ಜಿಲ್ಲೆಯ ವಿವಿಧೆಡೆ ನಾಳೆ, ನಾಡಿದ್ದು ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ

ದಾವಣಗೆರೆ, ಮಾ.8- ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭಾ ವಿಪಕ್ಷ ನಾಯಕ ಸಿದ್ದರಾಮಯ್ಯ ಮಾ.10 ಮತ್ತು 11 ರಂದು ಜಿಲ್ಲೆಯ ವಿವಿಧ ಭಾಗಗಳಲ್ಲಿ ನಡೆಯುವ ಪ್ರಜಾಧ್ವನಿ ಸಮಾವೇಶದಲ್ಲಿ ಭಾಗವಹಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ. ಮಂಜಪ್ಪ ತಿಳಿಸಿದರು.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿನ ಆಡಳಿತ ವೈಫಲ್ಯ, ಭ್ರಷ್ಟಾಚಾರದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಹಮ್ಮಿಕೊಂಡಿರುವ ಪ್ರಜಾಧ್ವನಿ ಯಾತ್ರೆಯ ಮುಂದುವರೆದ ಭಾಗವಾಗಿ ಚನ್ನಗಿರಿ, ಮಾಯಕೊಂಡ, ಜಗಳೂರು, ಹೊನ್ನಾಳಿ, ಹರಿಹರ ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಮಾ.10 ರ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಚನ್ನಗಿರಿ, ಸಂಜೆ 4 ಗಂಟೆಗೆ ಮಾಯಕೊಂಡ ಮೀಸಲು ಕ್ಷೇತ್ರದ ವ್ಯಾಪ್ತಿಯ ಬಸವಾಪಟ್ಟಣ ಹಾಗೂ ಸಂಜೆ 6ಕ್ಕೆ ಜಗಳೂರಿನಲ್ಲಿ ಪ್ರಜಾಧ್ವನಿ ಯಾತ್ರೆ ನಡೆಯಲಿದೆ. ಮಾ.11ರ ಶನಿವಾರ ಬೆಳಗ್ಗೆ 11 ಗಂಟೆಗೆ ಹೊನ್ನಾಳಿ, ಮಧ್ಯಾಹ್ನ 3 ಕ್ಕೆ ಹರಿಹರದ ಯಾತ್ರೆಯಲ್ಲಿ ಭಾಗವಹಿಸಿ, ನಂತರ ರಾಣೇಬೆನ್ನೂರಿಗೆ ತೆರಳುವರು ಎಂದರು.

ಯಾತ್ರೆಯಲ್ಲಿ ಸಿದ್ದರಾಮಯ್ಯ ಅವರೊಟ್ಟಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್, ಸತೀಶ್ ಜಾರಕಿಹೊಳಿ, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್, ಮಾಜಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಜಮೀರ್ ಅಹಮ್ಮದ್, ಬಸವರಾಜ ರಾಯರೆಡ್ಡಿ, ಶಾಸಕ ಶಾಮನೂರು ಶಿವಶಂಕರಪ್ಪ ಒಳಗೊಂಡಂತೆ ಅನೇಕ ಗಣ್ಯರು, ಜನಪ್ರತಿನಿಧಿಗಳು ಭಾಗವಹಿಸುವರು ಎಂದರು.

ಬಿಜೆಪಿಯು ಶೇ.40 ಕಮೀಷನ್ ಸರ್ಕಾರವಾಗಿದ್ದು, ರಾಜ್ಯದಲ್ಲಿ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಕಾಂಗ್ರೆಸ್‌ನವರು ಆರೋಪ ಮಾಡಿದಾಗ ಸಾಕ್ಷಿ ಕೊಡಿ ಎಂದು ಬಿಜೆಪಿಯವರು ಹೇಳುತ್ತಿದ್ದರು. ಈಗ ಚನ್ನಗಿರಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರ 40 ಲಕ್ಷ ಲಂಚ ಪಡೆಯುವಾಗ ಲೋಕಾಯುಕ್ತರ ಬಲೆಗೆ ಬಿದ್ದಿದ್ದು ಭ್ರಷ್ಟಚಾರ ಆರೋಪಕ್ಕೆ ಕನ್ನಡಿ ಹಿಡಿದಂತಿದೆ. ಮುಖ್ಯಮಂತ್ರಿ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಎ.ನಾಗರಾಜ್, ಎಸ್.ಮಲ್ಲಿಕಾರ್ಜುನ್, ಕೆ.ಜಿ.ಶಿವಕುಮಾರ್, ಪ್ರಕಾಶ್ ಪಾಟೀಲ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಅನಿತಾಬಾಯಿ, ಪ್ರಧಾನ ಕಾರ್ಯದರ್ಶಿ ಸುಷ್ಮಾ ಪಾಟೀಲ್, ಎಚ್.ಜೆ. ಮೈನುದ್ದೀನ್, ಸೈಯದ್ ಜಿಕ್ರಿಯಾ ಮತ್ತಿತರರಿದ್ದರು. 

error: Content is protected !!