ದಾವಣಗೆರೆ,ಜು.21- ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ವಿದ್ಯುತ್ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ದ ಅಖಿಲ ಕರ್ನಾಟಕ ಜಾತ್ಯತೀತ ನಿಖಿಲ್ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಯುವ ಒಕ್ಕೂಟದಿಂದ ನಗರದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.
ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟಿಸಿ, ನಂತರ ರಾಜ್ಯಪಾಲರಿಗೆ ಮನವಿ ರವಾನಿಸುವಂತೆ ಕೋರಿ ಉಪ ವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳಿಗೋಸ್ಕರ ನಡೆಸುವ ಆಡಳಿತವನ್ನು ಪ್ರಜಾಪ್ರಭುತ್ವ ಎನ್ನುತ್ತಾರೆ. ಆದರೆ ಕಳೆದ 2 ವರ್ಷಗಳಿಂದ ಕೊರೊನಾ ಸಾಂಕ್ರಾಮಿಕ ಕಾಯಿಲೆಯಿಂದ ಇಡೀ ದೇಶವೇ ತತ್ತರಿಸಿ ಹೋಗಿದೆ. ಕೋಟ್ಯಾಂತರ ಜನರು ಬೀದಿ ಪಾಲಾಗಿ, ಆರ್ಥಿಕವಾಗಿ ಸಂಕಷ್ಟದಲ್ಲಿದ್ದಾರೆ. ಇಂತಹ ಸಮಯದಲ್ಲಿ ಶ್ರೀಸಾಮಾನ್ಯರ ಬೆನ್ನಿಗೆ ನಿಲ್ಲಬೇಕಾಗಿರುವ ಕೇಂದ್ರ, ರಾಜ್ಯ ಸರ್ಕಾರಗಳು ಬೆಲೆ ಏರಿಕೆ ಮಾಡುವ ಮೂಲಕ ಬಡವರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಪ್ರತಿಭಟನೆಯಲ್ಲಿ ಜೀವನ್, ಕಿರಣ್ ಹುಲ್ಲುಮನೆ, ರಾಜಪ್ಪ, ಸುಭಾನಿ, ಉಮೇಶ್, ಮಂಜು, ಇಬ್ರಾಹಿಂ, ಸಲೀಂ ಸೇರಿದಂತೆ ಇತರರು ಭಾಗವಹಿಸಿದ್ದರು.