನೆಗಳಿಗೆ ಮೆಚ್ಚಿ ನಮಗೆ ಜನ ಬೆಂಬಲವಾಗಿ ನಿಂತಿದ್ದಾರೆ ಎಂದರು.

ನಾನಂತೂ ಯಾವುದೇ ಕಾರಣಕ್ಕೂ ಕಾಂಗ್ರೆಸ್‌ಗೆ ವಾಪಾಸ್‌ ಹೋಗೋದಿಲ್ಲ.‌ಈಗಾಗಲೇ ಈ ಕುರಿತು ಸಾಕಷ್ಟು ಬಾರಿ ಹೇಳಿದ್ದೇನೆ.‌ನನಗೆ ಬಿಜೆಪಿ ಎಲ್ಲವನ್ನೂ ಕೊಟ್ಟಿದೆ. ಬಿಜೆಪಿಗೆ ಬಂದ 17 ಜನರಲ್ಲಿ ಒಂದಿಬ್ಬರು ಹೋಗಬಹುದೇನೋ, ಆದರೆ ನಾನಂತು ಕಾಂಗ್ರೆಸ್‌ಗೆ ಹೋಗುವುದಿಲ್ಲ. ಇಲ್ಲಿ ನನಗೆ ಒಳ್ಳೆಯ ಗೌರವ ಇದೆ. ಅಧಿಕಾರ ಇರಲಿ‌, ಇಲ್ಲದಿರಲಿ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿಯುತ್ತೇನೆ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶೀಘ್ರವೇ ದಾವಣಗೆರೆಗೆ ಆಗಮಿಸಲಿದ್ದಾರೆ . ಬಿಜೆಪಿ ಸಂಘಟನೆ  ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವರು ನಗರಕ್ಕೆ ಭೇಟಿ ನೀಡಲಿದ್ದಾರೆ.ಅವರ ಭೇಟಿಯ ದಿನಾಂಕ ಇನ್ನೂ ನಿಗದಿಗೊಂಡಿಲ್ಲವಾದರೂ ಅವರ ಭದ್ರತೆ ಕುರಿತು ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯೊಂದಿಗೆ ಚರ್ಚೆ ನಡೆಲಾಗುವುದು ಎಂದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಜಿಲ್ಲಾಧಿಕಾರಿ ಶಿವಾನಂದ‌ ಕಾಪಶಿ, ಎಸ್ಪಿ ಸಿ.ಬಿ. ರಿಷ್ಯಂತ್, ಮೇಯರ್ ಜಯಮ್ಮ ಗೋಪಿನಾಯ್ಕ, ದೂಡಾ ಅಧ್ಯಕ್ಷ  ಎ.ವೈ. ಪ್ರಕಾಶ್, ಪಾಲಿಕೆ ಸದಸ್ಯ ಸೋಗಿ ಶಾಂತಕುಮಾರ್, ಉಪ ವಿಭಾಗಾಧಿಕಾರಿ ದುರ್ಗಾಶ್ರೀ, ದೂಡಾ ಆಯುಕ್ತ ಕುಮಾರಸ್ವಾಮಿ ಸೇರಿದಂತೆ ಇತರರು ಇದ್ದರು.

error: Content is protected !!