ನ್ಯಾಮತಿ, ಫೆ.12 – ಹೊನ್ನಾಳಿ ಮತ್ತು ನ್ಯಾಮತಿ ಅವಳಿ ತಾಲ್ಲೂಕಿನ 94 ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಸರ್ಕಾರದಿಂದ ಆಡಳಿತ ಅನುಮೋದನೆ ಸಿಕ್ಕಿದ್ದು, 436 ಕೋಟಿ ವೆಚ್ಚದಲ್ಲಿ ಈ ಕಾಮಗಾರಿ ನಡೆಯಲಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದರು.
ಶುಕ್ರವಾರ ತಾಲ್ಲೂಕಿನ ಹೊಸ ಜೋಗ ಗ್ರಾಮದಲ್ಲಿ 70 ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಕಾಮಗಾರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕೆರೆಗಳನ್ನು ತುಂಬಿಸುವ ಕಾಮಗಾರಿ ಬಗ್ಗೆ ಕೊಟ್ಟ ಮಾತಿನಂತೆ ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕಿನ 94 ಕೆರೆಗಳನ್ನು ತುಂಬಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಅನುಮೋದನೆ ಸಿಕ್ಕಿದೆ ಸದಸ್ಯದಲ್ಲೇ ಕಾಮಗಾರಿಗಳು ಆರಂಭಗೊಳ್ಳಲಿವೆ ಎಂದರು. ಅವಳಿ ತಾಲ್ಲೂಕಿನ 94 ಕೆರೆಗಳನ್ನು ತುಂಬಿಸುವ ಈ ಯೋಜನೆಯಿಂದ ಕೆರೆಗಳು ತುಂಬಿ ಅಂತರ್ ಜಲದ ಮಟ್ಟವೂ ಹೆಚ್ಚಲಿದ್ದು, ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.
ಅದೇ ರೀತಿ 72 ಕೋಟಿ ರೂ ವೆಚ್ಚದಲ್ಲಿ ಫಲವನಹಳ್ಳಿ, ಹೊಸಕೊಪ್ಪ ಸೇರಿದಂತೆ 59 ಗ್ರಾಮಗಳ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಅನುಮೋದನೆ ದೊರೆತಿದ್ದು, ಇಲ್ಲಿನ ಜನರ ನಿರಿಕ್ಷೆಯಂತೆ ಸದ್ಯದಲ್ಲೇ ಈ ಕಾಮಗಾರಿಗಳು ಆರಂಭಗೊಳ್ಳಲಿವೆ ಎಂದರು.
ಜಿ. ಪಂ. ಸದಸ್ಯೆ ಉಮಾ ರಮೇಶ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ರವಿಕುಮಾರ್ ತಾಂಡಾಭಿವೃದ್ದಿ ನಿಗಮದ ನಿರ್ದೇಶಕ ಮಾರುತಿ ನಾಯ್ಕ, ಅಜಯ್ ರೆಡ್ಡಿ, ವಿವಿಧ ಇಲಾಖೆ ಅಧಿಕಾರಿಗಳು ಮತ್ತಿತರರು ಇದ್ದರು.