ದಾವಣಗೆರೆ, ಆ.2- ಜಗಳೂರು ಕ್ಷೇತ್ರದ ಶಾಸಕ ಎಸ್.ವಿ.ರಾಮಚಂದ್ರ ಅವರಿಗೆ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಂತ್ರಿಮಂಡಲದಲ್ಲಿ ಸಚಿವ ಸ್ಥಾನ ನೀಡುವಂತೆ ಜಿಲ್ಲಾ ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಬಿ.ವೀರಣ್ಣ ಅವರು ಬಿಜೆಪಿ ವರಿಷ್ಠರನ್ನು ಒತ್ತಾಯಿಸಿದ್ದಾರೆ.
ಜಿಲ್ಲೆಯಲ್ಲಿ ಅತ್ಯಂತ ಹಿಂದುಳಿದ ಜಗಳೂರು ವಿಧಾನಸಭಾ ಕ್ಷೇತ್ರಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ನೀಡುವ ಬೇಡಿಕೆ ಮತ್ತೆ ಮುನ್ನೆಲೆಗೆ ಬಂದಿದೆ. ಕಳೆದ 3 ದಶಕಗಳಿಂದ ಮಂತ್ರಿಮಂಡಲದಲ್ಲಿ ಪ್ರಾತಿನಿಧ್ಯ ಸಿಕ್ಕಿಲ್ಲ. ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆ ಹೆಚ್ಚಾಗಿರುವ ಕ್ಷೇತ್ರವಾಗಿದೆ. ಯಾವುದೇ ನೀರಾವರಿ ಸೌಲಭ್ಯವಿಲ್ಲದ, ಕೃಷಿ ಮತ್ತು ಕುಡಿಯುವ ನೀರಿಗೆ ಮಳೆ ನೀರನ್ನೇ ಆಶ್ರಯಿಸಿರುವ ಶಾಶ್ವತ ಬರಪೀಡಿತ ಪ್ರದೇಶ ಎಂದೇ ಬಿಂಬಿತವಾಗಿದೆ. ಅತ್ಯಂತ ಹಿಂದುಳಿದ ಕ್ಷೇತ್ರದಲ್ಲಿ ಅಭಿವೃದ್ಧಿಯು ವೇಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಹಾಗೂ ಸಾಮಾಜಿಕ ನ್ಯಾಯ ಕಲ್ಪಿಸುವ ದಿಸೆಯಲ್ಲಿ ಕ್ಷೇತ್ರಕ್ಕೆ ಈ ಬಾರಿ ಮಂತ್ರಿ ಸ್ಥಾನ ಕಲ್ಪಿಸಬೇಕು ಎಂದು ಅವರು ಹೇಳಿದ್ದಾರೆ.
ಜಿಲ್ಲೆಯ ಏಕೈಕ ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಕ್ಷೇತ್ರವು ಅವಿಭಜಿತ ಚಿತ್ರದುರ್ಗ ಜಿಲ್ಲೆಯಲ್ಲಿದ್ದ ಸಂದರ್ಭದಲ್ಲಿ 1990ರಲ್ಲಿ ಬಂಗಾರಪ್ಪ ಅವರ ಸಂಪುಟದಲ್ಲಿ ಜಿ.ಎಚ್. ಅಶ್ವತ್ದ್ ರೆಡ್ಡಿ ಅವರು ಲೋಕೋಪಯೋಗಿ ಸಚಿವರಾಗಿದ್ದರು, ನಂತರದ ವರ್ಷಗಳಲ್ಲಿ ಈ ಕ್ಷೇತ್ರಕ್ಕೆ ಸೂಕ್ತ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ.
ಶಾಸಕ ಎಸ್.ವಿ. ರಾಮಚಂದ್ರ ಅವರು 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಬಿಜೆಪಿ ಪಕ್ಷದಲ್ಲಿ ಹಿರಿಯರಾಗಿದ್ದಾರೆ. ಜಗಳೂರು ತಾಲ್ಲೂಕಿನ ಕನಸಿನ ಯೋಜನೆಯಾದ ಭದ್ರಾ ಮೇಲ್ಕಂಡೆ ಯೋಜನೆ ಹಾಗೂ 57 ಕೆರೆ ತುಂಬಿಸುವ ಯೋಜನೆ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ರಾಮಚಂದ್ರ ಅವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕು ಎಂದು ವೀರಣ್ಣ ಆಗ್ರಹಿಸಿದ್ದಾರೆ.