ಹಿಂದಿನ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸದಂತೆ ಎಐಡಿಎಸ್‌ಓ ಆಗ್ರಹ

ದಾವಣಗೆರೆ, ಜು.6- ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಫಾರ್ಮಸಿ ವಿದ್ಯಾರ್ಥಿಗಳಿಗೆ ಹಿಂದಿನ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸದಂತೆ ಆಗ್ರಹಿಸಿ, ‌ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ನಗರದ ಜಯದೇವ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿ ಉಪಕುಲಸಚಿವರಿಗೆ ಮನವಿ ಮಾಡಿದರು.

ಕಳೆದ ಎರಡು ವಾರಗಳಿಂದ ರಾಜ್ಯದ ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಫಾರ್ಮಸಿ ವಿದ್ಯಾರ್ಥಿಗಳು ಒಕ್ಕೊರಲಿನಿಂದ ಸರ್ಕಾರಕ್ಕೆ ಹಿಂದಿನ ಸೆಮಿಸ್ಟರ್ ಪರೀಕ್ಷೆ ರದ್ದುಗೊಳಿಸಿ ಎಂದು ಆಗ್ರಹಿಸುತ್ತಿದ್ದಾರೆ. ಹಲವು ರೀತಿಯಲ್ಲಿ ವಿದ್ಯಾರ್ಥಿಗಳ ಬೇಡಿಕೆಗಳನ್ನು ಸರ್ಕಾರಕ್ಕೆ ತಟ್ಟುವಂತೆ ಮಾಡಲು ಪ್ರಯತ್ನ ನಡೆದಿದೆ.  ಆನ್‌ಲೈನ್ ಚಳುವಳಿ, ಪ್ರಾತಿನಿಧಿಕವಾಗಿ ಕಾಲೇಜು, ವಿವಿಗಳ ಮುಂದೆ ಚಳುವಳಿ, ಪ್ರಾಂಶುಪಾಲರಿಗೆ, ವಿವಿಯ ಕುಲಪತಿಗಳಿಗೆ ಮನವಿ ಪತ್ರ ಸಲ್ಲಿಕೆ, ಉಪಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಮನವಿ ಪತ್ರ ಸಲ್ಲಿಕೆ. ಈ ಎಲ್ಲವೂ ಈಗಾಗಲೇ ನಡೆದಿದೆ. ಆದರೆ, ಸರ್ಕಾರದಿಂದ ಯಾವುದೇ ಪ್ರತ್ಯುತ್ತರ ಇಲ್ಲದ ಕಾರಣ, ವಿದ್ಯಾರ್ಥಿಗಳು ಹೋರಾಟವನ್ನು ಮುಂದಿನ ಹಂತಕ್ಕೆ ತೆಗೆದುಕೊಂಡು ಹೋಗುವ ಅನಿವಾರ್ಯತೆ ಬಂದಿದೆ ಎಂದು ಸಮಿತಿ ಪದಾಧಿಕಾರಿಗಳು ತಿಳಿಸಿದರು. 

ರಾಜ್ಯ ಮಟ್ಟದ ವಿದ್ಯಾರ್ಥಿಗಳ ಹೋರಾಟ ಸಮಿತಿ ಮತ್ತು ಎಐಡಿಎಸ್ಓ ರಾಜ್ಯ ಸಮಿತಿ ಜಂಟಿಯಾಗಿ ಜುಲೈ 3, 2021 ರಂದು ಅಖಿಲ ಕರ್ನಾಟಕ ವಿದ್ಯಾರ್ಥಿಗಳ ಆನ್‌ಲೈನ್ ತರಗತಿ ಬಹಿಷ್ಕಾರಕ್ಕೆ ಕರೆ ನೀಡಿತ್ತು. ಈ ವಿಷಯದ ಹಿನ್ನೆಲೆಯಲ್ಲಿ ದಾವಣಗೆರೆಯಲ್ಲಿ ಸ್ನಾತಕೋತ್ತರ ಹಾಗೂ ಡಿಪ್ಲೋಮಾ ವಿದ್ಯಾರ್ಥಿಗಳೂ ಸಹ ಆನ್‌ಲೈನ್ ತರಗತಿ ಬಹಿಷ್ಕಾರದಲ್ಲಿ  ಭಾಗವಹಿಸಿದ್ದರು. 

ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಸಮಿತಿ ಕಾರ್ಯದರ್ಶಿ ಎನ್. ಪೂಜಾ, ಜಂಟಿ ಕಾರ್ಯದರ್ಶಿ ಕಾವ್ಯ, ಸದಸ್ಯೆ ಪುಷ್ಪಾ ಸೇರಿದಂತೆ ಇತರರು ಭಾಗವಹಿಸಿದ್ದರು.

error: Content is protected !!