ದಾವಣಗೆರೆ, ಜ. 16 – ಜಿಲ್ಲೆಯಲ್ಲಿ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಗಳಲ್ಲಿ ಕಾಂಗ್ರೆಸ್ ಅತಿ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಎಂದು ಹೇಳಿರುವ ಶಾಸಕ ಶಾಮನೂರು ಶಿವಶಂಕರಪ್ಪ, ಆಮಿಷಗಳಿಗೆ ಗುರಿಯಾಗದೇ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಗಳನ್ನು ಕಾಂಗ್ರೆಸ್‌ಗೆ ತಂದುಕೊಡುವಂತೆ ಕರೆ ನೀಡಿದ್ದಾರೆ.
ನಗರದ ಬಾಪೂಜಿ ಸಭಾಭವನದಲ್ಲಿ ಆಯೋಜಿಸಲಾಗಿದ್ದ ದಾವಣಗೆರೆ ಉತ್ತರ, ದಕ್ಷಿಣ ಹಾಗೂ ಮಾಯಕೊಂಡ ವಿಧಾನಸಭಾ ಕ್ಷೇತ್ರಗಳ ಗ್ರಾಮ ಪ್ರಜಾಪ್ರತಿನಿಧಿಗಳಿಗೆ ಅಭಿನಂದನೆ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅತಿ ಹೆಚ್ಚು ಜನರು ಚುನಾಯಿತ ರಾಗಿದ್ದರು, ವಿರೋಧಿ ಪಕ್ಷ ನಾವೇ ಗೆದ್ದಿರುವುದಾಗಿ ಹೇಳುತ್ತಿದೆ. ಆ ಪಕ್ಷ ಅಧ್ಯಕ್ಷ ಗಾದಿ ಹಿಡಿಯಲು ಆಮಿಷ ಒಡ್ಡುವ ಸಾಧ್ಯತೆ ಇದೆ ಎಂದು ಹೇಳಿದರು. ಚುನಾಯಿತ ಸದಸ್ಯರು ಆಮಿಷಗಳಿಗೆ ಒಳಗಾಗದೆಯೇ ಎಲ್ಲೆಡೆ ಕಾಂಗ್ರೆಸ್ ಸದಸ್ಯರೇ ಅಧ್ಯಕ್ಷರಾಗುವಂತೆ ಮಾಡಬೇಕು ಎಂದು ಕರೆ ನೀಡಿದರು.
ಬಡವರು ಅಧಿಕಾರಕ್ಕೆ ಬರಲು ಕಾಂಗ್ರೆಸ್ ಪಕ್ಷವೇ ಕಾರಣವಾಗಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿದ್ದರು ಎಂದು ಶಿವಶಂಕರಪ್ಪ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್, ಕೇವಲ ದಾವಣಗೆರೆ ತಾಲ್ಲೂಕಿನಲ್ಲಷ್ಟೇ ಅಲ್ಲದೇ, ಜಿಲ್ಲೆಯಲ್ಲಿ ಹಾಗೂ ರಾಜ್ಯದಲ್ಲೂ ಕಾಂಗ್ರೆಸ್ ಗ್ರಾಮ ಪಂಚಾಯ್ತಿ ಚುನಾವಣೆಗಳಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಿದೆ. ಇದರಿಂದ ಪಕ್ಷದ ವರ್ಚಸ್ಸು ಹೆಚ್ಚಾಗಿದೆ ಎಂದು ಹೇಳಿದರು.
ರಾಜ್ಯ ಬಿಜೆಪಿ ಸರ್ಕಾರ ಮಂತ್ರಿ ಮಂಡಲ ವಿಸ್ತರಣೆ ಮಾಡುತ್ತಲೇ ಕಿತ್ತಾಟ ಆರಂಭವಾಗಿದೆ. ಈ ಕಿತ್ತಾಟ ಇನ್ನೂ ಹೆಚ್ಚಾಗಲಿದೆ, ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ.
– ಶಾಸಕ ಶಾಮನೂರು ಶಿವಶಂಕರಪ್ಪ
ಮೂರು ಸೀಟು ಕಳೆದ ಮುಖಂಡರು
ಜಿಲ್ಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸರಿ ಇದ್ದಾರೆ. ಆದರೆ, ಕೆಲ ಮುಖಂಡರಲ್ಲೇ ಲೋಪ ಇದೆ. ಇಂತಹ ಮುಖಂಡರು ಜಿಲ್ಲೆಯಲ್ಲಿ ಕಾಂಗ್ರೆಸ್‌ಗೆ ಮೂರು ಶಾಸಕ ಸ್ಥಾನ ಬರುವುದನ್ನು ತಪ್ಪಿಸಿದ್ದಾರೆ ಎಂದು ಜಿ.ಪಂ. ಸದಸ್ಯ ಕೆ.ಎಸ್. ಬಸವಂತಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಪಕ್ಷದ್ರೋಹಿಗಳನ್ನು ಹತ್ತಿರ ಇಟ್ಟುಕೊಳ್ಳಬಾರದು ಎಂದರು.
ಇದೇ ರೀತಿ ಮುಂಬರುವ ತಾಲ್ಲೂಕು ಪಂಚಾಯ್ತಿ ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆಗಳಲ್ಲೂ ಸಹ ಕಾಂಗ್ರೆಸ್ ಒಗ್ಗಟ್ಟು ಪ್ರದರ್ಶಿಸುವ ಮೂಲಕ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಬೇಕು ಎಂದು ಕರೆ ನೀಡಿದರು.
ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಎಸ್. ಬಸವಂತಪ್ಪ ಮಾತನಾಡಿ, ಮುಂಬರುವ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯ್ತಿ ಚುನಾವಣೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಮಾರ್ಗದರ್ಶನದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಚುನಾವಣೆಗೆ ಹೋಗಬೇಕಿದೆ. ಜಿಲ್ಲಾ ಪಂಚಾಯ್ತಿಯಿಂದ ಭ್ರಷ್ಟರನ್ನು ಓಡಿಸಿ ಕಾಂಗ್ರೆಸ್‌ನ ಸ್ವಚ್ಛ ಆಡಳಿತ ತರಬೇಕಿದೆ ಎಂದರು.
ಕೆ.ಪಿ.ಸಿ.ಸಿ. ಕಾರ್ಯದರ್ಶಿ ಡಿ. ಬಸವರಾಜ್ ಮಾತನಾಡಿ, ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಿ.ಡಿ.ಯಿಂದ ಸಚಿವರಾದರೆ, ಆರ್‌ಟಿಜಿಎಸ್ ಮೂಲಕ ಸರ್ಕಾರ ನಡೆಯುತ್ತಿದೆ ಎಂದು ಲೇವಡಿ ಮಾಡಿದರು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಬಿ. ಮಂಜಪ್ಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ವೇದಿಕೆಯ ಮೇಲೆ ಎ.ಪಿ.ಎಂ.ಸಿ. ಅಧ್ಯಕ್ಷ ಎಸ್.ಕೆ. ಚಂದ್ರಶೇಖರ್, ಜಿಲ್ಲಾ ಪಂಚಾಯ್ತಿ ಸದಸ್ಯರಾದ ರೇಣುಕಮ್ಮ ಕರಿಬಸಪ್ಪ, ಜಿ.ಸಿ. ನಿಂಗಪ್ಪ, ಕೆ.ಹೆಚ್. ಓಬಳೇಶಪ್ಪ, ಎಸ್.ಸಿ. ಘಟಕದ ಅಧ್ಯಕ್ಷ ಬಿ.ಹೆಚ್. ವೀರಭದ್ರಪ್ಪ, ಕಿಸಾನ್ ಮೋರ್ಚಾ ಅಧ್ಯಕ್ಷ ಬಸವರಾಜ ಶಿವಗಂಗಾ, ಯುವ ಕಾಂಗ್ರೆಸ್ ಅಧ್ಯಕ್ಷ ಖಲೀದ್ ಅಹಮದ್, ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅನಿತಾಬಾಯಿ ಮಾಲತೇಶ್, ಮುಖಂಡರಾದ ತುರ್ಚಘಟ್ಟದ ಬಸವರಾಜಪ್ಪ, ಕೆ.ಜಿ. ಬಸವನಗೌಡ್ರು, ಶಾಮನೂರು ರಾಮಚಂದ್ರಪ್ಪ, ಬಿ.ಕೆ. ಪರಶುರಾಂ, ಕುರುಡಿ ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.