ಆಶಾ ಕಾರ್ಯಕರ್ತೆಯರಿಗೆ ಸುಲಭ ಸಾಲ

ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ವಿತರಿಸಿದ ಸಹಕಾರಿ ಸಚಿವ ಸೋಮಶೇಖರ್‌

ದಾವಣಗೆರೆ, ಜೂ. 12 – ಆಶಾ ಕಾರ್ಯಕರ್ತೆ ಯರಿಗೆ ತಲಾ 3,000 ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲಾಗುವುದು ಎಂದು ಸಹಕಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ನಗರದ ಜಿಲ್ಲಾಡಳಿತ ಭವನದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಸಹಕಾರ ಇಲಾಖೆ ಹಾಗೂ ಜಿಲ್ಲೆಯ ಸಹಕಾರ ಸಂಘಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನದ ಚೆಕ್ ವಿತರಣಾ ಸಮಾರಂಭದಲ್ಲಿ ಚೆಕ್ ವಿತರಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಸುಮಾರು 42 ಸಾವಿರ ಆಶಾ ಕಾರ್ಯಕರ್ತೆಯರಿದ್ದು, ಅವರಿಗೆ ತಲಾ 3,000 ರೂ.ಗಳ ಪ್ರೋತ್ಸಾಹ ಧನ ನೀಡಲು ಸುಮಾರು 12 ಕೋಟಿ ರೂ.ಗಳ ಅಗತ್ಯವಿದೆ ಎಂದು ಅಂದಾಜಿಸಲಾಗಿದೆ. ಈ ಹಣವನ್ನು ಸಹಕಾರ ಇಲಾಖೆಯಿಂದ ಕೊಡಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ತಿಳಿಸಿರುವುದಾಗಿ  ಸಚಿವರು ಹೇಳಿದರು.

ಪ್ರತಿ ಜಿಲ್ಲೆಗಳ ಸಹಕಾರಿ ಸಂಸ್ಥೆಗಳಿಂದ ಹಣ ಪಡೆದು, ಆಯಾ ಜಿಲ್ಲೆಗಳ ಕಾರ್ಯಕರ್ತೆಯರಿಗೆ ನೀಡಲು ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಮೊದಲಿಗೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮೂಲಕ ಹಣ ಪಡೆಯಲಾಗುತ್ತದೆ. ಅದಕ್ಕೆ ಕೊರತೆಯಾದರೆ ಮಾತ್ರ ಲಾಭದಲ್ಲಿರುವ ಸಹಕಾರಿ ಸಂಸ್ಥೆಗಳಿಂದ ಹಣ ಪಡೆಯಲಾಗುತ್ತಿದೆ ಎಂದವರು ವಿವರಿಸಿದರು.

ಈಗಾಗಲೇ 12 ಜಿಲ್ಲೆಗಳಲ್ಲಿ 11 ಸಾವಿರ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡಿದ್ದೇವೆ ಎಂದ ಸಚಿವರು, ಯಾರಾದರೂ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ತಲುಪಿಲ್ಲ ಎಂದರೆ ಅವರು ಸಹಕಾರ ಸಂಘಗಳ ಜಂಟಿ ನಿರ್ದೇಶಕರನ್ನು ಸಂಪರ್ಕಿಸಬಹು ದಾಗಿದೆ ಎಂದು ಹೇಳಿದರು. ಮುಂಬರುವ ದಿನಗಳಲ್ಲಿ ಆಶಾ ಕಾರ್ಯಕರ್ತೆಯರಿಗೆ ಕಡಿಮೆ ಬಡ್ಡಿ ದರದಲ್ಲಿ ಜಿಲ್ಲಾ ಸಹಕಾರ ಬ್ಯಾಂಕುಗಳ ಮೂಲಕ ಸಾಲ ನೀಡಲಾಗುವುದು. ಹದಿನೈದು ದಿನಗಳಲ್ಲಿ ಸಹಕಾರ ಇಲಾಖೆಯಿಂದ ಕಾನೂನು ಕ್ರಮ ತೆಗೆದುಕೊಂಡು ಸಾಲ ಕೊಡುವುದಾಗಿ ಸಚಿವರು ಆಶಾ ಕಾರ್ಯಕರ್ತೆಯರಿಗೆ ಭರವಸೆ ನೀಡಿದರು.

ಸಮಾರಂಭ ಉದ್ಘಾಟಿಸಿ ಮಾತನಾಡಿದ ನಗರಾಭಿವೃದ್ಧಿ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್, ತಮ್ಮ ಜೀವ ಲೆಕ್ಕಿಸದೇ ಮನೆ ಮನೆಗೆ ತೆರಳಿ ಆರೋಗ್ಯ ಪರೀಕ್ಷೆ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಹಣ ನೀಡುವುದಕ್ಕಿಂತ ಗೌರವ ನೀಡುವುದೇ ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ ಎಂದರು.

ಸಂಸದ ಜಿ.ಎಂ. ಸಿದ್ದೇಶ್ವರ ಮಾತನಾಡಿ, ಸಹಕಾರ ಇಲಾಖೆಯ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಈಗಾಗಲೇ 52 ಕೋಟಿ ರೂ.ಗಳನ್ನು ಕೊಡಲಾಗಿದೆ. ರಾಜ್ಯದ 41 ಸಾವಿರ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ತಿಳಿಸಿದರು.

ವೇದಿಕೆಯ ಮೇಲೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಎಸ್. ರಾಮಪ್ಪ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ದೀಪಾ ಜಗದೀಶ್, ಪಾಲಿಕೆ ಮೇಯರ್ ಬಿ.ಜಿ. ಅಜಯ್ ಕುಮಾರ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಎಸ್‌ಪಿ ಹನುಮಂತರಾಯ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ವಿ. ಚಂದ್ರಶೇಖರ್, ಶಿವಮೊಗ್ಗ-ದಾವಣಗೆರೆ-ಚಿತ್ರದುರ್ಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಉಪಾಧ್ಯಕ್ಷ ಹೆಚ್.ಕೆ ಬಸಪ್ಪ,  ಪಟ್ಟಣ ಸಹಕಾರ ಸಂಘಗಳ ಒಕ್ಕೂಟದ ಕಾರ್ಯದರ್ಶಿ ಮುರುಗೇಶ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!