ತಾಯಿ-ಮಕ್ಕಳ ಮರಣ ಸಂಖ್ಯೆ ಇಳಿಕೆಗೆ ಕ್ರಮ

100 ಹಾಸಿಗೆಗಳ ತಾಯಿ-ಮಕ್ಕಳ ಆಸ್ಪತ್ರೆಗೆ ಭೂಮಿಪೂಜೆ ನೆರವೇರಿಸಿದ ಸಚಿವ ಶ್ರೀರಾಮುಲು

ದಾವಣಗೆರೆ, ಜು. 4 – ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ಕಡಿಮೆ ಮಾಡಬೇಕೆಂಬ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರಮ ತೆಗೆದುಕೊಳ್ಳುತ್ತಿವೆ ಎಂದಿರುವ ಆರೋಗ್ಯ ಸಚಿವ ಶ್ರೀರಾಮುಲು, ಇದಕ್ಕಾಗಿಯೇ ತಾಯಿ -ಮಕ್ಕಳ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತಿದೆ ಎಂದಿದ್ದಾರೆ.

ಶನಿವಾರ ನಗರದ ಚಿಗಟೇರಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಕೇಂದ್ರ ಹಾಗೂ ರಾಜ್ಯಗಳ ಸಹಭಾಗಿತ್ವದಲ್ಲಿ ಸುಮಾರು ರೂ. 21 ಕೋಟಿ ವೆಚ್ಚದಲ್ಲಿ 100 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಜೊತೆಗೆ ವೈದ್ಯರು/ಶುಶ್ರೂಷಕರ ವಸತಿ ಗೃಹ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ಸಂದರ್ಭದಲ್ಲಿ ಅವರು ಈ ಹೇಳಿಕೆ ನೀಡಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರಿಂಗ್ ಘಟಕ ದಾವಣಗೆರೆ ಇವರ ವತಿಯಿಂದ ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 100 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನಾ ಸಮಾರಂಭದ ಕಾರ್ಯಕ್ರಮ ಆಯೋಜಿಸಲಾಗಿತ್ತು.

ತಾಯಿ ಮತ್ತು ಮಕ್ಕಳ ಮರಣ ಪ್ರಮಾಣವನ್ನು ತಗ್ಗಿಸಲು ರಾಜ್ಯದಲ್ಲಿ ಪ್ರಸ್ತುತ 17 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿವೆ. ದಾವಣಗೆರೆ ಸುತ್ತಮುತ್ತಲಿನ ಜನತೆಗೆ ಅನುಕೂಲವಾಗುವ ಉದ್ದೇಶದಿಂದ ಸಂಸದರಾದ ಜಿ.ಎಂ.ಸಿದ್ದೇಶ್ವರ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ದಾವಣಗೆರೆ ಜಿಲ್ಲೆಗೆ ಒಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬೇಕೆಂದು ಮಂಜೂರು ಮಾಡಿಸಿದ್ದಾರೆ ಎಂದು ಹೇಳಿದರು. ಈ ಆಸ್ಪತ್ರೆಯ ಕಾಮಗಾರಿಯನ್ನು ನಿಗದಿತ 15 ತಿಂಗಳ ಒಳಗೆ ಮುಗಿಸಿ ನಂತರ ಸಂಸದರು, ಉಸ್ತುವಾರಿ ಸಚಿವರು, ಶಾಸಕರೆಲ್ಲ ಸೇರಿ ಉದ್ಘಾಟನೆಯನ್ನೂ ಸಹ ನೆರವೇರಿಸುತ್ತೇವೆ ಎಂದು ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ತಾಯಿ ಮತ್ತು ಮಕ್ಕಳ ಮರಣ ಪ್ರಮಾಣ ಇಳಿಮುಖವಾಗಿರುವುದಕ್ಕೆ ಕೇಂದ್ರ ಸರ್ಕಾರ ಪ್ರಶಂಸೆ ವ್ಯಕ್ತಪಡಿಸಿದೆ ಎಂದೂ ಅವರು ಇದೇ ಸಂದರ್ಭದಲ್ಲಿ ಹೇಳಿದರು.  

ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಮಾತನಾಡಿ, ಇಂದು ಜಿಲ್ಲಾಸ್ಪತ್ರೆ ಆವರಣದಲ್ಲಿ ಸಚಿವರು, ಸಂಸದರು, ಶಾಸಕರು ಸೇರಿದಂತೆ ಎಲ್ಲರ ಸಹಯೋಗದೊಂದಿಗೆ ತಾಯಿ ಮತ್ತು ಮಕ್ಕಳ ನೂತನ ಆಸ್ಪತ್ರೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ.15 ತಿಂಗಳಲ್ಲಿ ಈ ಕಾಮಗಾರಿಗಳನ್ನು ಮುಗಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ದಾವಣಗೆರೆ ನಗರವನ್ನು ಹಸಿರು ನಗರವನ್ನಾಗಿ ಮಾಡಲು ಸುಮಾರು 6500 ಸಸಿ ನೆಡುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಸ್ಮಾರ್ಟ್‍ಸಿಟಿ ಯೋಜನೆಯಡಿ ಸುಮಾರು ರೂ.15 ಕೋಟಿ ಅನುದಾನದಲ್ಲಿ ವಿವಿಧ ಕಾಮಗಾರಿಗಳಿಗೆ ಪೂಜೆ ನೆರವೇರಿಸಲಾಗುತ್ತಿದೆ. ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಜಿಲ್ಲೆಗೆ ಅನೇಕ ಅಭಿವೃದ್ದಿ ಕಾಮಗಾರಿಗಳನ್ನು ಸಮರ್ಪಣೆ ಮಾಡುತ್ತಿದ್ದೇವೆ ಎಂದರು. 

ಈ ಸಂದರ್ಭದಲ್ಲಿ ಸಂಸದ ಜಿ.ಎಂ. ಸಿದ್ದೇಶ್ವರ, ಶಾಸಕರಾದ ರವೀಂದ್ರನಾಥ್, ಮಾಡಾಳ್ ವಿರೂಪಾಕ್ಷಪ್ಪ, ಎಸ್.ವಿ.ರಾಮಚಂದ್ರ, ಪ್ರೊ.ಲಿಂಗಣ್ಣ, ಪಾಲಿಕೆ ಮೇಯರ್ ಅಜಯ್ ಕುಮಾರ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ದೀಪಾ ಜಗದೀಶ್, ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್‍ಪಿ ಹನುಮಂತರಾಯ, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಮಲ್ಲಾಪುರ, ಮಹಾನಗರಪಾಲಿಕೆ ಆಯುಕ್ತ ವಿಶ್ವನಾಥ್ ಮುದಜ್ಜಿ, ಜಿಲ್ಲಾಸ್ಪತ್ರೆ ಡಿಎಸ್ ಡಾ.ನಾಗರಾಜ್, ಡಿಹೆಚ್‍ಓ ಡಾ.ರಾಘವೇಂದ್ರಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

error: Content is protected !!